ನಗರ ಹಾಗೂ ಗ್ರಾಮೀಣ ಪ್ರದೇಶದ ರಸ್ತೆ, ಸರ್ಕಾರಿ ಭೂಮಿ ಅತಿಕ್ರಮಿಸಿ ನಿರ್ಮಿಸಿರುವ ಕಟ್ಟಡ, ಇತರೆ ನಿರ್ಮಾಣಗಳನ್ನು ಸ್ವಯಂ ಪ್ರೇರಣೆಯಿಂದ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

0
133

ಧಾರವಾಡ.ಮಾ. 25: ಸರ್ವೋಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ಉಚ್ಛ ನ್ಯಾಯಾಲಯವು ನೀಡಿರುವ ಆದೇಶದಂತೆ ಜಿಲ್ಲೆಯಲ್ಲಿ ವಿವಿಧ ಪ್ರಕಾರದ ರಸ್ತೆ, ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿ, ಅತಿಕ್ರಮಣ ಮಾಡಿ ನಿರ್ಮಿಸಿರುವ ದೇವಸ್ಥಾನ, ಮಸೀದಿ ಸೇರಿದಂತೆ ವಿವಿಧ ಧಾರ್ಮಿಕ ಕಟ್ಟಡಗಳು ಸೇರಿದಂತೆ ಎಲ್ಲ ರೀತಿಯ ಕಟ್ಟಡ, ಇತರೆ ನಿರ್ಮಾಣಗಳನ್ನು ತೆರವುಗೊಳಿಸಲು ಕಾರ್ಯಾಚರಣೆ ಆರಂಭಿಸಲಾಗಿದ್ದು, ಒತ್ತುವರಿದಾರರು ಸ್ವಯಂ ಪ್ರೇರಣೆಯಿಂದ ಒತ್ತುವರಿ ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಅತಿಕ್ರಮಣ ಹಾಗೂ ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯನ್ನು ತೀವೃಗೊಳಿಸಲು ಈಗಾಗಲೇ ತಹಶೀಲ್ದಾರ, ಪಟ್ಟಣ ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳ ಸಭೆ ಜರುಗಿಸಿ ನಿರ್ದೇಶನ ನೀಡಲಾಗಿದೆ. ಶೀಘ್ರದಲ್ಲಿ ಧಾರವಾಡ ನಗರದ ಮುಖ್ಯ ಮಾರುಕಟ್ಟೆ ಹಾಗೂ ಇತರ ಪ್ರದೇಶಗಳಲ್ಲಿನ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನ್ಯಾಯಾಲಯದ ಆದೇಶವನ್ನು ಪಾಲಿಸುವ ಮೂಲಕ ಅನಧಿಕೃತವಾಗಿ ಮತ್ತು ಅತಿಕ್ರಮಣ ಮಾಡಿರುವ ಕಟ್ಟಡ ಹಾಗೂ ಇತರ ನಿರ್ಮಾಣಗಳನ್ನು ತೆರವುಗೊಳಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಮಾಡಲಾಗುತ್ತಿದೆ. ಒತ್ತುವರಿದಾರರು ತಾವೇ ಖುದ್ದಾಗಿ ಕಾರ್ಯಾಚರಣೆ ಪೂರ್ವದಲ್ಲಿ ತೆರವುಗೊಳಿಸಬೇಕು.

ಹುಬ್ಬಳ್ಳಿ ನಗರ, ಕುಂದಗೋಳ, ಅಣ್ಣೀಗೇರಿ ಪಟ್ಟಣಗಳಲ್ಲಿ ಈಗಾಗಲೇ ಕೆಲವು ದಿನಗಳಿಂದ ತೆರವು ಕಾರ್ಯಾಚರಣೆ ನಡೆದಿದ್ದು, ಉಳಿದಂತೆ ಜಿಲ್ಲೆಯ ಇತರ ನಗರ, ಪಟ್ಟಣ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಹಂತಹಂತವಾಗಿ ಆರಂಭಿಸಲಾಗುತ್ತಿದೆ. ಗ್ರಾಮೀಣ ಪ್ರದೇಶದ ಒತ್ತುವರಿ ತೆರವುಗೊಳಿಸಲು ಪಿಡಿಓ ಹಾಗೂ ಗ್ರಾಮಲೆಕ್ಕಾಧಿಕಾರಿ ಮೂಲಕ ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ತಿಳಿಸಲಾಗಿದೆ. ಆದ್ದರಿಂದ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತ್ ಮತ್ತು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿನ ಸರ್ಕಾರಿ ಜಮೀನು ಒತ್ತುವರಿ ಹಾಗೂ ಅತಿಕ್ರಮಣ ಮಾಡಿರುವವರು ಈಗಲೇ, ಸ್ವಯಂ ಪ್ರೇರಣೆಯಿಂದ ತೆರವುಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here