ಡಿ.27 ರಂದು ‘ಕಾನೂನು ಸೇವಾ ಶಿಬಿರ’

0
78

ಮಡಿಕೇರಿ ಡಿ.22 :-ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಕಾರದಲ್ಲಿ ಡಿಸೆಂಬರ್ 27 ರಂದು ‘ಕಾನೂನು ಸೇವಾ ಶಿಬಿರ’ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಆ ದಿಸೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಬಿ.ಎಲ್.ಜಿನರಾಳಕರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ನಗರದ ಜಿಲ್ಲಾ ನ್ಯಾಯಾಲಯ ಕಚೇರಿ ಸಭಾಂಗಣದಲ್ಲಿ ‘ಕಾನೂನು ಸೇವಾ ಶಿಬಿರ’ ಆಯೋಜನೆ ಹಾಗೂ ರೂಪುರೇಷೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆ ನಡೆಯಿತು.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಬಿ.ಎಲ್.ಜಿನರಾಳಕರ್ ಅವರು ಕಾನೂನು ಸೇವಾ ಶಿಬಿರಕ್ಕೆ ಸುಪ್ರಿಂಕೋರ್ಟ್ ನ್ಯಾಯಾಮೂರ್ತಿ ಎ.ಎಸ್.ಬೋಪಣ್ಣ, ಹೈಕೋರ್ಟ್ ನ್ಯಾಯಮೂರ್ತಿ ವೀರಪ್ಪ, ರಿಜಿಸ್ಟರ್ ಜನರಲ್ ಶಿವಶಂಕರೇಗೌಡ ಇತರರು ಪಾಲ್ಗೊಳ್ಳಲಿದ್ದು, ನಗರದ ಗೌಡ ಸಮಾಜ ನೂತನ ಕಟ್ಟಡದಲ್ಲಿ ಕಾರ್ಯಕ್ರಮ ಜರುಗಲಿದ್ದು, ಅಗತ್ಯ ಸಹಕಾರಕ್ಕೆ ಮನವಿ ಮಾಡಿದರು.
ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವುದು, ಅರ್ಹ ಫಲಾನುಭವಿಗಳಿಗೆ ಗುರುತಿನ ಚೀಟಿ/ ಪ್ರಮಾಣ ಪತ್ರ ವಿತರಿಸುವುದು ಹಾಗೂ ಕಾನೂನಿನ ಬಗ್ಗೆ ಅರಿವು ಮೂಡಿಸುವುದು. ಹೀಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಆ ದಿಸೆಯಲ್ಲಿ ವಿವಿಧ ಇಲಾಖೆಗಳ ಸಹಕಾರ ಅತ್ಯಗತ್ಯ ಎಂದು ಅವರು ಕೋರಿದರು.
ಜಿ.ಪಂ., ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಕಾರ್ಮಿಕ ಹೀಗೆ ಹಲವು ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಹಿತಿ ಒಳಗೊಂಡ ‘ವಸ್ತು ಪ್ರದರ್ಶನಕ್ಕೆ’ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ತಿಳಿಸಿದರು.
ಕಾರ್ಮಿಕ ಇಲಾಖೆ ವತಿಯಿಂದ ಗುರುತಿನ ಚೀಟಿ ವಿತರಿಸುವುದು, ಮಾಸಾಶನ ಪ್ರಮಾಣ ಪತ್ರ ನೀಡುವುದು, ಇತರೆ ಇಲಾಖೆಗಳಿಂದ ಸೌಲಭ್ಯಗಳನ್ನು ಒದಗಿಸುವ ಸಂಬಂಧ ಫಲಾನುಭವಿಗಳನ್ನು ಕರೆತರುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಲಹೆ ಮಾಡಿದರು.
ವೇದಿಕೆ ಮತ್ತು ಮಳಿಗೆ ನಿರ್ಮಾಣ, ಧ್ವನಿವರ್ಧಕ, ಕುಂದ ಒದಗಿಸುವುದು, ಮತ್ತಿತರ ಕರ್ತವ್ಯಗಳ ನಿರ್ವಹಣೆ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಕೋವಿಡ್ ಮಾರ್ಗಸೂಚಿಯಂತೆ ಕಾರ್ಯಕ್ರಮ ಆಯೋಜಿಸುವಂತಾಗಬೇಕು. ಥರ್ಮೋಸ್ಕ್ಯಾನರ್ ಮೂಲಕ ಪರೀಕ್ಷೆ ಮಾಡುವುದು, ಸ್ಯಾನಿಟೈಸರ್ ಒದಗಿಸುವುದು ಮತ್ತಿತರ ನಿಯಮಗಳನ್ನು ಪಾಲಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ಕಾನೂನು ಸೇವಾ ಶಿಬಿರ ಕಾರ್ಯಕ್ರಮ ಯಶಸ್ಸಿಗೆ ವಿವಿಧ ಇಲಾಖೆಗಳಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಅವರು ಮಾತನಾಡಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕರಪತ್ರ, ಬಿತ್ತಿಪತ್ರ, ಮಾಹಿತಿ ಒಳಗೊಂಡ ವಸ್ತು ಪ್ರದರ್ಶನ ಮಳಿಗೆ ನಿರ್ಮಿಸಬೇಕಿದ್ದು, ಆ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸುವಂತೆ ಅವರು ತಿಳಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಮಾತನಾಡಿ ಕಾರ್ಯಕ್ರಮ ಯಶಸ್ಸಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ಎಇಇ ಶಿವರಾಮು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೇದಮೂರ್ತಿ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸುರೇಶ್ ಭಟ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮುದ್ದಣ್ಣ, ಜಿಲ್ಲಾ ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಘು, ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪೊಲೀಸ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ, ಮೀನುಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ, ವಿಕಲಚೇತನರ ಇಲಾಖೆಯ ಅಧಿಕಾರಿ ವಿಮಲ, ಅಬಕಾರಿ ಇಲಾಖೆ ಅಧೀಕ್ಷಕರಾದ ಲಕ್ಷ್ಮೀಶ ಇದ್ದರು.

LEAVE A REPLY

Please enter your comment!
Please enter your name here