ಕಲ್ಲೋಳ ಬ್ಯಾರೇಜ್, ಮಾಂಜರಿ, ಲೋಳಸೂರ ಸೇತುವೆ ಪರಿಶೀಲನೆ ವ್ಯಾಪಕ ಮಳೆ: ನದಿತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಜಿಸಲು ಜಿಲ್ಲಾಧಿಕಾರಿ ಹಿರೇಮಠ ಸೂಚನೆ

0
61

ಬೆಳಗಾವಿ : ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ನದಿತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಚಿಕ್ಕೋಡಿ, ಕಾಗವಾಡ, ರಾಯಬಾಗ ಹಾಗೂ ಗೋಕಾಕ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ಭಾನುವಾರ ಸಂಚರಿಸಿದ ಅವರು ನದಿ ಹರಿವು ಕುರಿತು ಮಾಹಿತಿಯನ್ನು ಪಡೆದುಕೊಂಡರು.

ಕಲ್ಲೋಳ ಬ್ಯಾರೇಜ್, ಮಾಂಜರಿ, ಕುಡಚಿ ಹಾಗೂ ಲೋಳಸೂರ ಸೇತುವೆಗಳನ್ನು ವೀಕ್ಷಿಸಿದರು.
ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾದರೆ ನದಿಪಾತ್ರದಲ್ಲಿ ಒಳಹರಿವು ಹೆಚ್ಚಾಗುತ್ತದೆ. ಸದ್ಯಕ್ಕೆ ಮಹಾರಾಷ್ಟ್ರ ಹಾಗೂ ಕರ್ನಾಟಕದ ಜಲಾಶಯಗಳಲ್ಲಿ ನೀರಿನಮಟ್ಟ ಕಡಿಮೆ ಇರುವುದರಿಂದ ಪ್ರವಾಹ ಭೀತಿ ಸದ್ಯಕ್ಕಿಲ್ಲ.

ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆಗೆ ಮುಂಚೆ ಮಾಹಿತಿಯನ್ನು ನೀಡಲಾಗುವುದು ಎಂದು ಅಲ್ಲಿನ ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯ ಅಧಿಕಾರಿಗಳು ಕೂಡ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತುರ್ತು ಸಂದರ್ಭದಲ್ಲಿ ಜನರ ರಕ್ಷಣೆಗಾಗಿ ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ತಾಲ್ಲೂಕುವಾರು ನಿಯೋಜಿಸಲಾಗಿರುವ ನೋಡಲ್ ಅಧಿಕಾರಿಗಳ ಸಭೆಯನ್ನು ಕೂಡ ಮಾಡಲಾಗಿದೆ.
ಅತಿವೃಷ್ಟಿ ಹಾಗೂ ಪ್ರವಾಹ ಸೇರಿದಂತೆ ಯಾವುದೇ ತುರ್ತು ಪರಿಸ್ಥಿತಿ ನಿರ್ವಹಣೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ನದಿತೀರದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಬೇಕು ಎಂದು ಅವರು ಮನವಿ ಮಾಡಿಕೊಂಡರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಉಪ ವಿಭಾಗಾಧಿಕಾರಿ ಯುಕೇಶ್ ಕುಮಾರ್ ಹಾಗೂ ಸಂಬಂಧಿಸಿದ ತಾಲ್ಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here