ಸರ್ಕಾರಿ ಅಧಿಕಾರಿಗಳು ನೌಕರರು ನಿಷ್ಪಕ್ಷಪಾತ ಹಾಗೂ ಪ್ರಾಮಾಣಿಕ ಸೇವೆ ನೀಡಲಿ ಉಪಲೋಕಾಯುಕ್ತ ಬಿ.ಎಸ್.ಪಾಟೀಲ.

0
97

ಹುಬ್ಬಳ್ಳಿ:ಏ.25: ಜನ ಸಾಮಾನ್ಯರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳು ,ನೌಕರರು ನಿಷ್ಪಕ್ಷಪಾತವಾಗಿ ಹಾಗೂ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಉಪಲೋಕಾಯುಕ್ತ ಬಿ. ಎಸ್. ಪಾಟೀಲ ಹೇಳಿದರು.

ನಗರದ ಸರ್ಕ್ಯೂಟ್ ಹೌಸನಲ್ಲಿ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಲೋಕಾಯುಕ್ತ ಪ್ರಕರಣಗಳು , ಸಾರ್ವಜನಿಕರ ದೂರುಗಳ ಮೇಲೆ ಕೈಗೊಂಡ ಕ್ರಮಗಳ ಪರಿಶೀಲನೆ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ಪ್ರತಿ ತಾಲೂಕು ಹಾಗೂ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಪ್ರತಿ ಹಂತದಲ್ಲೂ ನ್ಯಾಯಬದ್ಧವಾಗಿ ಒದಗಿಸಬೇಕು. ಪಂಚಾಯತ್ ರಾಜ್ ಅಧಿನಿಯಮದಡಿ ಸಿಗಬಹುದಾದ ಸೌಲಭ್ಯಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ಸಕಾಲ ಯೋಜನೆಯಡಿ ನಿಗದಿತ ಕಾಲದಲ್ಲಿ ಕಡತಗಳ ವಿಲೇವಾರಿಯನ್ನು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳು, ನೌಕರರು ಕರ್ತವ್ಯ ನಿಷ್ಠೆಯನ್ನು ಪಾಲಿಸಬೇಕು, ಯಾವುದೇ ಒತ್ತಡಕ್ಕೆ ಮಣಿಯದೆ ಸೇವೆಯನ್ನು ನಿರ್ವಹಿಸಬೇಕು ಎಂದರು.

ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲಾಗುತ್ತಿದೆ. ಜಿಲ್ಲಾಡಳಿತ ಹಾಗೂ ಜಿಲ್ಲೆಯ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪ್ರಗತಿ ಪಥದಲ್ಲಿ ಕಾರ್ಯ ನಿರ್ವಹಿಸುತ್ತಿವೆ.
ಸರ್ಕಾರಿ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಮೃತರಾದ ಕುಟುಂಬಕ್ಕೆ ಪರಿಹಾರ ವಿತರಿಸಲಾಗಿದೆ. ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳ ಕುಟುಂಬಗಳಿಗೆ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೋಷಕತ್ವ ನಿರ್ವಹಣೆಗೆ ನೆರವು ನೀಡಲಾಗುತ್ತಿದೆ ಎಂದರು.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ. ಬಿ ಮಾತನಾಡಿ, ನಗರ ಪ್ರದೇಶಗಳಲ್ಲಿ ಸ್ವಚ್ಛತೆಯ ಸಲಕರಣೆಗಳನ್ನು ಪೌರಕಾರ್ಮಿಕರಿಗೆ ಒದಗಿಸಲಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ ಎಂದರು.

ಹುಬ್ಬಳ್ಳಿ-ಧಾರವಾಡ ಪೋಲಿಸ್ ಆಯುಕ್ತ ಲಾಭೂರಾಮ್ ಮಾತನಾಡಿ ಅವಳಿನಗರದಲ್ಲಿ ಕಾನೂನು ಉಲ್ಲಂಘನೆ ಯಾಗದಂತೆ ಸೂಕ್ತ ಕ್ರಮವಹಿಸಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಉಲ್ಲಂಘಿಸಿದವರ ಮೇಲೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ್, ಜಿಲ್ಲಾ ಪಂಚಾಯತ್ ಸಿ.ಇ.ಓ. ಡಾ‌ಸುರೇಶ್. ಇಟ್ನಾಳ, ಡಿಸಿಪಿ ಸಾಹಿಲ್ ಬಾಗ್ಲಾ,ಲೋಕಾಯುಕ್ತ ಎಸ್.ಪಿ.ವಿಜಯಕುಮಾರ್ ಬಿಸನಳ್ಳಿ,ಡಿಎಸ್‌ಪಿ ಹುಸೇನ್‌ಖಾನ್ ಪಠಾಣ, ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಬಿ.ಚೌಡಣ್ಣವರ, ಹುಬ್ಬಳ್ಳಿ ಶಹರ ತಹಶಿಲ್ದಾರ ಶಶಿಧರ್ ಮಾಡ್ಯಾಳ, ಗ್ರಾಮೀಣ ತಹಶಿಲ್ದಾರ ಪ್ರಕಾಶ್ ನಾಶಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here