ನಿಗದಿಪಡಿಸಿದ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ, ಬಳ್ಳಾರಿ ತಾಪಂ ಸಾಮಾನ್ಯ ಸಭೆಯಲ್ಲಿ ಇಒ ಬಸಪ್ಪ ಸೂಚನೆ

0
97

ಬಳ್ಳಾರಿ,ಫೆ.9 : ಪ್ರಸಕ್ತ ವರ್ಷದಲ್ಲಿ ಉಳಿದಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಬಾಕಿಯಿರುವ ಎಲ್ಲಾ ಕಾಮಗಾರಿಗಳನ್ನು ಮಾ.10ರೊಳಗೆ ಪೂರ್ಣಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಬಳ್ಳಾರಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ಈ ಅವಧಿಯ ನಂತರ ಯಾವುದೇ ಕಾಮಗಾರಿಗಳಿಗೆ ಸಂಬಂಧಿಸಿದ ಬಿಲ್‍ಗಳಿಗೆ ಅನುಮೋದನೆ ನೀಡಲಾಗುವುದಿಲ್ಲ ಎಂದರು/
ನಗರದ ತಾಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಯಾವುದೇ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸದೆ ಬಾಕಿ ಉಳಿದಿರುವ ಕಾಮಗಾರಿಗಳನ್ನು ಮಾ.10ರ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದ ಅವರು 14ನೇ ಹಣಕಾಸು ಯೋಜನೆ ಅಡಿ ಬಿಡುಗಡೆಯಾಗಿ ಬಳಕೆಯಾಗದೇ ಬಾಕಿ ಉಳಿದಿರುವ ಹಾಗೂ ಅದರ ಬಡ್ಡಿ ಹಣವನ್ನು ಬಳ್ಳಾರಿ ಜಿಪಂ ಸಿಇಒ ಕೆ.ಆರ್.ನಂದಿನಿ ಅವರ ಸೂಚನೆಯಂತೆ ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಬಳಕೆ ಮಾಡಬೇಕು. ಗ್ರಾಮೀಣ ಭಾಗದಲ್ಲಿ ಉತ್ತಮವಾದ ಆಟದ ಮೈದಾನ, ಮಕ್ಕಳ ಸ್ನೇಹಿ ವಾತಾವರಣವನ್ನು ಒಳಗೊಂಡ ಶಾಲೆ, ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಅಂಗನವಾಡಿ ಕೇಂದ್ರ ಮತ್ತು ಗ್ರಂಥಾಲಯಗಳನ್ನು ನಿರ್ಮಿಸಲು ಈ ಅನುದಾನವನ್ನು ಬಳಸಬೇಕು ಎಂದರು.

ಫೆಬ್ರುವರಿ ಅಂತ್ಯದಲ್ಲಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಸೇರಿಸಲು ಕ್ರಮ:

ಕೋವಿಡ್ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಮತ್ತು ಗರ್ಭಿಣಿಯರ ಹಾರೈಕೆ ಒಳಗೊಂಡಂತೆ ಹಲವಾರು ಕಾರ್ಯಗಳನ್ನು ಮಾಡಿದ್ದೇವೆ. ಸುಪ್ರೀಂಕೋರ್ಟ್‍ನ ನಿರ್ದೇಶನದ ಮೇರೆಗೆ ಫೆಬ್ರವರಿ ತಿಂಗಳ ಕೊನೆಯ ವಾರದಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳನ್ನು ಸೇರಿಸಬೇಕು ಎಂದು ಆದೇಶಿಸಲಾಗಿದೆ ಎಂದು ಶಿಶುಅಭಿವೃದ್ಧಿ ಯೋಜನಾಧಿಕಾರಿ ಉಷಾ ಅವರು ಸಭೆಗೆ ತಿಳಿಸಿದರು.
ಈ ಆದೇಶದ ಅನ್ವಯ ಮಕ್ಕಳ ಪೋಷಕರಿಗೆ ಮನವೋಲಿಸಿ, ಅಂಗನವಾಡಿ ಕೇಂದ್ರಗಳಿಗೆ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡುವ ಮೂಲಕ ಅಂಗನವಾಡಿಗಳಿಗೆ ಮಕ್ಕಳನ್ನು ಕರೆತಂದು ಚಟುವಟಿಕೆಗಳನ್ನು ಪುನರ್ ಆರಂಭಿಸಲು ಜಿಲ್ಲೆಯಲ್ಲಿ ಕ್ರಮವಹಿಸಲಾಗುತ್ತಿದೆ ಎಂದರು.

ಗೋ ಹತ್ಯೆ ಕಂಡುಬಂದಲ್ಲಿ ಕಾನೂನು ಕ್ರಮ:

ಈಗಾಗಲೇ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಯಾಗಿದ್ದು ಯಾರೂ ಹಸು, ಎತ್ತು, ಹೋರಿಗಳ, ಮಾಂಸ ಸೇವನೆ ಮತ್ತು ಅಕ್ರಮವಾಗಿ ಸಾಗಿಸುವುದನ್ನು ನಿಷೇಧಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿ ಡಾ.ಶ್ರೀನಿವಾಸ್ ಸಭೆಗೆ ತಿಳಿಸಿದರು.
ಕೃಷಿ ಮತ್ತು ಹಾಲು ಉತ್ಪಾದನೆಗಾಗಿ ಹಸು ಮತ್ತು ಎತ್ತುಗಳನ್ನು ಖರೀದಿಸಲು ಮತ್ತು ಮಾರಾಟ ಮಾಡಲು ಆಯಾ ಗ್ರಾಮದ ಸ್ಥಳೀಯ ಪಶುವೈದ್ಯರ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಗೋ ಹತ್ಯೆ ನಿಷೇಧದ ಕುರಿತು ಎಲ್ಲರಿಗೂ ಮಾಹಿತಿ ನೀಡುವ ಉದ್ದೇಶದಿಂದ ಭಿತ್ತಿಚಿತ್ರಗಳ ಮೂಲಕ ಅರಿವು ಮೂಡಿಸಲಾಗುತ್ತದೆ. ಇದರ ನಂತರವು ಯಾರಾದರು ಗೋ ಹತ್ಯೆ ಮಾಡಿದ್ದು ಕಂಡು ಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮಕೈಗೊಳ್ಳಲಾಗುವುದು ಎಂದರು.
ತಾಪಂ ಅಧ್ಯಕ್ಷೆ ಲೀಲಾವತಿ ಅವರು ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸುಧೀರ್ಘವಾಗಿ ಚರ್ಚಿಸಿದರು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ಟಿ.ಪುಷ್ಪಾವತಿ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಇನ್ನೀತರರು ಇದ್ದರು.

LEAVE A REPLY

Please enter your comment!
Please enter your name here