ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ

0
133

ಮಡಿಕೇರಿ ನ.17 :-ಜಿಲ್ಲೆಯಲ್ಲಿ ಗೃಹ ಭಾಗ್ಯ ಯೋಜನೆಯಡಿ ಅರ್ಹ ಪೌರ ಕಾರ್ಮಿಕರಿಗೆ ವಸತಿ ಕಲ್ಪಿಸುವುದು, ಪೌರಕಾರ್ಮಿಕ ಮಕ್ಕಳಿಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡುವುದು, ಆರೋಗ್ಯ ತಪಾಸಣೆ ಮತ್ತಿತರ ಕಾರ್ಯಕ್ರಮಗಳನ್ನು ತಲುಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಫಾಯಿ ಕರ್ಮಚಾರಿಗಳ/ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ಜಿಲ್ಲಾ ಜಾಗೃತಿ ಸಮಿತಿ ಸಭೆ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರ/ಪಟ್ಟಣ, ಸ್ಥಳೀಯ ಸಂಸ್ಥೆಗಳಿಂದ ದೊರೆಯುವ ಸೌಲಭ್ಯಗಳನ್ನು ಪೌರ ಕಾರ್ಮಿಕರಿಗೆ ತಲುಪಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಜಿಲ್ಲೆಯಲ್ಲಿ ಸ್ಮಶಾನ ಭೂಮಿ ಕಲ್ಪಿಸಲು ಎಷ್ಟು ಬಾಕಿ ಇದೆ ಎಂಬ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೂಚಿಸಿದರು.
ಹೊರಗುತ್ತಿಗೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಇಎಸ್‍ಐ, ಪಿಎಫ್ ತಲುಪಿದೆಯೇ ಎಂಬುದನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ಪರಿಶೀಲಿಸಿ, ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಸಮಿತಿ ಸದಸ್ಯರಾದ ರಂಗಸ್ವಾಮಿ ಅವರು ಸುಂಟಿಕೊಪ್ಪದಲ್ಲಿ ಪೌರ ಕಾರ್ಮಿಕರು ವಾಸ ಮಾಡುತ್ತಿರುವ ಜಾಗಕ್ಕೆ ಯಾವುದೇ ರೀತಿಯ ದಾಖಲೆ ಇಲ್ಲ, ಆದ್ದರಿಂದ ಆರ್‍ಟಿಸಿ ಕಲ್ಪಿಸುವಂತಾಗಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯಲ್ಲಿ ಹೊರಗುತ್ತಿಗೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಸಮಾನ ವೇತನ ಕೊಡಿಸಬೇಕು ಎಂದು ಅವರು ಮನವಿ ಮಾಡಿದರು. ಸಮಿತಿ ಸದಸ್ಯರಾದ ಲೋಕೇಶ್ ಅವರು ಪೌರ ಕಾರ್ಮಿಕರ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು.
ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಪಳನಿ ಪ್ರಕಾಶ್ ಅವರು ಮಾತನಾಡಿ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಗ್ರಾಮದಲ್ಲಿ ಪೌರ ಕಾರ್ಮಿಕರಿಗೆ ನಿವೇಶನ ಒದಗಿಸಬೇಕು ಎಂದು ಮನವಿ ಮಾಡಿದರು.
ನಿವೇಶನ ರಹಿತ ಪೌರ ಕಾರ್ಮಿಕರಿಗೆ ವಸತಿ ಕಲ್ಪಿಸಲು ವಿಶೇಷ ಆದ್ಯತೆ ನೀಡಬೇಕು. ಕೋವಿಡ್‍ನಿಂದ ಮೃತಪಟ್ಟ ಪೌರ ಕಾರ್ಮಿಕರಿಗೆ ಪರಿಹಾರ ಒದಗಿಸಬೇಕು ಎಂದು ಪಳನಿ ಪ್ರಕಾಶ್ ಅವರು ಮನವಿ ಮಾಡಿದರು.
ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಅಹವಾಲು ಸಭೆ ಆಹ್ವಾನಿಸಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ವಿಶೇಷ ಸಭೆ ಆಹ್ವಾನಿಸಿ ಕುಂದುಕೊರತೆ ಆಲಿಸುವಂತೆ ಸೂಚಿಸಲಾಗುವುದು ಎಂದು ಹೇಳಿದರು.
ಸಮಿತಿ ಸದಸ್ಯರಾದ ಮುತ್ತಪ್ಪ ಅವರು ಸೋಮವಾರಪೇಟೆ ತಾಲ್ಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನ ಇನ್ನೂ ಪೂರ್ಣಗೊಂಡಿಲ್ಲ, ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಬೇಕು ಎಂದು ಅವರು ಕೋರಿದರು.
ಮತ್ತೊಬ್ಬ ಸದಸ್ಯರಾದ ಸುಕುಮಾರ್ ಅವರು ಹಾಕತ್ತೂರು ತೊಂಬತ್ತು ಮನೆಯ ಸ್ಮಶಾನ ಭೂಮಿ ಅಭಿವೃದ್ಧಿ ಪಡಿಸಬೇಕಿದೆ ಎಂದು ಮನವಿ ಮಾಡಿದರು.
ಒಡಿಪಿ ಸಂಸ್ಥೆಯ ಜಾಯ್ಸ್ ಮೆನೇಜಸ್ ಅವರು ಮಾತನಾಡಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯವನ್ನು ಕಲ್ಪಿಸಬೇಕಿದೆ ಎಂದರು.
ಜಿ.ಪಂ.ಉಪ ಕಾರ್ಯದರ್ಶಿ ಪಿ.ಲಕ್ಷ್ಮಿ ಅವರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಗೌರವಧನ ನೀಡಲಾಗುತ್ತಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಜಿಲ್ಲೆಯಲ್ಲಿ 166 ಪೌರಕಾರ್ಮಿಕ ಕುಟುಂಬಗಳಿದ್ದು, ಪೌರ ಕಾರ್ಮಿಕ ಕುಟುಂಬದ 190 ವಿದ್ಯಾರ್ಥಿಗಳು ಟೈಲರಿಂಗ್, ಡ್ರೈವಿಂಗ್, ಕಂಪ್ಯೂಟರ್, ತಾಂತ್ರಿಕ ಬ್ಯೂಟಿಪಾರ್ಲರ್ ಹೀಗೆ ವಿವಿಧ ತರಬೇತಿ ಪಡೆಯಲು ಇಚ್ಛಿಸಿದ್ದು, ಲೀಡ್ ಬ್ಯಾಂಕ್ ಸಹಯೋಗದಲ್ಲಿ ಕೂಡಿಗೆಯ ಕಾಬ್‍ಸೆಟ್ ಕೇಂದ್ರ ವತಿಯಿಂದ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಪಿ.ಶ್ರೀನಿವಾಸ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ 75 ಖಾಯಂ ಪೌರ ಕಾರ್ಮಿಕರು ಇದ್ದು, ಇವರಿಗೆ ಸ್ಥಳೀಯ ಸಂಸ್ಥೆಯಿಂದ ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಮಾಡಲಾಗುತ್ತಿದೆ ಎಂದರು.
ತಾ.ಪಂ.ಇಒ ಅಪ್ಪಣ್ಣ, ಪೌರಾಯುಕ್ತರಾದ ರಾಮದಾಸ್, ನಗರಾಭಿವೃದ್ಧಿ ಕೋಶದ ಎಇಇ ನಟರಾಜು, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ, ಸೆಸ್ಕ್ ಎಇಇ ದೇವಯ್ಯ, ಐಟಿಡಿಪಿ ಇಲಾಖಾ ಅಧಿಕಾರಿ ಶ್ರೀನಿವಾಸ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಚಂದ್ರಶೇಖರ್ ಇತರರು ಹಲವು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here