ಸಂವಿಧಾನ ಸಮರ್ಪಣಾ ದಿನಾಚರಣೆ. ‘ಭಾರತದ ಸಂವಿಧಾನ’ವೇ ದೇಶದ ಭಗವದ್ಗೀತೆ: ಕುಲಪತಿ ಡಾ.ಸ.ಚಿ.ರಮೇಶ

0
97

ವಿಜಯನಗರ(ಹೊಸಪೇಟೆ),ನ.26: ಭಾರತದ ಸಂವಿಧಾನದಿಂದ ನಾವೆಲ್ಲರೂ ಈ ಸಮಾಜದಲ್ಲಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ಸಂವಿಧಾನದಲ್ಲಿ ಸಾಮಾಜಿಕ ನ್ಯಾಯದ ಸೌಂದರ್ಯವನ್ನು ಕಾಣಬಹುದು. ನಮ್ಮ ದೇಶದ ಭಗವದ್ಗೀತೆ ಎಂದರೆ ಅದು ಭಾರತ ಸಂವಿಧಾನ. ಅದರಲ್ಲಿ ಬರುವ ತತ್ವಾದರ್ಶಗಳನ್ನು ಪಾಲನೆ ಮಾಡುವ ನಿಟ್ಟಿನಲ್ಲಿ ಅದನ್ನು ಗೌರವಿಸಬೇಕು ಮತ್ತು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಪ್ರಜೆಯಾಗಲು ಸಾಧ್ಯ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಸ.ಚಿ.ರಮೇಶ ಅಭಿಪ್ರಾಯಪಟ್ಟರು.
ಕನ್ನಡ ವಿಶ್ವವಿದ್ಯಾಲಯದ ಡಾ. ರಾಜಕುಮಾರ ಸಭಾಂಗಣದಲ್ಲಿ ಆಯೋಜಿಸಿದ್ದ ಸಂವಿಧಾನ ಸಮರ್ಪಣಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಂವಿಧಾನ ಪ್ರತಿಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯೂ ಭಾರತ ಸಂವಿಧಾನವನ್ನು ಕಡ್ಡಾಯವಾಗಿ ಅಧ್ಯಯನ ಮಾಡಬೇಕು ಎಂಬ ನಿಯಮವನ್ನು ಮಾಡಲಾಗಿದ್ದು, ಇದರಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯದಲ್ಲಿ ಯಾವುದೇ ತರಹದ ತಪ್ಪುಗಳನ್ನು ಮಾಡಬೇಕಾದರೆ ಮೊದಲು ಯೋಚಿಸಬೇಕಾಗುತ್ತದೆ. ಯಾವುದೇ ಅನಾಹುತ ಸಂಭವಿಸದಂತೆ ಮೊದಲೇ ಅಧ್ಯಯನ ಮಾಡಿಕೊಂಡರೆ ಉತ್ತಮ ವ್ಯಕ್ತಿಗಳಾಗಿ ರೂಪಗೊಳ್ಳಲು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕುಲಸಚಿವ ಡಾ.ಸುಬ್ಬಣ್ಣ ರೈ, ಅಭಿವೃದ್ಧಿ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ.ಎ.ಶ್ರೀಧರ್, ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರು, ಅಧ್ಯಾಪಕರು, ಆಡಳಿತ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದ್ರಾವಿಡ ಅಧ್ಯಯನ ವಿಭಾಗದ ಸಂಶೋಧನಾರ್ಥಿ ನಿಖಿಲಾದೇವಿ ನಿರೂಪಿಸಿದರು. ಉಪಕುಲಸಚಿವರಾದ ಡಾ.ಎ.ವೆಂಕಟೇಶ ಸ್ವಾಗತಿಸಿ ಪ್ರಾಸ್ತವಿಕ ನುಡಿಗಳನ್ನಾಡಿದರು.

LEAVE A REPLY

Please enter your comment!
Please enter your name here