39 ವಾರ್ಡ್‍ಗಳ ಚುನಾವಣೆಗೆ ಅಗತ್ಯ ಸಿದ್ಧತೆ ಕೈಗೊಂಡ ಜಿಲ್ಲಾಡಳಿತ,340882 ಮತದಾರರು,8 ಕಡೆ ನಾಮಪತ್ರಗಳ ಸ್ವೀಕಾರ ಮಹಾನಗರ ಪಾಲಿಕೆ ಚುನಾವಣೆ:ಏ.8ರಿಂದ ನಾಮಪತ್ರ ಸಲ್ಲಿಕೆ: ಡಿಸಿ ಮಾಲಪಾಟಿ

0
87

ಬಳ್ಳಾರಿ,ಏ.07 : ಬಳ್ಳಾರಿ ಮಹಾನಗರಪಾಲಿಕೆಯಲ್ಲಿ ಗುರುವಾರದಿಂದ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದ್ದು, ನಾಮಪತ್ರ ಸಲ್ಲಿಕೆಯು ಶುರುವಾಗಲಿದೆ. ಇದರಿಂದಾಗಿ ನಗರದಲ್ಲಿ ಚುನಾವಣಾಕಣ ಮತ್ತಷ್ಟು ರಂಗೇರಲಿದೆ.
ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಏ.8ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಏ.8ರಿಂದ 15ರವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ. ಏ.16 ರಂದು ನಾಮಪತ್ರಗಳ ಪರಿಶೀಲನೆ,ಏ.19 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಏ.27ರಂದು 39 ವಾರ್ಡ್‍ಗಳಲ್ಲಿ ಕಣದಲ್ಲಿರುವವರ ಅದೃಷ್ಟ ಪರೀಕ್ಷೆಗೆ ಚುನಾವಣೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾಡಳಿತ ಎಲ್ಲ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಬಳ್ಳಾರಿ ನಗರದ 39 ವಾರ್ಡ್‍ಗಳಲ್ಲಿ 333 ಮೂಲ ಮತಗಟ್ಟೆಗಳು ಹಾಗೂ 11 ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು 344 ಮತಗಟ್ಟೆ ಕೇಂದ್ರಗಳಲ್ಲಿ ಏ.27ರಂದು ಮತದಾನ ನಡೆಯಲಿದೆ. ಇದಕ್ಕೆ ಪಿಆರ್‍ಒ,ಎಪಿಆರ್‍ಒ,ಪಿಓ ಸೇರಿದಂತೆ ಒಟ್ಟು 1376 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದ ಡಿಸಿ ಮಾಲಪಾಟಿ ಅವರು ಏ.30ರಂದು ಮತ ಎಣಿಕೆ ಕಾರ್ಯ ನಗರದ ಸರಕಾರಿ ಐಟಿಐ ಕಾಲೇಜು ಅಥವಾ ಸಂತ್‍ಜಾನ್ ಪ್ರೌಢಶಾಲೆ ಯಾವುದಾದರೂ ಒಂದು ಸ್ಥಳದಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದರು.
*ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳ ನೇಮಕ: ಬಳ್ಳಾರಿ ನಗರದ 39 ವಾರ್ಡ್‍ಗಳ ಚುನಾವಣಾ ಪ್ರಕ್ರಿಯೆಗಾಗಿ 8 ಜನ ಚುನಾವಣಾಧಿಕಾರಿಗಳು ಮತ್ತು 8 ಜನರ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಲಪಾಟಿ ಅವರು ವಿವರಿಸಿದರು.
ತಲಾ 5 ವಾರ್ಡ್‍ಗಳಿಗೆ ಓರ್ವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಆಯಾ ವಾರ್ಡ್‍ಗಳಿಗೆ ಉಮೇದುವಾರಿಕೆ ಬಯಸುವ ಅಭ್ಯರ್ಥಿಗಳು ತಮ್ಮ ವ್ಯಾಪ್ತಿಗೆ ಬರುವ ಚುನಾವಣಾ ಅಧಿಕಾರಿಗಳಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಅವರು ಹೇಳಿದರು.
ಚುನಾವಣೆಗೆ ನಾಮಪತ್ರ ಸಲ್ಲಿಸಲು ಪರಿಶಿಷ್ಟ ಜಾತಿ ಮತ್ತು ಪ.ಪಂಗಡದ ಅಭ್ಯರ್ಥಿಗಳು 2500 ಹಾಗೂ ಇತರೆ ಅಭ್ಯರ್ಥಿಗಳು 5000 ಠೇವಣಿ ಸಲ್ಲಿಸಬೇಕು.

ಚುನಾವಣಾ ಅಕ್ರಮಗಳಿಗೆ ಬ್ರೇಕ್ ಹಾಕಲು ಪ್ರತಿ ವಾರ್ಡ್‍ಗೆ ಒಂದೊಂದು ಎಂಸಿಸಿ ತಂಡ: ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣೀಡುವ ನಿಟ್ಟಿನಲ್ಲಿ ಪ್ರತಿ ವಾರ್ಡ್‍ಗಳಿಗೆ ಒಂದೊಂದು ಎಂಸಿಸಿ ತಂಡಗಳನ್ನು ರಚಿಸಲಾಗಿದೆ ಎಂದು ವಿವರಿಸಿದ ಡಿಸಿ ಮಾಲಪಾಟಿ ಅವರು ಪ್ರತಿ ಎಂಸಿಸಿ ತಂಡದಲ್ಲಿ ಚುನಾವಣಾಧಿಕಾರಿ, ಸೆಕ್ಟರೋಲ್ ಅಧಿಕಾರಿಗಳು,ಕಂದಾಯ ನಿರೀಕ್ಷಕರು ಮತ್ತು ಬಿಲ್ ಕಲೆಕ್ಟರ್ ಇರಲಿದ್ದಾರೆ. ಇವರ ಜೊತೆಗೆ ಪೊಲೀಸ್ ಸಿಬ್ಬಂದಿಯೂ ಇರಲಿದ್ದಾರೆ ಎಂದು ಅವರು ವಿವರಿಸಿದರು.
26 ಸೆಕ್ಟರೋಲ್ ಅಧಿಕಾರಿಗಳನ್ನು ಹಾಗೂ 05 ಜನ ಮಾಸ್ಟರ್ ಟ್ರೈನರ್‍ಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ವಿವರಿಸಿದ ಡಿಸಿ ಮಾಲಪಾಟಿ ಅವರು ಮತದಾನ ಪ್ರಕ್ರಿಯೆಗೆ 400 ಬ್ಯಾಲೆಟ್ ಯೂನಿಟ್ ಮತ್ತು 400 ಕಂಟ್ರೋಲ್ ಯೂನಿಟ್ ಸೇರಿದಂತೆ ಒಟ್ಟು 800 ಮತಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.
ಅಭ್ಯರ್ಥಿಗಳು ರಾಜ್ಯ ಚುನಾವಣಾ ಆಯೋಗದ ಆದೇಶದಂತೆ 3 ಲಕ್ಷಕ್ಕಿಂತ ಹೆಚ್ಚಿನ ಹಣ ವೆಚ್ಚ ಮಾಡುವಂತಿಲ್ಲ ಎಂದು ತಿಳಿಸಿದ ಅವರು ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪೇಯ್ಡ್ ನ್ಯೂಸ್ ರೂಪದ ಸುದ್ದಿಗಳು ಪ್ರಕಟವಾದಲ್ಲಿ ಸಂಬಂಧಿಸಿದ ಅಭ್ಯರ್ಥಿಗಳ ವೆಚ್ಚಕ್ಕೆ ನಿಯಮಾನುಸಾರ ಜಮಾಗೊಳಿಸಲಾಗುವುದು ಎಂದರು.
*ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳ ವಿವರ ಮತ್ತು ಚುನಾವಣಾ ಕಚೇರಿ ಸ್ಥಳ: 1ರಿಂದ5 ನೇ ವಾರ್ಡ್‍ಗಳಿಗೆ ಸಂಬಂಧಿಸಿದಂತೆ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಎಸ್.ಪಿ.ಬೋಗೇರಿ(9448999248)ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಮತ್ತು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಮುಖ್ಬಲ್ ಹುಸೇನ್ (8971902792) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ನಾಮಪತ್ರ ಸಲ್ಲಿಸುವವರು ತಾಲೂಕು ಕಚೇರಿ ಆವರಣದ ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು.
6 ರಿಂದ 10ನೇ ವಾರ್ಡ್‍ಗಳಿಗೆ ಸಂಬಂಧಿಸಿದಂತೆ ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ವಿ.ಸುದೀರ್ (9480409030) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾದ ಬಿ.ಆರ್.ಪಾಲಕ್ಷಗೌಡ (8277934294) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಉಮೇದುವಾರಿಕೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ತಾಲೂಕು ಕಚೇರಿ ಆವರಣದಲ್ಲಿರುವ ಕೃಷಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ.
11ರಿಂದ 15 ವಾರ್ಡ್‍ಗೆ ನಾಮಪತ್ರ ಸಲ್ಲಿಸುವವರು ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳಾದ ಹಟ್ಟೆಪ್ಪ (9945602881) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಣ್ಣ (9449593156)ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ.
16ರಿಂದ20 ವಾರ್ಡ್‍ಗೆ ಸಂಬಂಧಿಸಿದಂತೆ ಜಿಪಂ ಸಹಾಯಕ ಕಾರ್ಯದರ್ಶಿಗಳಾದ (ಆಡಳಿತ) ಪ್ರಮೋದ್ (9845455596) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಾಂತೇಶ್ ಕೆ.ಜೆ.ಕಂಚಿಮಠ (9901313417)ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಸದರಿ ವಾರ್ಡ್‍ಗಳಿಗೆ ಸಂಬಂಧಿಸಿದಂತೆ ಉಮೇದುವಾರಿಕೆ ಬಯಸಲು ಇಚ್ಛಿಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.
21ರಿಂದ25 ವಾರ್ಡ್‍ಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಸಂಖ್ಯಾ ಸಂಗ್ರಹಾಣಾಧಿಕಾರಿಗಳಾದ ವಾಗೀಶ್ ಶಿವಾಚಾರ್ಯ (9686965089) ಅವರನ್ನ ಚುನಾವಣಾಧಿಕಾರಿಗಳನ್ನಾಗಿ ಹಾಗೂ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ವಸಂತ ಕುಮಾರ್ (8095367328) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ವಾರ್ಡ್‍ಗಳಿಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.
26ರಿಂದ30 ವಾರ್ಡ್‍ಗಳಿಗೆ ಸಂಬಂಧಿಸಿದಂತೆ ಕೃಷಿ ಇಲಾಖೆಯ ಉಪನಿರ್ದೇಶಕರಾದ ಶ್ರೀಧರ್.ವೈ (9880969105) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ಸಹಾಯಕ ಯೋಜನಾ ಸಮನ್ವಯ ಅಧಿಕಾರಿಗಳಾದ ಶಿವಲಿಂಗರೆಡ್ಡಿ (9449448187) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ವಾರ್ಡ್‍ಗಳಿಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ತಾಲೂಕು ಕಚೇರಿ ಆವರಣದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.
31ರಿಂದ35 ವಾರ್ಡ್‍ಗಳಿಗೆ ಸಂಬಂಧಿಸಿದಂತೆ ಬುಡಾ ಆಯುಕ್ತ ವೀರೇಂದ್ರ ಕುಂದಗೋಳ (9448612188) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ರವಿಶಂಕರ್ (9448057225) ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ವಾರ್ಡ್‍ಗಳಿಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ಬುಡಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.
36ರಿಂದ39 ವಾರ್ಡ್‍ಗಳಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ನಾಗರಾಜ.ಆರ್ (8951988622) ಅವರನ್ನು ಚುನಾವಣಾಧಿಕಾರಿಗಳನ್ನಾಗಿ ಹಾಗೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಸೋಮಶೇಖರ್ (963274166) ಅವರನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಈ ವಾರ್ಡ್‍ಗಳಿಗೆ ಸ್ಪರ್ಧಿಸಲು ಇಚ್ಛಿಸುವ ಅಭ್ಯರ್ಥಿಗಳು ನಗರದ ಎಸ್ಪಿ ವೃತ್ತದಲ್ಲಿರುವ ಬಳ್ಳಾರಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದಾಗಿದೆ.
*ಒಟ್ಟು ಮತದಾರರ ಸಂಖ್ಯೆ 3,40,882 : ಚುನಾವಣಾ ಆಯೋಗವು ನಗರದ 39 ವಾರ್ಡ್‍ಗಳಲ್ಲಿ ಏ.5ರಂದು ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯಂತೆ 1,66,298 ಪುರುಷ ಮತದಾರರು ಹಾಗೂ 1,74,538 ಮಹಿಳಾ ಮತದಾರರು ಮತ್ತು 36 ಜನ ಇತರೆ ಮತದಾರರು ಸೇರಿದಂತೆ ಒಟ್ಟು 3,40,882 ಜನ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಲಪಾಟಿ ಅವರು ವಿವರಿಸಿದರು.
ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ ತೊಂದರೆ ಆಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಶೇ.40ರಿಂದ 50ರಷ್ಟು ಸಾರಿಗೆ ವಾಹನಗಳು ರಸ್ತೆಗೆ ಇಳಿದಿದ್ದು, ಒಂದೆರಡು ದಿನದಲ್ಲಿ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಇದನ್ನು ತಡೆಯವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ಪ್ರಕರಣಗಳು ಕಂಡು ಬಂದ ಪ್ರದೇಶಗಳನ್ನು ಸೀಲ್‍ಡೌನ್ ಮಾಡುವ ಮೂಲಕ ರೋಗದ ಹರಡುವಿಕೆಯನ್ನು ಕಡಿಮೆ ಮಾಡಲಾಗುತ್ತಿದೆ ಎಂದರು.
*900 ರೌಡಿ ಶೀಟರ್‍ಗಳಿಗೆ ಎಚ್ಚರಿಕೆ: ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಸುಸೂತ್ರವಾಗಿ ಜರುಗುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್ ಅವರು ನಗರದಲ್ಲಿರುವ 900 ರೌಡಿಶೀಟರ್‍ಗಳಿಗೆ ಚುನಾವಣಾ ಸಂದರ್ಭದಲ್ಲಿ ಅಶಾಂತಿ ಮೂಡಿಸಲು ಯತ್ನಿಸಿದರೇ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ನಗರದಲ್ಲಿ 449 ಜನರಲ್ಲಿ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳಿದ್ದು,ಅವುಗಳನ್ನು ಇದೇ ಏ.10ರೊಳಗೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ಡಿಪಾಸಿಟ್ ಮಾಡುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
ರಾಜಕೀಯ ಪಕ್ಷಗಳ ಸಭೆ-ಸಮಾರಂಭಗಳಲ್ಲಿ ನಿಗದಿಪಡಿಸಿದಕ್ಕಿಂತ ಹೆಚ್ಚಿನ ಜನರು ಪಾಲ್ಗೊಂಡಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ,ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here