ಆಗಸ್ಟ್ 14 ರಂದು ಬೃಹತ್ ಲೋಕ್‍ ಅದಾಲತ್

0
198

ದಾವಣಗೆರೆ ಆ.12:ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ದಾವಣಗೆರೆ, ಹರಿಹರ, ಚನ್ನಗಿರಿ, ಹೊನ್ನಾಳಿ ಹಾಗೂ ಜಗಳೂರು ನ್ಯಾಯಾಲಯಗಳ ಆವರಣದಲ್ಲಿ 2021ನೇ ಆಗಸ್ಟ್ 14 ರಂದು ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ.

ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಮೆಗಾ ಲೋಕ್‍ಅದಾಲತ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ.

ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್ ಕಾಯ್ದೆಯಡಿಯ ಪ್ರಕರಣಗಳನ್ನು ಮೆಗಾ ಲೋಕ್ ಅದಾಲತ್ ನಲ್ಲಿ ಪರಿಹರಿಸಿಕೊಳ್ಳಬಹುದು.

ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಚೇದನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು.

ಮೆಗಾ ಲೋಕ್ ಅದಲಾತ್‍ನಲ್ಲಿ ನುರಿತ ಸಮಾಲೋಚಕರ ಸೂಕ್ತ ಮಾರ್ಗದರ್ಶನದ ಮೂಲಕ ಇಬ್ಬರಿಗೂ ಒಪ್ಪಿಗೆ ಆಗುವಂತೆ ಪ್ರಕರಣಗಳನ್ನು ರಾಜಿ ಮಾಡಿಸಿ ವಿವಾದವನ್ನು ಶಾಶ್ವತವಾಗಿ ಅಂತ್ಯಗೊಳಿಸಬಹುದಾಗಿದೆ. ಹಾಗೆಯೇ ರಾಜಿ ಸಂಧಾನದ ಮೂಲಕ ಇತ್ಯರ್ಥವಾದ ಪ್ರಕರಣಗಳಲ್ಲಿ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲಾಗುವುದು. ನ್ಯಾಯಾಲಯದಲ್ಲಿ ದಾಖಲಾಗದ ಪ್ರಕರಣಗಳನ್ನೂ ಸಹ ರಾಜಿ ಮಾಡಿಕೊಳ್ಳಲು ಅವಕಾಶ ಕಲ್ಪಸಲಾಗಿದೆ.

ಈ ಬಾರಿ ಲೋಕ್ ಅದಾಲತ್‍ನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನವನ್ನು ಮಾಡಲಾಗುತ್ತಿದ್ದು, ಈಗಾಗಲೇ ರಾಜಿಮಾಡಿಸಿ ಇತ್ಯರ್ಥಪಡಿಸಬಹುದಾದ ಒಟ್ಟು 11000 ಪ್ರಕರಣಗಳನ್ನು ದಾವಣಗೆರೆ ಜಿಲ್ಲೆಯಾದ್ಯಂತ ಗುರುತಿಸಲಾಗಿದೆ. ಅದರಲ್ಲಿ ಸುಮಾರು 8000ಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ನಿರೀಕ್ಷೆ ಇದೆ.

ಸಾರ್ವಜನಿಕರು ಮೆಗಾ ಲೋಕ್ ಅದಾಲತ್ ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕಿರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದಾವಣಗೆರೆ ಇವರನ್ನು ದೂ.ಸ:08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ 08192-296885, ಹೊನ್ನಾಳಿ 08188-251732, ಚನ್ನಗಿರಿ 08189-229195 ಮತ್ತು ಜಗಳೂರು 08196-227600 ಇವರನ್ನು ಸಂಪರ್ಕಿಸಬಹುದೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ಹಾಗೂ ಹಿರಿಯ ಸಿವಿಲ್ ನ್ಯಾಯಾಶೀಶರಾದ ಪ್ರವೀಣ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here