ಬಳ್ಳಾರಿ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆ ಕೋವಿಡ್ ಅವ್ಯವಹಾರ ಆಗಿದ್ರೆ;ದಾಖಲೆ ನೀಡಿ: ಜಿಪಂ ಅಧ್ಯಕ್ಷೆ ಭಾರತಿ ತಿಮ್ಮಾರೆಡ್ಡಿ

0
89

ಬಳ್ಳಾರಿ,ಆ.29 : ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿಯನ್ನು ಅತ್ಯಂತ ಸಮರ್ಪಕವಾಗಿ ನಿರ್ವಹಿಸಲಾಗುತ್ತಿದೆ; ಕೋವಿಡ್ ಊಟ, ಸಲಕರಣೆಗಳ ಖರೀದಿಯಲ್ಲಿ ಅವ್ಯವಹಾರ;ಸರಿಯಾಗಿ ನಿರ್ವಹಿಸುತ್ತಿಲ್ಲ ಎಂಬ ದೂರುಗಳಿದ್ರೇ ದಾಖಲೆಗಳನ್ನು ಒದಗಿಸಿ ಅವುಗಳನ್ನು ಪರಿಶೀಲಿಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ ಅವರು ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ನಡೆದ ಜಿಪಂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊರೊನಾ ಸಂಬಂಧಿಸಿದಂತೆ ಇನ್ನಷ್ಟು ಐಇಸಿ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳುವಂತೆ ಡಿಎಚ್‍ಒ ಅವರಿಗೆ ಸೂಚನೆ ನೀಡಿದ ಅವರು ಜಿಲ್ಲೆಯಲ್ಲಿ ಕೋವಿಡ್ ಸಂಬಂಧಿತ ಎಸ್‍ಒಪಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದರು.
ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಇದುವರೆಗೆ 20 ಸಾವಿರ ಪ್ರಕರಣಗಳು ದೃಢಪಟ್ಟಿದ್ದು,ಅವುಗಳಲ್ಲಿ 15500ಕ್ಕೂ ಹೆಚ್ಚು ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದರು.ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ರೀತಿಯ ಸಮಸ್ಯೆ ನಮ್ಮ ಜಿಲ್ಲೆಯಲ್ಲಿಲ್ಲ ಮತ್ತು ಸಮರ್ಪಕ ಪ್ರಮಾಣ ನಮ್ಮಲ್ಲಿದೆ ಎಂದು ಸ್ಪಷ್ಟಪಡಿಸಿದ ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಆಕ್ಸಿಜನ್ ಉತ್ಪಾದನೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಾಗುತ್ತಿದೆ. ಹೊರ ರಾಜ್ಯ ಹಾಗೂ ಹೊರ ಜಿಲ್ಲೆಗಳಿಗೆ ನಮ್ಮಿಂದ ನೀಡಲಾಗುತ್ತಿದೆ ಎಂದು ಜಿಪಂ ಸದಸ್ಯ ಮಾನಯ್ಯ,ವೆಂಕಟೇಶ ಹಾಗೂ ಇನ್ನೀತರರು ಸಭೆಯಲ್ಲಿ ಪ್ರಸ್ತಾಪಿಸಿದಕ್ಕೆ ಉತ್ತರಿಸಿದರು.
ಕೊರೊನಾ ಆರಂಭದ ದಿನದಲ್ಲಿ ವೈದ್ಯರು ಸೊಂಕಿತರ ವಾರ್ಡ್‍ಗೊಳಗೆ ಹೋಗುವುದಕ್ಕೆ ಹಿಂಜರಿಯುತ್ತಿದ್ದರೂ;ಈಗ ಆ ರೀತಿ ಇಲ್ಲ ಎಲ್ಲರೂ ಒಳಗಡೆ ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ;ನಾನು ಮತ್ತು ಜಿಲ್ಲಾಧಿಕಾರಿಗಳು ಅಲ್ಲಿನ ಸಿಸಿಟಿವಿ ಪರಿಶೀಲಿಸಿ ದೃಢಪಡಿಸಿಕೊಂಡಿದ್ದೇವೆ ಎಂದು ಡಿಎಚ್‍ಒ ಡಾ.ಜನಾರ್ಧನ್ ಅವರು ಸ್ಪಷ್ಟಪಡಿಸಿದರು.

ತಾಲೂಕು ಆಸ್ಪತ್ರೆಗಳಲ್ಲಿ ಹೈಫ್ಲೋ ಆಕ್ಸಿಜನ್ ಪ್ರಮಾಣ ಹೆಚ್ಚಿಸಬೇಕು ಮತ್ತು ರೆಮ್ಡಿಸಿವಿಯರ್ ಇಂಜೆಕ್ಸನ್ ಸಮರ್ಪಕವಾಗಿ ಒದಗಿಸಬೇಕು ಎಂದು ಜಿಪಂ ಸದಸ್ಯರೊಬ್ಬರು ಸಭೆಯಲ್ಲಿ ಪ್ರಸ್ತಾಪಿಸಿದರು.
ಜಿಲ್ಲೆಯಲ್ಲಿ 965 ರೆಮ್ಡಿಸಿವಿಯರ್ ಇಂಜೆಕ್ಷನ್‍ಗಳು ನಮ್ಮಲ್ಲಿದ್ದು, ತಾಲೂಕು ಆಸ್ಪತ್ರೆಗಳಿಗೆ ತಲಾ 30 ರೆಮ್ಡಿಸಿವಿಯರ್ ಇಂಜೆಕ್ಷನ್‍ಗಳು ಒದಗಿಸಲಾಗಿದೆ;ಇನ್ನೂ ಅಗತ್ಯವಿರುವಷ್ಟು ಒದಗಿಸಲಾಗುವುದು ಮತ್ತು ಹೈಫ್ಲೋ ಆಕ್ಸಿಜನ್ ವ್ಯವಸ್ಥೆ ಪ್ರಮಾಣ ಹೆಚ್ಚಳಕ್ಕೂ ಗಮನಹರಿಸಲಾಗುವುದು ಎಂದು ಡಿಎಚ್‍ಒ ಡಾ.ಜನಾರ್ಧನ್ ಅವರು ವಿವರಿಸಿದರು.

ಯೂರಿಯಾ ಸಮರ್ಪಕ ಪೂರೈಕೆಗೆ ಸೂಚನೆ: ಜಿಲ್ಲೆಯ ರೈತರಿಗೆ ಸಮರ್ಪಕ ಪ್ರಮಾಣದಲ್ಲಿ ಯೂರಿಯಾ ಗೊಬ್ಬರವನ್ನು ಪೂರೈಸಬೇಕು;ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ ಎಂದು ಜಿಪಂ ಅಧ್ಯಕ್ಷೆ ಸಿ.ಭಾರತಿ ತಿಮ್ಮಾರೆಡ್ಡಿ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯೂರಿಯಾ ಗೊಬ್ಬರವನ್ನು ನಮ್ಮ ಜಿಲ್ಲೆಯಿಂದ ಬೇರೆ ಜಿಲ್ಲೆಗಳಿಗೆ ರವಾನಿಸಲಾಗುತ್ತಿದೆ ಮತ್ತು ಕಾಳಸಂತೆಯಲ್ಲಿ ಅಧಿಕ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿದ್ದು;ಇದಕ್ಕೆ ಅಧಿಕಾರಿಗಳು ಕಡಿವಾಣ ಹಾಕಬೇಕು ಎಂದು ಸೂಚಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಮಲ್ಲಿಕಾರ್ಜುನ ಅವರು ಬಳ್ಳಾರಿ ಜಿಲ್ಲೆಗೆ 12 ಸಾವಿರ ಮೆಟ್ರಿಕ್ ಟನ್ ಯೂರಿಯಾ ಅಗತ್ಯವಿದ್ದು,ಇಂದಿನವರೆಗೆ 11100 ಮೆಟ್ರಿಕ್ ಟನ್ ಯೂರಿಯಾ ಬಂದಿದೆ;ಇನ್ನೇರಡು ದಿನಗಳಲ್ಲಿ 2600 ಮೆಟ್ರಿಕ್ ಟನ್ ಕೂಡ ಬರಲಿದೆ. ಜಿಲ್ಲೆಯಲ್ಲಿರುವ ಎಲ್ಲ ರೈತರಿಗೆ ಈ ವಾರದಲ್ಲಿ ಯೂರಿಯಾ ಗೊಬ್ಬರವನ್ನು ಸಮರ್ಪಕವಾಗಿ ಪೂರೈಸಲಾಗುವುದು ಎಂದು ಅವರು ತಿಳಿಸಿದರು.ಸಂಸದರಾದ ವೈ.ದೇವೆಂದ್ರಪ್ಪ ಹಾಗೂ ಸೈಯದ್ ನಾಸೀರ್ ಹುಸೇನ್ ಅವರು ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಜಿಪಂ ಸದಸ್ಯರು ನೀಡಿರುವ ಸಲಹೆಗಳನ್ನು ಪಡೆದುಕೊಳ್ಳಿ ಸೌಲಭ್ಯಗಳನ್ನು ವಿಸ್ತರಿಸುವ ಸಂದರ್ಭದಲ್ಲಿ ಅವುಗಳನ್ನು ಬಳಸಿಕೊಳ್ಳಿ ಎಂದರು.

ಕೃಷಿ,ಶಿಕ್ಷಣ,ವಿದ್ಯುತ್,ಕ್ರೀಡೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುಧೀರ್ಘ ಚರ್ಚೆಗಳು ನಡೆದವು
ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಪಿ.ದೀನಾ ಮಂಜುನಾಥ ಸೇರಿದಂತೆ ಜಿಪಂನ ವಿವಿಧ ಸ್ಥಾಯಿಸಮಿತಿಗಳ ಅಧ್ಯಕ್ಷರು,ಜಿಲ್ಲಾ ಪಂಚಾಯಿತಿಯ ಸದಸ್ಯರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here