ಪ್ರಾಕೃತಿಕ ವಿಕೋಪ ಹಾನಿ ತಡೆಯಲು ಸನ್ನದ್ಧರಾಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

0
88

ಮಡಿಕೇರಿ -ರಾಜ್ಯದಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಆ ದಿಸೆಯಲ್ಲಿ ಭೂ ಕುಸಿತ ಹಾಗೂ ಪ್ರವಾಹ ಎದುರಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರ್ದೇಶನ ನೀಡಿದ್ದಾರೆ.
ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ವಿಡಿಯೊ ಸಂವಾದ ಮೂಲಕ ಮಾಹಿತಿ ಪಡೆದು ಅವರು ಮಾತನಾಡಿದರು.
ರಾಜ್ಯದ ಕೆಲವು ಜಿಲ್ಲೆಗಳು ಕಳೆದ ಮೂರು ವರ್ಷಗಳಿಂದ ಒಂದಲ್ಲ ಒಂದು ರೀತಿಯಲ್ಲಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ, ಸಂಕಷ್ಟ ಎದುರಿಸುತ್ತಿವೆ. ಆದ್ದರಿಂದ ಇಂತಹ ಹಾನಿಯನ್ನು ತಡೆಯಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.
ಈಗಾಗಲೇ ನಾಲ್ಕು ಜಿಲ್ಲೆಗಳಿಗೆ ಎನ್‍ಡಿಆರ್‍ಎಫ್ ತಂಡಗಳನ್ನು ಕಳುಹಿಸಲಾಗಿದೆ. ಪ್ರಾಕೃತಿಕ ವಿಕೋಪ ಎದುರಿಸಲು ಎಲ್ಲಾ ರೀತಿಯ ಸನ್ನದ್ದು ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರ್ದೇಶನ ನೀಡಿದರು.
ಅಗತ್ಯವಿರುವೆಡೆ ಪರಿಹಾರ ಕೇಂದ್ರಗಳನ್ನು ತೆರೆದು ಸ್ಥಳಾಂತರಿಸುವುದು. ವೈದ್ಯಕೀಯ ಸವಲತ್ತು ಕಲ್ಪಿಸುವುದು, ಸಂಪನ್ಮೂಲಗಳನ್ನು ಕ್ರೋಢೀಕರಣ ಮಾಡಿಕೊಳ್ಳುವುದು ಮತ್ತಿತರ ಅಗತ್ಯ ತಯಾರಿ ಇರಬೇಕು. ಯಾವುದೇ ರೀತಿಯ ಹಾನಿ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯ ಎಂದು ಮುಖ್ಯಮಂತ್ರಿ ಅವರು ಒತ್ತಿ ಹೇಳಿದರು.
ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ 5 ಲಕ್ಷ ರೂ., ಭಾಗಶಃ ಮನೆ ಹಾನಿಯಾದಲ್ಲಿ 2 ಲಕ್ಷ ರೂ. ಹೀಗೆ ಹಂತ ಹಂತವಾಗಿ ಹಣ ಒದಗಿಸಲಾಗುವುದು. ಹಿಂದೆ ಯಾವ ಮಾನದಂಡ ಇತ್ತು ಅದರಂತೆ ಹಣ ನೀಡಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಪ್ರವಾಹ ಹಾಗೂ ಭೂ ಕುಸಿತ ಪ್ರದೇಶಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಹಣಕಾಸಿನ ತೊಂದರೆಯಿಲ್ಲ. ಆದರೆ ಇರುವ ಹಣವನ್ನು ಬಳಸಬೇಕು. ಮುಂದೆ ಮತ್ತಷ್ಟು ಹಣ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಅವರು ಪ್ರಕಟಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮಾತನಾಡಿ ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಹಾಗೂ ಪ್ರವಾಹದಿಂದಾಗಿ ಜನಜೀವನ ತತ್ತರಿಸಿದೆ. ಆದ್ದರಿಂದ ಶಾಶ್ವತ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ ಎಂದು ಮುಖ್ಯಮಂತ್ರಿ ಅವರ ಗಮನಕ್ಕೆ ತಂದರು.
ಕಳೆದ ಮೂರು ವರ್ಷಗಳಲ್ಲಿ ತಲಕಾವೇರಿ, ಭಾಗಮಂಡಲ, ತೋರ, ಹಾಗೆಯೇ ಮಡಿಕೇರಿ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಭೂ ಕುಸಿತದಿಂದ ಜನ ಜಾನುವಾರು, ಬೆಳೆ ಹಾನಿ ಉಂಟಾಗಿ ತುಂಬಾ ತೊಂದರೆ ಅನುಭವಿಸಿದ್ದಾರೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರಾಕೃತಿಕ ವಿಕೋಪ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ವಿ.ಸೋಮಣ್ಣ ಅವರು ತಿಳಿಸಿದರು.
ಕೊಡಗಿನ ಕಿತ್ತಳೆಗೆ ತನ್ನದೇ ಆದ ಇತಿಹಾಸವಿದ್ದು, ಕೊಡಗಿನಲ್ಲಿ ಬೆಳೆಯುವ ಕಿತ್ತಳೆ ಬೆಳೆಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಮುಖ್ಯಮಂತ್ರಿ ಅವರಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಗಮನ ಸೆಳೆದರು.
ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊಡಗಿನ ಕಿತ್ತಳೆಯನ್ನು ತೆಗೆದುಕೊಂಡು ಬರುವಂತೆ ಹಾಸ್ಯ ಚಟಾಕಿ ಹಾರಿಸಿದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಂಡಿದೆ. ಆ ದಿಸೆಯಲ್ಲಿ ಜಿಲ್ಲೆಯ 72 ಪ್ರದೇಶಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ ಎಂದರು.
ಸೂಕ್ಷ್ಮ ಪ್ರದೇಶಗಳಲ್ಲಿನ ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು. ಜಾನುವಾರುಗಳನ್ನು ಗೋಶಾಲೆಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಈಗಾಗಲೇ ಎನ್‍ಡಿಆರ್‍ಎಫ್ ತಂಡವು ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಿದೆ. ಜೊತೆಗೆ ಜಿಲ್ಲಾಡಳಿತದಿಂದ ಪ್ರಾಕೃತಿಕ ವಿಕೋಪವನ್ನು ಎದುರಿಸುವ ಪ್ರಾತ್ಯಕ್ಷಿಕೆ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ.ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವರಾದ ಆರ್.ಅಶೋಕ್, ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ಪ್ರಭು ಚವ್ಹಾಣ್, ಬಿ.ಸಿ.ಪಾಟೀಲ್, ಶ್ರೀನಿವಾಸ ಪೂಜಾರಿ ಇತರರು ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ಬೆಳಗಾವಿ, ವಿಜಯಪುರ, ಶಿವಮೊಗ್ಗ, ದಕ್ಷಿಣ ಕನ್ನಡ, ರಾಯಚೂರು, ಬೀದರ್, ಯಾದಗಿರಿ, ಕಲ್ಬುರ್ಗಿ, ಉಡುಪಿ, ಉತ್ತರ ಕನ್ನಡ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಯವರು ಪ್ರಾಕೃತಿಕ ವಿಕೋಪ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ವಿಡಿಯೊ ಸಂವಾದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನಾ ಎಂ.ಶೇಖ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ನಟರಾಜು, ಶಿರಸ್ತೆದಾರ್ ಪ್ರಕಾಶ್, ಅನನ್ಯ ವಾಸುದೇವ ಇತರರು ಇದ್ದರು.

LEAVE A REPLY

Please enter your comment!
Please enter your name here