ಲೋಕ್ ಅದಾಲತ್‍ನಲ್ಲಿ 8 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ: ರಾಜೇಶ್ವರಿ.ಎನ್. ಹೆಗಡೆ

0
89

ದಾವಣಗೆರೆ ಆ.12 : ಜಿಲ್ಲೆಯಲ್ಲಿ ಆ.14 ರಂದು ಬೃಹತ್ ಲೋಕ್ ಅದಾಲತ್‍ನ್ನು ಹಮ್ಮಿಕೊಂಡಿದ್ದು, ರಾಜಿಯಾಗುವಂತಹ ಸುಮಾರು 8 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಿದ್ದೇವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಜೇಶ್ವರಿ.ಎನ್.ಹೆಗಡೆ ಹೇಳಿದರು.
ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಗುರುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ದೇಶದ ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಸಿಗಬೇಕು. ಬಡತನ, ಅನಕ್ಷರತೆ ಹಾಗೂ ಅಂಗವಿಕಲತೆಯಿಂದಾಗಿ ಅವರು ನ್ಯಾಯದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರ ಸ್ಥಾಪಿತಗೊಂಡಿದೆ. ಬಡವರು, ಮೂರು ಲಕ್ಷಕಿಂತ ಕಡಿಮೆ ವೇತನ ಇರುವವರು, ಅಂಗವಿಕಲರು, ಮಹಿಳೆ ಮತ್ತು ಮಕ್ಕಳು ಸೇರಿದಂತೆ ಎಲ್ಲರಿಗೂ ಈ ಮೂಲಕ ಉಚಿತ ಕಾನೂನು ಸೇವೆ ಒದಗಿಸಲಾಗುತ್ತದೆ ಎಂದರು.
ಈ ಅದಾಲತ್‍ನಲ್ಲಿ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪರಿಹರಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂ.ಎಂ.ಡಿ.ಆರ್ ಕಾಯ್ದೆಯಡಿಯ ಪ್ರಕರಣಗಳನ್ನು ಪರಿಹರಿಸಿಕೊಳ್ಳುವ ಮೂಲಕ ಲೋಕ್ ಅದಾಲತ್‍ನ ಸದುಪಯೋಗ ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು(ವಿಚ್ಚೇದನ ಹೊರತುಪಡಿಸಿ), ಪಿಂಚಣಿ ಪ್ರಕರಣಗಳು, ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ನುರಿತ ಸಮಾಲೋಚಕರ ಸೂಕ್ತ ಮಾರ್ಗದರ್ಶನದಲ್ಲಿ ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವುದರ ಜೊತೆಗೆ ಇಬ್ಬರಿಗೂ ಒಪ್ಪಿಗೆ ಆಗುವಂತೆ ಪ್ರಕರಣಗಳನ್ನು ರಾಜಿ ಮಾಡಿಸಿ ವಿವಾದವನ್ನು ಶಾಶ್ವತವಾಗಿ ಅಂತ್ಯಗೊಳಿಸಬಹುದಾಗಿದೆ. ಹಾಗೆಯೇ ರಾಜಿ ಸಂಧಾನದ ಮೂಲಕ ಇತ್ಯರ್ಥವಾದ ಪ್ರಕರಣಗಳಲ್ಲಿ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲಾಗುವುದು. ಮುಂದೆ ಯಾವುದೇ ಅಪೀಲು ಮಾಡಲು ಬರುವುದಿಲ್ಲ ಇದೇ ಅಂತಿಮ ತೀರ್ಮಾನವಾಗಲಿದೆ ಎಂದರು.
ಕಳೆದ ಮಾರ್ಚ್‍ನಲ್ಲಿ ನಡೆದ ಲೋಕ್ ಅದಾಲತ್‍ನಲ್ಲಿ ಸುಮಾರು 6041 ಪ್ರಕರಣಗಳು ಇತ್ಯರ್ಥಗೊಂಡು, 11.06 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 40084 ಪ್ರಕರಣಗಳಿವೆ. ಇದರಲ್ಲಿ ಚೆಕ್ ಅಮಾನ್ಯ ಪ್ರಕರಣಗಳು 4123, ಮೋಟರ್ ವಾಹನ ಅಪಘಾತ ಪ್ರಕರಣಗಳು 1357 ಸೇರಿದಂತೆ ರಾಜಿಗೆ ಸಾಧ್ಯವಿರುವ ಎಲ್ಲಾ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್ ನಾಯಕ್ ಮಾತನಾಡಿ, ಸಾರ್ವಜನಿಕರು ವಿಶೇಷ ಆಸಕ್ತಿಯಿಂದ ಭಾಗವಹಿಸಿ ತಮ್ಮ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬೇಕು. ಇದರಿಂದ ಸಮಯ ಉಳಿತಾಯವಾಗುವುದರ ಜೊತೆಗೆ ಮಾನಸಿಕ ನೆಮ್ಮದಿ ದೊರೆಯುತ್ತದೆ ಹಾಗೂ ಜನರಿಗೆ ಕಾನೂನು ಅರಿವು ಮೂಡಿಸಲು ಸಹಕಾರಿಯಾಗುತ್ತದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ರಿಷ್ಯಂತ್ ಮಾತನಾಡಿ, ರಾಜಿಯಾಗುವಂತಹ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಬಗೆಹರಿಸಿಕೊಳ್ಳಬಹುದು. ಇದರಿಂದ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ ಪ್ರಮುಖ ಪ್ರಕರಣಗಳಿಗೆ ಹೆಚ್ಚು ಸಮಯ ನೀಡಲು ಸಾಧ್ಯವಾಗುತ್ತದೆ. ಈ ಬಾರಿ ಲೋಕ್ ಅದಾಲತ್‍ನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನವನ್ನು ಮಾಡಲಾಗುತ್ತಿದ್ದು, ಸುಮಾರು 8 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥಪಡಿಸುವ ನಿರೀಕ್ಷೆ ಇದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ್ ಮಾತನಾಡಿ, ಇದೊಂದು ಬೃಹತ್ ಲೋಕ್ ಅದಾಲತ್ ಆಗಿದ್ದು, ಜನರು ಈ ಮೂಲಕ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಬಹುದು. ಈ ಹಿಂದೆ ಕೋವಿಡ್ ಹಿನ್ನೆಲೆಯಲ್ಲಿ ವ್ಯಾಜ್ಯಗಳ ಪರಿಹಾರ ಕಷ್ಟವಾಗಿತ್ತು. ಕಕ್ಷಿಗಾರರು ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಿ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದರು.
ಈವರೆಗೂ ನೋಂದಾಯಿಸಿಕೊಳ್ಳದ ಹಾಗೂ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳುವವರು ತಕ್ಷಣ ನೋಂದಾಯಿಸಿಕೊಳ್ಳಬಹುದು. ಘೋರ ಅಪರಾಧ ಪ್ರಕರಣಗಳನ್ನು ಹೊರತುಪಡಿಸಿ ಉಳಿದೆಲ್ಲಾ ವ್ಯಾಜ್ಯಗಳನ್ನು ಇಲ್ಲಿ ರಾಜಿ ಮಾಡಿಕೊಳ್ಳಬಹುದು. ಒಂದು ನ್ಯಾಯಾಲಯದಲ್ಲಿ ನಿಯಮಾನುಸಾರವಾಗಿ ಒಂದು ವರ್ಷಕ್ಕೆ 150 ಪ್ರಕರಣಗಳನ್ನು ಇತ್ಯರ್ಥಪಡಿಸಬಹುದು. ಆದರೆ ಲೋಕ್ ಅದಾಲತ್ ಮೂಲಕ ಹೆಚ್ಚು ಪ್ರಕರಣಗಳು ರಾಜಿಯಾದಲ್ಲಿ ನ್ಯಾಯಾಲಯದ ಮೇಲಿನ ಒತ್ತಡ ಕಡಿಮೆಯಾಗುತ್ತದೆ ಹಾಗೂ ಸಾರ್ವಜನಿಕರಿಗೆ ಶೀಘ್ರವಾಗಿ ನ್ಯಾಯ ದೊರೆಯುತ್ತದೆ. ಈ ಉದ್ದೇಶಕ್ಕಾಗಿ ಲೋಕ್ ಅದಾಲತ್ ಹೆಚ್ಚಿನ ಮಹತ್ವ ಪಡೆದುಕೊಂಡಿದೆ ಎಂದರು.

ಈ ವೇಳೆಯಲ್ಲಿ ವಕೀಲರ ಸಂಘದ ಉಪಾಧ್ಯಕ್ಷರು, ಸಿಇಒ, ಆಡಳಿತ ಮುಖ್ಯಾಧಿಕಾರಿ, ವಕೀಲರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here