ಜುಲೈ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಶಿಕ್ಷಣ ಸಚಿವ ಸುರೇಶ್‍ಕುಮಾರ್ ಸೂಚನೆ

0
111

ಬಳ್ಳಾರಿ,ಜೂ.29 : ಜುಲೈ 3ನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದ್ದು,ಪರೀಕ್ಷೆಗೆ ಸಂಬಂಧಿಸಿದ ಎಲ್ಲ ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳುವಂತೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶಕುಮಾರ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಪಂ ಸಿಇಒ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,ಶಿಕ್ಷಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸೋಮವಾರ ವಿಡಿಯೋ ಸಂವಾದ ನಡೆಸಿ ಅವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಕೋವಿಡ್ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಒಳಗೊಂಡಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ತತ್‍ಕ್ಷಣದಿಂದ ಮಾಡಿಕೊಳ್ಳುವಂತೆ ಸೂಚನೆ ನೀಡಿದ ಸಚಿವ ಮಾಡಿಕೊಳ್ಳಿ ಎಂದು ಸುರೇಶ್‍ಕುಮಾರ್ ಅವರು ಸೂಚಿಸಿದರು.
ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 8.76 ಲಕ್ಷ ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜುಲೈ 3ನೇ ವಾರದಲ್ಲಿ 2ದಿನಗಳ ಕಾಲ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಪರೀಕ್ಷಾ ಕೇಂದ್ರಗಳು ಮಕ್ಕಳ ಸುರಕ್ಷಾ ಕೇಂದ್ರಗಳಂತೆ;ಅಲ್ಲಿ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಿ. ನಿರ್ಭೀತಿ ಮತ್ತು ನಿರಾತಂಕದಿಂದ ಮಕ್ಕಳು ಪರೀಕ್ಷೆ ಎದುರಿಸಲು ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಡಿಕೊಳ್ಳಿ ಎಂದು ಅವರು ಸೂಚಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ: ಪರೀಕ್ಷಾ ಕೆಂದ್ರದ 200 ಮೀಟರ್ ಅಂತರದಲ್ಲಿ ಪರೀಕ್ಷೆ ನಡೆಯುವ ಎರಡು ದಿನ ನಿಷೇಧಾಜ್ಞೆ ಜಾರಿ ಮಾಡಿ ಯಾವುದೇ ರೀತಿಯ ಸೈಬರ್ ಸೆಂಟರ್ಸ್, ಕಂಪ್ಯೂಟರ್ ಶಾಪ್ ತೆರೆಯದಂತೆ ನೋಡಿಕೊಳ್ಳಿ. ಹೋಂ ಐಸೋಲೇಶನ್‍ನಲ್ಲಿರುವ ಮಕ್ಕಳು ಪರೀಕ್ಷೆ ಬರೆಯಲು ಒಪ್ಪಿದರೆ ಅವರಿಗೆ ಪ್ರತ್ಯೇಕವಾಗಿ ಕೋವಿಡ್ ಕೇರ್ ಸೆಂಟರ್‍ನಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಿ. ಕೊರೊನಾ ಲಕ್ಷಣಗಳು ಕಂಡು ಬಂದವರನ್ನು ಪ್ರತ್ಯೇಕವಾಗಿರಿಸಿ ಪರೀಕ್ಷೆ ನಡೆಸಲು ಸೂಚಿಸಿದರು.
ಮಾರ್ಗಸೂಚಿ ಅನ್ವಯ ಪರೀಕ್ಷೆ: ಕೋವಿಡ್ ಮಾರ್ಗಸೂಚಿ ಅನ್ವಯ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ 4 ಬಾರಿ ಸ್ಯಾನಿಟೈಸ್ ಮಾಡಲಾಗುವುದು. ಒಂದು ಕೊಠಡಿಯಲ್ಲಿ 12ಜನ ವಿದ್ಯಾರ್ಥಿಗಳಿಗೆ ಅವಕಾಶ ನೀಡಿ. ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸ್ಯಾನಿಟೈಸ್ ಬಳಸಲಾಗುತ್ತದೆ.
4884 ಪರೀಕ್ಷಾ ಕೇಂದ್ರಗಳಲ್ಲಿ 73066 ಕೊಠಡಿಗಳಲ್ಲಿ ಒಂದು ಕೊಠಡಿಗೆ 12 ಜನ ವಿದ್ಯಾರ್ಥಿಗಳಂತೆ ಪರೀಕ್ಷೆ ನಡೆಸಲಾಗುತ್ತದೆ. ಪ್ರತಿ ವಿದ್ಯಾರ್ಥಿಗೆ ಹತ್ತಿರವಿರುವ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಪರೀಕ್ಷಾ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರು, ಸಿಬ್ಬಂದಿ ವರ್ಗ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಸೂಚಿಸಿದರು.
ಈ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತು ಸಚಿವರಿಗೆ ವಿವರಿಸಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ, ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್,ಡಿಡಿಪಿಐ ರಾಮಪ್ಪ ಮತ್ತು ಇತರೆ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here