ಮಕ್ಕಳ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ – ಡಾ.ಆರ್. ಜಿ. ಆನಂದ್.

0
109

ಕೋಲಾರ: ಮಕ್ಕಳಿಗೆ ಇರುವ ಮೂಲಭೂತ ಹಕ್ಕುಗಳನ್ನು ಒದಗಿಸಲು ಹಾಗು ಮಕ್ಕಳ ರಕ್ಷಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ರಾಷ್ಟೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಆರ್. ಜಿ ಆನಂದ್ ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ ಅವರು ಮಾತನಾಡಿದರು. ಈ ಸಭೆಯ ಮುಖ್ಯ ಉದ್ದೇಶ ಮಕ್ಕಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದಾಗಿದೆ ಎಂದು ಅವರು ಹೇಳಿದರು.
ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು ಜಿಲ್ಲೆಯಲ್ಲಿ ಹೋಟೆಲ್‍ಗಳು, ಕಾರ್ಖಾನೆಗಳು, ಕಟ್ಟಡ ಕೆಲಸಗಳು ಮತ್ತು ಅಂಗಡಿಗಳಲ್ಲಿ ಕೆಲಸ ಮಾಡುವ ಬಾಲಕಾರ್ಮಿಕರನ್ನು ಗುರುತಿಸಿ ಬಾಲಕಾರ್ಮಿಕ ಪದ್ದತಿಯಿಂದ ಬಿಡುಗಡೆಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಳಾದ ಡಾ.ಆರ್.ಸೆಲ್ವಮಣಿ ಅವರು ರಾಜ್ಯ ಸರ್ಕಾರವು ಬಾಲಕಾರ್ಮಿಕ ಪದ್ಧತಿಯನ್ನು ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿ ಇಟ್ಟಿಗೆ ಕಾರ್ಖಾನೆ, ಅಂಗಡಿಗಳು, ಗ್ಯಾರೇಜ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಲಕಾರ್ಮಿಕರನ್ನು ಗುರುತಿಸಿ ರಕ್ಷಿಸಲಾಗಿದೆ ಎಂದು ತಿಳಿಸಿದರು.
ಬಾಲ್ಯ ವಿವಾಹ ತಡೆಗಟ್ಟಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಆರ್.ಟಿ.ಐ ಯನ್ನು ಕಡ್ಡಾಯ ಶಿಕ್ಷಣದ ಭಾಗವಾಗಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಖಾಸಗಿ ಶಾಲೆಗಳಲ್ಲಿ ಶೇ.25ರಷ್ಟು ದಾಖಲಾತಿಯನ್ನು ಆರ್.ಟಿ.ಐ. ಅಡಿಯಲ್ಲಿ ಮೀಸಲಿಡಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 94 ಬಾಲ್ಯ ವಿವಾಹ ಪ್ರಕರಣಗಳು ಕಂಡುಬಂದಿದ್ದು 91 ಪ್ರಕರಣಗಳನ್ನು ತಡೆಯಲಾಗಿದೆ, 3 ಪ್ರಕರಣಗಳಲ್ಲಿ ಎಫ್.ಐ.ಆರ್ ದಾಖಲು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕರಾದ ಎಂ.ಜಿ.ಪಾಲಿ ಅವರು ಸಭೆಗೆ ಮಾಹಿತಿ ನೀಡಿದರು.
ರಾಜ್ಯ ಸರ್ಕಾರ ಮಕ್ಕಳಿಗೆ ಕೋವಿಡ್ ಹರಡದಂತೆ ತಡೆಗಟ್ಟುವಲ್ಲಿ ಸಫಲವಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಉತ್ತಮ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 6 ಲಕ್ಷ ಮಕ್ಕಳಿದ್ದು 3 ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚಿನ ಕೋವಿಡ್ ಸೋಂಕು ಹರಡದಂತೆ ಜಿಲ್ಲಾಡಳಿತ ಕ್ರಮ ವಹಿಸಿದೆ. ಅಗತ್ಯ ಚಿಕಿತ್ಸೆ ಮತ್ತು ಬೆಡ್ ಗಳನ್ನು ಸೂಕ್ತ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ರಾಷ್ಟ್ರೀಯ ಸಂವೇದನಾ ಸಹಾಯವಾಣಿ ಸಂಖ್ಯೆ 18001212830 ಯನ್ನು ರಾಷ್ಟ್ರದ್ಯಂತ ಪ್ರಾದೇಶಿಕ ಬಾಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಮಕ್ಕಳು ಕೋವಿಡ್‍ಗೆ ತುತ್ತಾದರೆ ಅಥವಾ ಸಮಸ್ಯೆಗಳಿದ್ದರೆ ಪೋಷಕರು ಹಾಗು ಮಕ್ಕಳು ಸಹಾಯವಾಣಿಗೆ ಕರೆ ಮಾಡಿ ಸಲಹೆ ಪಡೆಯಬಹುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕೋಲಾರ ಪೊಲೀಸ್ ವರಿಷ್ಠಾಧಿಕಾರಿಗಳಾದ. ಡೆಕ್ಕಾ ಕಿಶೋರ್ ಬಾಬು, ಕೆ. ಜಿ. ಎಫ್.ಪೊಲೀಸ್ ವರಿಷ್ಠಾಧಿಕಾರಿಗಳಾದ ಇಲಕ್ಕಿಯಾ ಕರುಣಾಕರನ್, ಶಿಕ್ಷಣ ಇಲಾಖೆಯ ಉಪನಿರ್ದೇಕರಾದ ಕೃಷ್ಣಮೂರ್ತಿ, ತಹಶೀಲ್ದಾರ್ ಶೋಭಿತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here