‘ಆಮ್ಲಜನಕ ಉತ್ಪಾದನಾ ಘಟಕ’ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಿದ ಸಂಸದರು ಮತ್ತು ಶಾಸಕರು

0
90

ಮಡಿಕೇರಿ -ಜಿಲ್ಲಾ ಕೋವಿಡ್ ಆಸ್ಪತ್ರೆ ಆವರಣದಲ್ಲಿ ನೂತನ ‘ಆಮ್ಲಜನಕ ಉತ್ಪಾದನಾ ಘಟಕ’ ನಿರ್ಮಾಣಕ್ಕೆ ಸಂಸದರಾದ ಪ್ರತಾಪ್ ಸಿಂಹ ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಮಂಗಳವಾರ ಸ್ಥಳ ಪರಿಶೀಲಿಸಿದರು.
ನಗರದ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ ಅಧಿಕಾರಿಗಳಿಂದ ಸಂಸದರು ಮತ್ತು ಶಾಸಕರು ಮಾಹಿತಿ ಪಡೆದರು.
ಬಳಿಕ ಮಾತನಾಡಿದ ಸಂಸದರಾದ ಪ್ರತಾಪ್ ಸಿಂಹ ಅವರು ಈಗಾಗಲೇ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 13 ಸಾವಿರ ಲೀ. ಸಾಮಥ್ರ್ಯದ ಆಮ್ಲಜನಕ ಉತ್ಪಾದನಾ ಘಟಕವಿದ್ದು, ಜೊತೆಗೆ ಹೆಚ್ಚುವರಿಯಾಗಿ ಪ್ರತೀ ನಿಮಿಷಕ್ಕೆ ಒಂದು ಸಾವಿರ ಲೀ. ಸಾಮಥ್ರ್ಯದ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಜೂರಾತಿ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಆಮ್ಲಜನಕ ಉತ್ಪಾದನಾ ಘಟಕವನ್ನು 1.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಜುಲೈ, 15 ರೊಳಗೆ ಆಮ್ಲಜನಕ ಉತ್ಪಾದನಾ ಘಟಕದ ಕಟ್ಟಡ ನಿರ್ಮಿಸಲು ಉದ್ದೇಶಿಸಲಾಗಿದೆ. ಆ ದಿಸೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಕಾಮಗಾರಿ ವಹಿಸಲಾಗಿದೆ ಎಂದರು.
ಕೋವಿಡ್-19 ಎರಡನೇ ಅಲೆ ಬಂದ ಸಂದರ್ಭದಲ್ಲಿ ಆಮ್ಲಜನಕ ಕೊರತೆ ಮನಗಂಡು 3 ನೇ ಅಲೆ ಬರುವುದರೊಳಗೆ ಹೆಚ್ಚಿನ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ಆಮ್ಲಜನಕ ಉತ್ಪಾದನಾ ಘಟಕ ನಿರ್ಮಿಸುವುದರಿಂದ ಹೊರ ಜಿಲ್ಲೆಗಳಿಂದ ಆಮ್ಲಜನಕ ಪೂರೈಸಿಕೊಳ್ಳುವುದು ತಪ್ಪಲಿದೆ ಎಂದು ಸಂಸದರು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ಆಮ್ಮಜನಕ ಉತ್ಪಾದನಾ ಘಟಕ ನಿರ್ಮಿಸುವಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಳಜಿ ಹೆಚ್ಚಿನದ್ದಾಗಿದೆ. ಹಾಗೆಯೇ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಸುನಿಲ್ ಸುಬ್ರಮಣಿ ಅವರ ಸಲಹೆ, ಮಾರ್ಗದರ್ಶನದಂತೆ ಮಡಿಕೇರಿಯಲ್ಲಿನ ಕೊಡಗು ಜಿಲ್ಲಾ ಕೋವಿಡ್ ಆಸ್ಪತ್ರೆ ಆವರಣದಲ್ಲಿ ನೂತನ ಆಕ್ಸಿಜನ್ ಪ್ಲಾಂಟ್ ಸ್ಥಾಪನೆ ಮಾಡಲಾಗುತ್ತಿದೆ ಎಂದರು.
ಹಾಗೆಯೇ ಮೆಡಿಕಲ್ ಕಾಲೇಜಿನಲ್ಲಿಯೂ ಸಹ ಒಂದು ಆಮ್ಲಜನಕ ಉತ್ಪಾದನಾ ಘಟಕವಿದೆ. ಜೊತೆಗೆ ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಈಗಾಗಲೇ ಆಮ್ಲಜನಕ ಉತ್ಪಾದನಾ ಘಟಕ ಆರಂಭವಾಗಿದೆ. ಸೋಮವಾರಪೇಟೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಆರಂಭವಾಗಲಿದೆ. ಆ ದಿಸೆಯಲ್ಲಿ ಎಲ್ಲಾ ಆಸ್ಪತ್ರೆಗಳಲ್ಲೂ ಅತ್ಯುನ್ನತ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ ಎಂದು ಸಂಸದರು ನುಡಿದರು.
ಶಾಲೆ ಆರಂಭ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದರಾದ ಪ್ರತಾಪ್ ಸಿಂಹ ಅವರು ಕೋವಿಡ್-19 ಸಂಬಂಧಿಸಿದಂತೆ ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ನಿರ್ಧರಿಸಲಿದೆ. ಒಟ್ಟಾರೆ 18 ವರ್ಷ ಮೇಲ್ಪಟ್ಟವರಿಗೆಲ್ಲರಿಗೂ ಕೋವಿಡ್ ನಿರೋಧಕ ಲಸಿಕೆ ನೀಡಿ ಕೋವಿಡ್ ನಿಯಂತ್ರಣಕ್ಕೆ ತರುವುದು ಆದ್ಯತೆಯಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಗತ್ಯವಿರುವೆಡೆ ತಡೆಗೋಡೆ ನಿರ್ಮಾಣ ಮತ್ತು ಚರಂಡಿ ನಿರ್ಮಾಣಕ್ಕೆ ಒತ್ತು ನೀಡಲಾಗಿದೆ. ಆ ದಿಸೆಯಲ್ಲಿ 59 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತದೆ ಎಂದರು.
ಶಾಸಕರಾದ ಕೆ.ಜಿ.ಬೋಪಯ್ಯ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಮೇಶ್ ಹೊಳ್ಳ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ವೈದ್ಯಕೀಯ ಅಧೀಕ್ಷಕರಾದ ಡಾ.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್, ಸ್ಥಾನಿಕ ವೈದ್ಯಾಧಿಕಾರಿ ರೂಪೇಶ್ ಗೋಪಾಲ್, ಡಾ.ವಿಶಾಲ್ ಕುಮಾರ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಬಿ.ಟಿ.ಶ್ರೀಧರ, ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅಶೋಕ್ ಇತರರು ಇದ್ದರು.

LEAVE A REPLY

Please enter your comment!
Please enter your name here