ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಜಿಲ್ಲೆಯಲ್ಲಿ ಹಲವು ಜಾಗೃತಿ ಕಾರ್ಯಕ್ರಮ

0
126

ಮಡಿಕೇರಿ ಅ.05 -ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಹಾಗೂ ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲೆಯಾದ್ಯಂತ ‘ಪ್ಯಾನ್ ಇಂಡಿಯಾ ಔಟ್‍ರೀಚ್’ ಕಾರ್ಯಕ್ರಮಗಳನ್ನು ನವೆಂಬರ್, 14 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆ ದಿಸೆಯಲ್ಲಿ ಅಕ್ಟೋಬರ್, 02 ರಿಂದ ಇದುವರೆಗೆ ಸುಮಾರು 15 ಕಡೆ ವಿವಿಧ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ತಿಳಿಸಿದ್ದಾರೆ.
ಶ್ರೀ ಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನವೆಂಬರ್, 14 ರವರೆಗೂ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್, ಹೀಗೆ ಎಲ್ಲಾ ಇಲಾಖೆಗಳ ಸಹಕಾರದಿಂದ ಜಿಲ್ಲೆಯಾದ್ಯಂತ ಗ್ರಾಮ ಮಟ್ಟದಲ್ಲಿ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಿ ಕಾನೂನು ಸೇವೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಆಚರಣೆಯೊಂದಿಗೆ ಕಾರ್ಯಕ್ರಮಗಳನ್ನು ಆರಂಭಿಸಲಾಗಿದ್ದು, ಪೋಕ್ಸೋ ಕಾಯ್ದೆ ಬಗ್ಗೆ ಜಾಗೃತಿ, ಮಕ್ಕಳ ಹಕ್ಕು ಉಲ್ಲಂಘನೆಯಾಗದಂತೆ ಜಾಗೃತಿ, ಕೋವಿಡ್-19 ಬಗ್ಗೆ ಜಾಗೃತಿ, ಕೋವಿಡ್ ಲಸಿಕಾ ಅಭಿಯಾನ, ಮಹಿಳೆಯರು ಮತ್ತು ಮಕ್ಕಳಿಗೆ ಇರುವ ಕಾನೂನು ಮತ್ತು ನೆರವು ಹೀಗೆ ಹಲವು ರೀತಿಯ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು ತಿಳಿಸಿದರು.
ಸ್ವಾತಂತ್ರ್ಯೋತ್ಸವದ 75 ನೇ ವರ್ಷಾಚರಣೆ ಪ್ರಯುಕ್ತ ಕಾನೂನಿನ ಸೌಲಭ್ಯಗಳು ಹಾಗೂ ಜನಸಾಮಾನ್ಯರಿಗೆ ನೆರವು ಬಗ್ಗೆ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಬುಡಕಟ್ಟು ಜನರು, ಸಂಕಷ್ಟದಲ್ಲಿರುವವರು, ಅವಕಾಶ ವಂಚಿತರನ್ನು ಗುರುತಿಸಿ, ವಿಭಿನ್ನವಾಗಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದರು.
ಜನರ ಬಳಿಗೆ ತೆರಳಿ ಕಾನೂನು ಅರಿವು ಮೂಡಿಸಿ ನೆರವು ನೀಡುವುದು ಕಾನೂನು ಸೇವಾ ಪ್ರಾಧಿಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ವಕೀಲರ ಸಂಘ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳು ಇದರೊಂದಿಗೆ ಕೈಜೋಡಿಸುತ್ತಿವೆ ಎಂದರು.
ಹಿರಿಯ ನಾಗರಿಕರು ಹಾಗೂ ವಿಕಲಚೇತನರಿಗೆ ಇರುವ ಹಕ್ಕುಗಳು, ಮೋಟಾರು ವಾಹನ ಕಾಯ್ದೆ ಹೀಗೆ ಹಲವು ಜಾಗೃತಿ ಮೂಡಿಸಲಾಗಿದೆ ಎಂದರು.

LEAVE A REPLY

Please enter your comment!
Please enter your name here