ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡುತ್ತಿರುವ ಶಾಸಕರ ವಿರುದ್ಧ ಸಹಿ ಸಂಗ್ರಹ ಅಭಿಯಾನ: ಬಿ.ಎಸ್.ಯಡಿಯೂರಪ್ಪ

0
110

ರಾಜ್ಯ ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡುತ್ತಿರುವ ಶಾಸಕರ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆಪ್ತ ಶಾಸಕರ ನಿಯೋಗ ಇದೀಗ ಹೈಕಮಾಂಡ್ ಕದ ತಟ್ಟಲು ಸಿದ್ಧವಾಗಿದೆ. ಮೇಲಿಂದ ಮೇಲೆ ರಾಜ್ಯದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಿದೆ.

ನಾಯಕತ್ವ ಬದಲಾವಣೆ ಕುರಿತು ಹೇಳಿಕೆ ನೀಡುವವರ ವಿರುದ್ಧ ಕಿಡಿಕಾರುತ್ತಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ನೇತೃತ್ವದ ನಿಯೋಗ ನಾಯಕತ್ವ ಬದಲಾವಣೆ ಮಾಡದಂತೆ ಶಾಸಕರ ಸಹಿ ಸಂಗ್ರಹ ಮಾಡಿದೆ. ಅಲ್ಲದೆ, ದೆಹಲಿಗೆ ತೆರಳಿ ವರಿಷ್ಠರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆಂದು ಬಿಜೆಪಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ, ಲಭ್ಯವಾಗಿರುವ ಮಾಹಿತಿ ಪ್ರಕಾರ ಜುಲೈ 21ರಂದು ರೇಣುಕಾಚಾರ್ಯ ನೇತೃತ್ವದಲ್ಲಿ ಶಾಸಕರ ನಿಯೋಗ ನವದೆಹಲಿಗೆ ಪ್ರಯಾಣ ಬೆಳೆಸಲಿದೆ.

ಸಿಎಂ ಬಿಎಸ್‍ವೈ ವಿರುದ್ಧ ಅನಗತ್ಯವಾಗಿ ಹೇಳಿಕೆಗಳನ್ನು ನೀಡುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್, ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕಮಾಂಡ್‍ಗೆ ಮನವಿ ಮಾಡಲಿದೆ ಎನ್ನಲಾಗುತ್ತಿದೆ.

ಯಡಿಯೂರಪ್ಪ ನಾಯಕತ್ವದ ಪರ ಸಂಗ್ರಹ ಮಾಡಿರುವ ಶಾಸಕರ ಸಹಿಯುಳ್ಳ ಪತ್ರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲï. ಸಂತೋಷ್, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ನೀಡಲಿದ್ದು, ನಾಯಕತ್ವದ ವಿರುದ್ಧ ಮಾತನಾಡುವವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮನವಿ ಮಾಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ.

ಹೈಕಮಾಂಡ್ ನಾಯಕರ ಪೂರ್ವಾನುಮತಿ ಇಲ್ಲದೆ ಬಿಜೆಪಿಯ ಯಾವ ಶಾಸಕರು ದೆಹಲಿಗೆ ಬರುವಂತಿಲ್ಲ. ದೆಹಲಿಗೆ ಬಂದು ನಾಯಕರ ಭೇಟಿಗೆ ಅನುಮತಿ ಪಡೆದುಕೊಳ್ಳುವ ಪ್ರಯತ್ನ ನಡೆಸಬಾರದು ಎಂದು ಈಗಾಗಲೇ ರಾಜ್ಯದ ಶಾಸಕರಿಗೆ ಸ್ಪಷ್ಟ ಸಂದೇಶ ರವಾನೆ ಮಾಡಲಾಗಿದೆ. ಹಾಗಾಗಿ ವರಿಷ್ಠರ ಭೇಟಿಗೆ ರೇಣುಕಾಚಾರ್ಯ ನೇತೃತ್ವದ ಶಾಸಕರ ನಿಯೋಗ ಅನುಮತಿ ಪಡೆದುಕೊಂಡಿದೆ. ಜುಲೈ 21ರಂದು ವರಿಷ್ಠರು ಸಮಯ ನೀಡಿದ್ದಾರೆಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here