ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ:ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

0
518

ಬಳ್ಳಾರಿ,ಡಿ.04 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2021-22ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ((Renewal) ಹಾಗೂ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ ಸೌಲಭ್ಯ ಪಡೆದ ವಿದ್ಯಾರ್ಥಿಗಳಿಗೆ 2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ಮುಂದುವರೆದ ಕಂತುಗಳಿಗೆ (3,4,5ನೇ ಕಂತುಗಳು) ಸುವಿಧಾ ತಂತ್ರಾಂಶದಲ್ಲಿ ಆನ್‍ಲೈನ್ ವೆಬ್‍ಸೈಟ್ https://suvidha.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.
ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ: ಈ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಈ ಹಿಂದಿನಂತೆಯೆ ಅವರು ವಾಸಿಸುತ್ತಿರುವ ಆಯಾ ಜಿಲ್ಲೆಯ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಆಯಾ ತಾಲೂಕಿನ ಹಾಗೂ ನಿಗಮದ ವೆಬ್‍ಸೈಟ್‍ನ್ನು ಸಂಪರ್ಕಿಸಿ ಅರ್ಜಿ ನಮೂನೆಗಳನ್ನು ಪಡೆದು ಅಗತ್ಯ ದಾಖಲಾತಿಗಳನ್ನು ಭರ್ತಿ ಮಾಡಿ ಜಿಲ್ಲಾ ಕಚೇರಿಗಳಿಗೆ ನೇರವಾಗಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಈ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ ರೂ.2ಲಕ್ಷಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತಿದ್ದು, ಇದರಲ್ಲಿ ಗರಿಷ್ಠ ಶೇ.15ರಷ್ಟು ಸಹಾಯಧನ ಹಾಗೂ ಉಳಿದ ಮೊತ್ತಕ್ಕೆ ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.40 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ.55 ಸಾವಿರ ಒಳಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು, ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಪಾಸ್‍ಬುಕ್ ಸೇರಿದಂತೆ ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರÀವನ್ನು ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಅರ್ಜಿದಾರರು ನಿಗಮದ ವೆಬ್‍ಸೈಟ್ www.dbcdc.karnataka.gov.in ನಲ್ಲಿ ಮಾಹಿತಿಯನ್ನು ಪಡೆಯಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ 2022ರ ಜ.10ರೊಳಗಾಗಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಶ್ರೀ ಕುಮಾರಸ್ವಾಮಿ ದೇವಸ್ಥಾನದ ಎದುರುಗಡೆ ಇರುವ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಹಾಗೂ ನಿಗಮದ ಸಹಾಯವಾಣಿ ಸಂಖ್ಯೆ:08392-267038ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here