ದ್ವಿತೀಯ ಪಿಯುಸಿ ಫಲಿತಾಂಶ ನಾಳೆ (ಜುಲೈ 20) ಪ್ರಕಟಣೆ

0
264

ಪ್ರಸ್ತುತ ಶೈಕ್ಷಣಿಕ ವರ್ಷದ ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶವನ್ನು ನಾಳೆ (ಜುಲೈ 20) ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ತಿಳಿಸಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಎಸ್. ಸುರೇಶ ಕುಮಾರ್ ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ನಾಳೆ ಮಧ್ಯಾಹ್ನ 4:30ಕ್ಕೆ ಫಲಿತಾಂಶವನ್ನು ನೋಡಬಹುದಾಗಿದೆ. ಈಗಾಗಲೇ ತಿಳಿಸಿರುವಂತೆ ಎಸ್‌ಎಸ್‌ಎಲ್‌ಸಿ ಮತ್ತು ಪ್ರಥಮ ಪಿಯುಸಿ ಅಂಕಗಳು ಮತ್ತು ಆಂತರಿಕ ಅಂಕಗಳನ್ನು ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

ದ್ವಿತೀಯ ಪಿಯುಸಿ ಫಲಿತಾಂಶದ ಸೂತ್ರದಲ್ಲಿ ಯಾವುದೇ ಅನುಮಾನಕ್ಕೆ ಆಸ್ಪದವಿಲ್ಲ ಎಂಬುದನ್ನು ಮತ್ತೆ ಸ್ಪಷ್ಟಪಡಿಸಿದ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಈ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸದೆ ಇರಲು ನಿರ್ಧರಿಸಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ನೋಂದಣಿ ಸಂಖ್ಯೆ ಸಿಕ್ಕಿಲ್ಲ. ಹಾಗಾಗಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡುವ ಸಲುವಾಗಿ ವಿದ್ಯಾರ್ಥಿಗಳಿಗೆ ಹೊಸ ರಿಜಿಸ್ಟರ್ ನಂಬರ್ ಅನ್ನು ಜನರೇಟ್ ಮಾಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ವೆಬ್​ಸೈಟ್​ನಲ್ಲಿ Know Your Number ಆಯ್ಕೆಯ ಮೂಲಕ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು ಎಂದರು.

ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಅನ್ನು ಖಚಿತಪಡಿಸಿಕೊಳ್ಳುವ ಮೂಲಕ http://karresults.nic.in ವೆಬ್​ಸೈಟ್​ನಲ್ಲಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಇದಲ್ಲದೆ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕ ದ್ವಿತೀಯ ಪಿಯುಸಿಯ ಫಲಿತಾಂಶ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು. ಇದರ ಹೊರತಾಗಿ ವಿದ್ಯಾರ್ಥಿಗಳು ಆಯಾ ಕಾಲೇಜಿನಲ್ಲಿ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ ಎಂದವರು ತಿಳಿಸಿದರು.

LEAVE A REPLY

Please enter your comment!
Please enter your name here