ಕಾನೂನು ಸೇವೆಯ ಬಗ್ಗೆ ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

0
112

ಹಾಸನ ಸೆ.24 – ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾದವರು, ಶಿಕ್ಷಿತರು, ಬಡವರು, ಅಸಾಹಾಯಕರಿಗೆ ಉಚಿತ ಕಾನೂನು ಸೇವೆ ನೀಡುತ್ತಿದ್ದು, ಈ ಬಗ್ಗೆ ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿ ಅರಿವು ಮೂಡಿಸಲು ಎಲ್ಲಾ ಇಲಾಖೆಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿಂದು ಪ್ಯಾನ್ ಇಂಡಿಯಾ ಕಾನೂನು ಅರಿವು ಕಾರ್ಯಕ್ರಮಗಳ ಕುರಿತು ಸಭೆ ನಡೆಸಿ ಮಾತನಾಡಿದ ಅವರು 75ನೇ ವರ್ಷದ ಅಮೃತ ಮಹೋತ್ಸವ ಅಂಗವಾಗಿ ವಿವಿಧ ಇಲಾಖೆಗಳ ಮೂಲಕ ಅ.2 ರಿಂದ ನ. 14 ವರೆಗೆ ನಿರಂತರವಾಗಿ ಕಾನೂನು ಸೇವಾ ಪ್ರಾಧಿಕಾರದ ಉಚಿತ ಕಾನೂನು ಸೇವೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವು ಕಾನೂನು ಸೇವೆ, ನಾಗರಿಕರ ಹಕ್ಕು,ಕರ್ತವ್ಯಗಳ ಕುರಿತು ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ದೇಶಿಸಿದೆ. ಜಿಲ್ಲಾಡಳಿತ ಹಾಗೂ ಸರಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ ಪ್ರತಿ ಹಳ್ಖಿಗೂ ಮಾಹಿತಿ ತಲುಪಿಸುವಂತೆ ಕ್ರಿಯಾ ಯೋಜನೆ ರೂಪಿಸಲಾಗುತ್ತದೆ ಎಂದರು.
ಜಿಲ್ಲೆಯಾದ್ಯಂತ ವಿಧ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಕಾನೂನು ಪ್ರಾಧಿಕಾರದ ಮಹತ್ವ ಮತ್ತು ಕಾನೂನು ಸೇವಾ ಪ್ರಾಧಿಕಾರದ ಉಪಯೋಗಗಳನ್ನು ಕುರಿತು ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಕಾನೂನು ಪ್ರಾಧಿಕಾರದ ಉಪಯೋಗಗಳನ್ನು ತಿಳಿಸುವುದು ಅವಶ್ಯಕವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಮಹಿಳೆ, ಮಕ್ಕಳು ಮತ್ತು ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕಾನೂನು ತಿಳುವಳಿಕೆ, ಮೂಲಭೂತ ಹಕ್ಕುಗಳು, ಮೂಲಭೂತ ಕರ್ತವ್ಯಗಳು, ಸಂವಿಧಾನದ ಆಶಯಗಳ ಕುರಿತು ಜಾಗೃತಿ ಮೂಡಿಸಲು ಪ್ರಾಧಿಕಾರದ ಜೊತೆಗೆ ಎಲ್ಲ ಇಲಾಖೆಗಳ ಪೂರ್ಣ ಪ್ರಮಾಣದಲ್ಲಿ ಕೈ ಜೋಡಿಸಬೇಕೆಂದು ಅವರು ಹೇಳಿದರು.
ಶಾಲಾ ಕಾಲೇಜು ಮಟ್ಟದಲ್ಲಿ ವಿಧ್ಯಾರ್ಥಿಗಳಿಗೆ ಕಾನೂನು ಪ್ರಾಧಿಕಾರ ಕುರಿತು ಕಾರ್ಯಾಗಾರ ನಡೆಸುವುದು, ಪ್ರಬಂಧ ಮತ್ತು ನಿಬಂಧಗಳ ಸ್ಪರ್ಧೆ, ಭಾಷಣ ಸ್ಪರ್ಧೆ ಏರ್ಪಡಿಸಿ ಮಕ್ಕಳಲ್ಲಿ ಕಾನೂನಿನ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದರು.
ಇದೇ ವೇಳೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ಜಡ್ಜ್ ರವಿಕಾಂತ್ ಅವರು ಮಾತನಾಡಿ ಜಿಲ್ಲಾ ಪಂಚಾಯತ್ ವತಿಯಿಂದ ಸೇವಾ ಪ್ರಾಧಿಕಾರದ ಕಾರ್ಯಗಳಿಗೆ ಉತ್ತಮ ಸಹಕಾರ ನೀಡಿ, ಜಿಲ್ಲೆಯ ವಿವಿದೆಡೆ ನೂರಾರು ಕಾರ್ಯಕ್ರಮಗಳನ್ನು ಆಯೋಜಿಸಿ, ಯಶಸ್ವಿಯಾಗೊಳಿಸಲು ಅನುಕೂಲ ಮಾಡಿಕೊಡುವಂತೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಬಿ.ಎ ಪರಮೇಶ್ ಅವರು ಮಾತನಾಡಿ ಜಿಲ್ಲೆಯ ಆಯ್ದ ಗ್ರಾಮಗಳಳ್ಲಿ ಕಾನೂನು ಜಾಗೃತಿ ಕಾರ್ಯಕ್ರಮಗಳನ್ನು ಅಯೋಜಿಸಿ ಸಾರ್ವಜನಿಕರಿಗೆ, ಯುವಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕಾ.ಸೇ. ಪ್ರಾಧಿಕಾರದ ಉಪಯುಕ್ತತೆ ತಿಳಿಸಲು ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಪುನೀತ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here