ಕೋವಿಡ್-19 ನಿಯಂತ್ರಣ; ಸರ್ಕಾರದ ಹೊಸ ಮಾರ್ಗಸೂಚಿ ಪಾಲನೆಗೆ ಡಿಸಿ ಸೂಚನೆ

0
135

ಮಡಿಕೇರಿ -ಕೋವಿಡ್-19 ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಶ್ರಮಿಸುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕಫ್ರ್ಯೂ ಜಾರಿಗೊಳಿಸಿದೆ. ಇದು ಮೇ, 4 ರವರೆಗೆ ಜಾರಿಯಲ್ಲಿದ್ದು, ಅದರಂತೆ ಮಾರ್ಗಸೂಚಿ ಪಾಲಿಸುವಲ್ಲಿ ಅಗತ್ಯ ಕ್ರಮವಹಿಸಬೇಕು ಎಂದರು.
ರಾತ್ರಿ ಕಫ್ರ್ಯೂ ಸಮಯದಲ್ಲಿ ತುರ್ತು ಸಂಚಾರ ಹೊರತುಪಡಿಸಿ ಇತರೆ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ. ಶನಿವಾರ ಮತ್ತು ಭಾನುವಾರ ಪೂರ್ಣ ಕಫ್ರ್ಯೂ ಇರಲಿದೆ. ಮದುವೆ ಸಂದರ್ಭದಲ್ಲಿ 50 ಜನ ಮೀರಬಾರದು ಎಂದರು.
ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ಕಫ್ರ್ಯೂ ಇರಲಿದೆ. ನಗರ ಪಟ್ಟಣ ಮತ್ತು ಜನದಟ್ಟಣೆ ಪ್ರದೇಶದಲ್ಲಿ ಮಾಸ್ಕ್ ಬಳಸುತ್ತಿದ್ದಾರೆಯೇ ಎಂಬುದನ್ನು ಗಮನಿಸಬೇಕು. ಮಾಸ್ಕ್ ಬಳಸದಿರುವುದು ಕಂಡುಬಂದಲ್ಲಿ ಸ್ಥಳದಲ್ಲಿಯೇ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಕೊರೊನಾ ವೈರಸ್ ಎರಡನೇ ಅಲೆಯು ವೇಗವಾಗಿ ಹರಡುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸರ್ಕಾರಿ ಕಚೇರಿಗಳಿಗೆ ಹೊರಗಿನಿಂದ ಬರುವವರಿಗೆ ಸ್ಯಾನಿಟೈಸರ್ ನೀಡಬೇಕು ಎಂದರು.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸನ್ನದ್ಧರಾಗಿ ಕೆಲಸ ಮಾಡಬೇಕು. ಜಾಗೃತಿ ಮೂಡಿಸಬೇಕು ಎಂದು ಅವರು ಹೇಳಿದರು.
ಕೋವಿಡ್ ಕೇರ್ ಸೆಂಟರ್ ಮತ್ತು ಹೋಂ ಕ್ವಾರಂಟೈನ್‍ನಲ್ಲಿ ಹೆಚ್ಚಿನ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ, ಕಾಲೇಜುಗಳು, ಕೋಚಿಂಗ್ ಕೇಂದ್ರಗಳು ಮುಚ್ಚಿರಲಿದ್ದು, ಆನ್‍ಲೈನ್ ಶಿಕ್ಷಣ ಮುಂದುವರೆಸಬಹುದಾಗಿದೆ. ಆ ನಿಟ್ಟಿನಲ್ಲಿ ಡಿಡಿಪಿಐ ಮತ್ತು ಡಿಡಿಪಿಯು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಸಿನಿಮಾ ಹಾಲ್‍ಗಳು, ಶಾಪಿಂಗ್ ಮಾಲ್, ಜಿಮ್ನಾಷಿಯಂ, ಯೋಗ ಕೇಂದ್ರಗಳು, ಕ್ರೀಡಾ ಕೇಂದ್ರಗಳು, ಸ್ಟೇಡಿಯಂ, ಈಜುಕೊಳ, ಮನರಂಜನೆ. ಬಾರ್ ಮತ್ತು ಅಡಿಟೋರಿಯಂಗಗಳು ಮುಚ್ಚಿರಲಿವೆ, ಹಾಗೆಯೇ ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕøತಿಕ, ಧಾರ್ಮಿಕ ಸಮಾವೇಶಗಳು ಇರುವುದಿಲ್ಲ. ಆದ್ದರಿಂದ ಈ ಬಗ್ಗೆ ಗಮನಹರಿಸಬೇಕು ಎಂದರು.
ಆಟದ ಮೈದಾನದಲ್ಲಿ ಯಾವುದೇ ಕ್ರೀಡಾಕೂಟಗಳು ಇದ್ದಲ್ಲಿ ಪ್ರೇಕ್ಷಕರಿಗೆ ಅವಕಾಶ ಇರುವುದಿಲ್ಲ. ಆದರೆ ಕ್ರೀಡಾಪಟುಗಳ ತರಬೇತಿಗೆ ಅವಕಾಶವಿದೆ. ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ, ಪ್ರಾರ್ಥನಾ ಮಂದಿರಗಳಿಗೆ ಭಕ್ತರಿಗೆ ಅವಕಾಶ ಇರುವುದಿಲ್ಲ. ಆದರೆ ಪೂಜಾ ಕಾರ್ಯ ನಡೆಸಲು ಅರ್ಚಕರಿಗೆ ಅವಕಾಶವಿದೆ ಎಂದರು.
ಆಯಾಯ ಧರ್ಮಗಳ ಧಾರ್ಮಿಕ ವಿಧಿ ವಿಧಾನ ನಡೆಸಲು ಅವಕಾಶವಿದ್ದು, ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಪಾರ್ಸೆಲ್ ಮಾತ್ರ ಪಡೆದುಕೊಂಡು ಹೋಗಲು ಅವಕಾಶವಿದೆ. ಮದುವೆ ಸಮಾರಂಭದಲ್ಲಿ 50 ಜನರೊಳಗೆ ಅವಕಾಶವಿದೆ. ಶವ ಸಂಸ್ಕಾರ ಅಂತಿಮ ದರ್ಶನಕ್ಕೆ 20 ಜನರಿಗಷ್ಟೇ ಅವಕಾಶವಿದ್ದು, ಈ ಬಗ್ಗೆ ಗಮನಹರಿಸಬೇಕು ಎಂದರು.
ಎಲ್ಲಾ ರೀತಿಯ ನಿರ್ಮಾಣ ಚಟುವಟಿಕೆಗಳು, ರಿಪೇರಿ ಚಟುವಟಿಕೆಗಳಿಗೆ ಅವಕಾಶವಿದೆ. ಮುಂಗಾರು ಪೂರ್ವ ಕಾಮಗಾರಿಗಳನ್ನು ಕೈಗೊಳ್ಳಬಹುದು. ಈ ಸಂದರ್ಭದಲ್ಲಿ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
ಕಿರಾಣಿ ಅಂಗಡಿ, ನ್ಯಾಯಬೆಲೆ ಅಂಗಡಿ, ಆಹಾರ ಪದಾರ್ಥಗಳು, ಹಣ್ಣು, ತರಕಾರಿ, ಹಾಲು, ಡೈರಿ ಉತ್ಪನ್ನ ಮತ್ತು ಇತರ ಉತ್ಪನ್ನಗಳು, ಮೀನು, ಮಾಂಸ ಮಾರಾಟಕ್ಕೆ ಅವಕಾಶವಿದೆ ಎಂದರು.
ಹಣ್ಣು, ತರಕಾರಿ ಮಾರಾಟ ಸಂಬಂಧ ಮುಕ್ತ ಅಥವಾ ಮೈದಾನ ಪ್ರದೇಶದಲ್ಲಿ ತರಕಾರಿ ಮಾರಾಟ ಮಾಡಲು ಅವಕಾಶ ಮಾಡುವಂತೆ ಪೌರಾಯುಕ್ತರಿಗೆ ಸೂಚಿಸಿದರು.
ಲಾಡ್ಜ್ ಮತ್ತು ಹೋಟೆಲ್‍ಗಳಲ್ಲಿ ಉಳಿದುಕೊಂಡ ಅತಿಥಿಗಳಿಗೆ ಆಹಾರ ಪೂರೈಕೆ ಮಾಡಬಹುದು. ಸಲೂನು, ಬ್ಯೂಟಿಪಾರ್ಲರ್‍ಗಳು ಕೋವಿಡ್ ನಿಯಮ ಪಾಲಿಸಿ ಕಾರ್ಯಾಚರಣೆ ಮಾಡಬಹುದು. ಬಸ್ ಓಡಾಟಕ್ಕೆ ಅವಕಾಶವಿದ್ದು, ಶೇ.50 ರಷ್ಟು ಮಾತ್ರ ಅವಕಾಶವಿದೆ. ಪೆಟ್ರೋಲ್ ಬಂಕ್, ಗ್ಯಾಸ್ ಸೇವೆಗಳು ಲಭ್ಯವಿರುತ್ತದೆ. ಆರೋಗ್ಯ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳನ್ನು ನಡೆಸಬಹುದು. ಆಸ್ಪತ್ರೆ, ಪ್ರಯೋಗಾಲಯ ತೆರೆಯಬಹುದಾಗಿದೆ. ಈ ಸಂಬಂಧ ಜಿಲ್ಲೆಯಲ್ಲಿ ನಿಯಮ ಪಾಲಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ಪ್ರತಿ ಹಂತದ ಅಧಿಕಾರಿಗಳು ಸರ್ಕಾರ ಹೊರಡಿಸಿರುವ ನಿಯಮಗಳನ್ನು ಚಾಚು ತಪ್ಪದೇ ಪಾಲಿಸಬೇಕು. ಕೋವಿಡ್ ನಿಯಮ ಮಾರ್ಗಸೂಚಿ ಉಲ್ಲಂಘಿಸಿದಲ್ಲಿ ದೂರು ದಾಖಲಿಸುವುದರ ಜೊತೆಗೆ ದಂಡ ವಿಧಿಸಲಾಗುತ್ತದೆ. ಪರಿಸ್ಥಿತಿಯನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು 45 ವರ್ಷ ಮೇಲ್ಪಟ್ಟವರು ಕೋವಿಡ್ 19 ಲಸಿಕೆ ಪಡೆಯುವ ನಿಟ್ಟಿನಲ್ಲಿ ಶನಿವಾರ ಮತ್ತು ಭಾನುವಾರ ಸಹ ಅವಕಾಶವಿದ್ದು, ಆ ನಿಟ್ಟಿನಲ್ಲಿ ಲಸಿಕೆ ಪಡೆಯುವವರಿಗೆ ಯಾವುದೇ ರೀತಿ ತೊಂದರೆಯಾಗಬಾರದು ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಏಪ್ರಿಲ್, 27 ಕ್ಕೆ ನಗರಸಭೆ ಚುನಾವಣೆಯ ಮತದಾನವಿದ್ದು, ಏಪ್ರಿಲ್, 26 ರಂದು ಮಸ್ಟರಿಂಗ್ ಕಾರ್ಯ ನಡೆಯಲಿದೆ. ಆ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಸ್ಯಾನಿಟೈಸರ್ ಮಾಡಬೇಕು ಎಂದು ಅವರು ತಿಳಿಸಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಡಿವೈಎಸ್‍ಪಿ ದಿನೇಶ್ ಕುಮಾರ್, ಜಿ.ಪಂ.ಉಪ ಕಾರ್ಯದರ್ಶಿ ಲಕ್ಷ್ಮೀ, ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್, ಆರ್‍ಟಿಒ ವಿನಯ್, ಡಿಡಿಪಿಯು ವಿಷ್ಣುಮೂರ್ತಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಶೇಖರ್, ತಹಶೀಲ್ದಾರರಾದ ಮಹೇಶ್, ಗೋವಿಂದರಾಜು, ಯೋಗಾನಂದ, ಇತರರು ಇದ್ದರು.

LEAVE A REPLY

Please enter your comment!
Please enter your name here