ಗ್ರಾಮ ವಾಸ್ತವ್ಯ ಮೂಲಕ ಜನರ ಸಮಸ್ಯೆ ಪರಿಹರಿಸಿ– ಜಿಲ್ಲಾಧಿಕಾರಿ

0
80

ಹಾಸನ ಫೆ. 18 :- ಗ್ರಾಮ ವಾಸ್ತವ್ಯ ನಡೆಸುವ ಮೂಲಕ ಜನರ ಸಮಸ್ಯೆಗಳನ್ನು ಅರಿತು ಶೀಘ್ರವಾಗಿ ಪರಿಹರಿಸಿ ಎಂದು ತಹಶೀಲ್ದಾರ್‍ಗಳಿಗೆ ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜಿಲ್ಲೆಯ ಎಲ್ಲಾ ತಹಶೀಲ್ದಾರ್‍ಗಳೊಂದಿಗೆ ಗ್ರಾಮ ವಾಸ್ತವ್ಯ ಕುರಿತು ಸಭೆ ನಡೆಸಿ ಮಾತನಾಡಿದ ಅವರು ಗ್ರಾಮ ವಾಸ್ತವ್ಯ ಕುರಿತು ಸಾರ್ವಜನಿಕರಿಗೆ ಹೆಚ್ಚು ಪ್ರಚಾರವಾಗುವಂತೆ ಕ್ರಮವಹಿಸಿ ಎಂದು ಸೂಚಿಸಿದರು.
ಜನ ಪ್ರತಿನಿಧಿಗಳನ್ನು ಸಂಜೆ ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಬಗರ್ ಹುಕುಂ ಕುರಿತು ಸಭೆಗಳನ್ನು ಪ್ರಾರಂಭ ಮಾಡಿ ಬಾಕಿ ಇರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು, ಬೇಟಿ ನೀಡುವ ಗ್ರಾಮವನ್ನು ಹೊರತು ಪಡಿಸಿ ಬೇರೆ ಗ್ರಾಮಗಳಿಗೆ ಆಯಾ ತಾಲ್ಲೂಕಿನ ತಹಶೀಲ್ದಾರ್ ಗಳು ತಂಗಳಿಗೊಮ್ಮೆ ವಾಸ್ತವ್ಯ ಹೂಡಿ ಕಂದಾಯ ಇಲಾಖೆಗೆ ಸಂಬಂದಿಸಿದ ಸಮಸ್ಯೆಗಳನ್ನು ಪರಿಹರಿಸಲು ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಮುಖ್ಯವಾಗಿ ಕಂದಾಯ ಇಲಾಖೆ ವ್ಯಾಪ್ತಿಗೆ ಸಂಬಂದಿಸಿದ ಭೂಮಿ ದಾಖಲೆಗಳು, ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳು, ಪಡಿತರ ವಿತರಣೆ, ಬೆಳೆ ಹಾನಿ, ವಸತಿ, ಸ್ಮಶಾನ ಭೂಮಿ, ಮತ್ತಿತರ ವಿಷಯಗಳ ಕುರಿತು ಅರ್ಜಿಗಳನ್ನು ಪರಿಶೀಲಿಸಿ ಕೂಡಲೇ ವಿಲೇವಾರಿಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗ್ರಾಮ ವಾಸ್ತವ್ಯದ ವೇಳೆ ಹೂಡುವಾಗ ಅಧಿಕಾರಿಗಳು ಅಲ್ಲಿರುವಂತಹ ಶಾಲೆ ಅಥವಾ ಹಾಸ್ಟೇಲ್‍ಗಳಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜರಾಂ, ತಹಶೀಲ್ದಾರ್ ಶಿವಶಂಕರಪ್ಪ ಹಾಜರಿದ್ದರು.

LEAVE A REPLY

Please enter your comment!
Please enter your name here