ಸಹಾಯಕ ಪ್ರಾಧ್ಯಾಪಕರ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ: ಸಕಲ ಸಿದ್ದತೆಗೆ ಸೂಚನೆ.

0
97

ಶಿವಮೊಗ್ಗ ಮಾರ್ಚ್ 09: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಾ.12 ರಿಂದ 16 ರವರೆಗೆ ಜಿಲ್ಲೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ವ್ಯವಸ್ಥಿತ ಹಾಗೂ ಪಾರದರ್ಶಕವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಇಂದು ಉನ್ನತ ಶಿಕ್ಷಣ ಸಚಿವರಾದ ಸಿ.ಅಶ್ವಥ್‍ನಾರಾಯಣರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಿಂದ ನಡೆದ ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾಡಳಿತ ಕಚೇರಿಯಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ಕುರಿತು ಸೂಚನೆಗಳನ್ನು ನೀಡಿದರು.

ನಗರದ ಒಟ್ಟು 09 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಬೆಳಿಗ್ಗೆ ಮತ್ತು ಮಧ್ಯಾಹ್ನ ಎರಡು ಅವಧಿಯ ಪರೀಕ್ಷಾ ಅಧಿವೇಶನಗಳು ನಡೆಯಲಿವೆ. ಮಾ.12 ಮತ್ತು 13 ರಂದು ಎರಡೂ ಅಧಿವೇಶನ ಸೇರಿ ಒಟ್ಟು 3840 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಮಾ.14 ರಂದು ಒಟ್ಟು 1512, ಮಾ.15 ರಂದು ಒಟ್ಟು 1920 ಹಾಗೂ ಮಾ.16 ರಂದು ಒಟ್ಟು 456 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಪ್ರತಿ ಕೇಂದ್ರಕ್ಕೆ ಒಬ್ಬ ವೀಕ್ಷಕರಂತೆ ಹಾಗೂ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳ ಬಂಡಲ್‍ಗಳನ್ನು ಸಂಬಂಧಪಟ್ಟ 09 ಪರೀಕ್ಷಾ ಕೇಂದ್ರಗಳಿಗೆ ನೀಡಲು ಎರಡು ತ್ರಿಸದಸ್ಯ ಸಮಿತಿ ರಚಿಸಲಾಗಿದೆ ಎಂದ ಅವರು ಪ್ರತಿ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಓರ್ವ ಪುರುಷ ಮತ್ತು ಮಹಿಳಾ ಪೇದೆ ನೇಮಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.

ಪ್ರತಿ ಕೇಂದ್ರಗಳಲ್ಲಿ ಸಿಸಿ ಟಿವಿ ಇದ್ದು, ಗೋಡೆ ಗಡಿಯಾರದ ವ್ಯವಸ್ಥೆ, ಶುದ್ದ ಕುಡಿಯುವ ನೀರು, ಉತ್ತಮ ಆಸನ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು ಕೇಂದ್ರದ ಮುಖ್ಯಸ್ಥರು, ವೀಕ್ಷಕರು, ಮಾರ್ಗಾಧಿಕಾರಿಗಳು, ಇನ್‍ವಿಜಿಲೇಟರ್ ಇತ್ಯಾಧಿ ಅಧಿಕಾರಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ವಿವರಿಸಿ, ಹೆಚ್ಚಿನ ಕಾಳಜಿ ವಹಿಸಿ ಪರೀಕ್ಷಾ ಕರ್ತವ್ಯವನ್ನು ನಿರ್ವಹಿಸಬೇಕೆಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು 144 ಸೆಕ್ಷನ್ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.

ಸಚಿವರ ಸಭೆ : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಇಂದು ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವರಾದ ಸಿ.ಅಶ್ವಥ್‍ನಾರಾಯಣರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ(ವಿಡಿಯೊ ಕಾನ್ಫರೆನ್ಸ್) ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಪಾಲ್ಗೊಂಡು ಮಾತನಾಡಿ, ಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಅಗತ್ಯವಾದ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಿದ್ದತೆ ಕುರಿತು ವಿವರಣೆ ನೀಡಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿವೈಎಸ್‍ಪಿ ಪ್ರಶಾಂತ್ ಮುನ್ನೊಳಿ, ಡಿಡಿಪಿಯು ನಾಗರಾಜ್ ಕಾಗಲ್ಕರ್, ಜಿಲ್ಲಾ ಖಜಾನಾಧಿಕಾರಿ ಎಂ.ಎಸ್. ಸಾವಿತ್ರಿ, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here