ಪ್ರತಿಯೊಬ್ಬರೂ ಮಾನಸಿಕ ಸ್ವಾಸ್ಥ್ಯ ಕಾಯ್ದುಕೊಳ್ಳುವುದು ಅತ್ಯಗತ್ಯ; ಕೆ.ಬಿ.ಪ್ರಸಾದ್

0
49

ಮಡಿಕೇರಿ ಅ.13 :-ಪ್ರತಿಯೊಬ್ಬರೂ ಮಾನಸಿಕ ಸಮತೋಲನ ಕಾಯ್ದುಕೊಳ್ಳುವುದರ ಜೊತೆಗೆ ಮಾನಸಿಕ ಸ್ವಾಸ್ಥ್ಯ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಅವರು ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಎಲ್ಲರಿಗೂ ಮಾನಸಿಕ ಆರೋಗ್ಯ ಮತ್ತು ಯೋಗ ಕ್ಷೇಮವನ್ನು ಜಾಗತಿಕ ಆದ್ಯತೆಯನ್ನಾಗಿ ಮಾಡಿ’ ಎಂಬ ಘೋಷಣೆಯೊಂದಿಗೆ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಗುರುವಾರ ನಡೆಯಿತು. ಪ್ರತಿಯೊಬ್ಬರೂ ಮಾನಸಿಕವಾಗಿ ಒಂದಲ್ಲ ಒಂದು ರೀತಿಯ ಚಟುವಟಿಕೆ ಹಾಗೂ ಕಲಿಕೆಯಲ್ಲಿ ಮುಂದಿರುತ್ತಾರೆ. ಇದು ಅವರ ಮಾನಸಿಕ ಶಕ್ತಿ ಮತ್ತು ಆಸಕ್ತಿ ತೋರಿಸುತ್ತದೆ. ಸಮಾಜದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದೆ. ಕೆಲವೊಂದು ಪ್ರಕರಣಗಳನ್ನು ಹತ್ತಿರದಿಂದ ಅವಲೋಕಿಸಿದಾಗ ಅಪರಾಧ ಮಾಡಬೇಕೆಂಬ ಉದ್ದೇಶದಿಂದ ಕೆಲವೊಂದು ಅಪರಾಧಗಳು ನಡೆದಿರುವುದಿಲ್ಲ. ಬದಲಾಗಿ ಆ ಕ್ಷಣದಲ್ಲಿ ಉದ್ವೇಗಕ್ಕೆ ಒಳಗಾಗಿ ಅಪರಾಧಗಳಲ್ಲಿ ತೊಡಗಿಕೊಂಡಿರುತ್ತಾರೆ. ಇದಕ್ಕೆ ಮುಖ್ಯ ಕಾರಣ ಮನಸ್ಸಿನ ಸ್ಥಿತಿ ಎಂದು ಅವರು ತಿಳಿಸಿದರು.

ಪ್ರತಿಯೊಬ್ಬರೂ ದಿನನಿತ್ಯದ ಜೀವನದಲ್ಲಿ ದೈಹಿಕ ಆರೋಗ್ಯದಿಂದ ಇರುವುದರ ಜೊತೆಗೆ ಮಾನಸಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನವು ಮುಖ್ಯ ಘಟ್ಟವಾಗಿದ್ದು, ಪ್ರತಿಯೊಬ್ಬರೂ ಕಲಿಕಾ ಚಟುವಟಿಕೆ ಹಾಗೂ ಇನ್ನಿತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಉನ್ನತ ಶಿಕ್ಷಣ ಪಡೆದು ತಮ್ಮ ಗುರಿ ಸಾಧಿಸುವಂತಾಗಬೇಕು ಎಂದು ಅವರು ಹೇಳಿದರು.

ಅನಗತ್ಯ ವಿಷಯಗಳನ್ನು ಮನಸ್ಸಿನಿಂದ ತೆಗೆದು ಹಾಕಬೇಕು. ಯುವ ಪೀಳಿಗೆಯವರು ಪ್ರಸ್ತುತ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದಾರೆ. ಆ ನಿಟ್ಟಿನಲ್ಲಿ ಮಾದಕ ವ್ಯಸನದಿಂದ ದೂರವಿರಬೇಕು. ಇದರಿಂದ ವಿದ್ಯಾರ್ಥಿಗಳು ತಮ್ಮ ಗುರಿ ಸೇರಲು ಸಾಧ್ಯ ಎಂದು ಅವರು ಹೇಳಿದರು. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿüಕಾರಿ ಡಾ.ಎನ್.ಆನಂದ್ ಅವರು ಮಾತನಾಡಿ ಪ್ರತಿಯೊಬ್ಬರ ಆರೋಗ್ಯವು ಉತ್ತಮವಾಗಿರಬೇಕಾದರೆ ಮಾನಸಿಕ ಆರೋಗ್ಯವು ಬಹಳ ಮುಖ್ಯ. ಇದರಿಂದ ದೈಹಿಕವಾಗಿ ಸದೃಢರಾಗಲು ಸಾಧ್ಯ ಎಂದು ಅವರು ಹೇಳಿದರು.

‘ಎಲ್ಲರಿಗೂ ಆರೋಗ್ಯ’ ಎಂಬ ವಾಗ್ವಾನಕ್ಕೆ ದೇಶವು ಬದ್ಧವಾಗಿದೆ. ಆರೋಗ್ಯವೆಂದರೆ, ಕೇವಲ ದೈಹಿಕ ಆರೋಗ್ಯವಲ್ಲ. ದೈಹಿಕ, ಮಾನಸಿಕ, ಸಾಮಾಜಿಕವಾಗಿ ಸುಸ್ಥಿರವಾಗಿರುವುದೇ ಆರೋಗ್ಯ ಎಂದು ಅವರು ತಿಳಿಸಿದರು.’

ದೇಹಕ್ಕೆ ಕಾಯಿಲೆಗಳು ಬರುವಂತೆ ಮನಸ್ಸಿಗೂ ಕಾಯಿಲೆಗಳು ಬರುತ್ತದೆ. ದೇಹ ಮತ್ತು ಮನಸ್ಸು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ದೇಹದ ಕಾಯಿಲೆಗಳು ಮನಸ್ಸಿನ ಮೇಲೆ ಪರಿಣಾಮ ಬೀರದಂತೆ, ಮನಸ್ಸಿನ ರೋಗಗಳು ದೇಹದ ಮೇಲೆ ಪರಿಣಾಮ ಬೀರುತ್ತದೆ. ಮಾನಸಿಕ ರೋಗಗಳಿಂದ ಸಾವು ನೋವುಗಳು ಉಂಟಾಗುತ್ತದೆ. ಸರಿಯಾದ ಚಿಕಿತ್ಸೆ ನೀಡದಿದ್ದಲ್ಲಿ ಅಂಗವಿಕಲತೆಗೂ ಇದು ಕಾರಣವಾಗಬಹುದು ಎಂದು ಅವರು ತಿಳಿಸಿದರು.
ಮಾನಸಿಕ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳುವುದು ಮುಖ್ಯ. ಆ ನಿಟ್ಟಿನಲ್ಲಿ ವ್ಯಾಯಾಮ, ಓದುವ ಹವ್ಯಾಸ ಹೀಗೆ ಹಲವು ಚಟುವಟಿಕೆಗಳಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳುವುದರಿಂದ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಮಾನಸಿಕ ಖಿನ್ನತೆಯಿಂದ ಶೇ.10 ರಷ್ಟು ಜನರು ಬಳಲುತ್ತಿದ್ದಾರೆ. ಇದರಿಂದ ಹಲವಾರು ಪರಿಣಾಮಗಳು ಬೀರುತ್ತವೆ. ಆ ನಿಟ್ಟಿನಲ್ಲಿ ಒತ್ತಡವನ್ನು ಕಡಿಮೆ ಮಾಡಿ ಲವಲವಿಕೆಯಿಂದ ಪ್ರತಿಯೊಂದು ಚಟುವಟಿಕೆಗಳಲ್ಲಿ ತೊಡಗಿಕೊಂಡು ಮಾನಸಿಕ ಆರೋಗ್ಯವನ್ನು ಪ್ರತಿಯೊಬ್ಬರೂ ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ಮಾತನಾಡಿ ಮಾನಸಿಕ ಅಸ್ವಸ್ಥತೆ ಎಂಬುದು ಯಾವ ಹಂತದಲ್ಲಿ, ಯಾರಿಗೆ, ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯುವುದಿಲ್ಲ. ಆ ನಿಟ್ಟಿನಲ್ಲಿ ಯುವ ಪೀಳಿಗೆಯವರಿಗೆ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವ ಸಲುವಾಗಿ ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ವಿಕಲಚೇತನರು ಹಾಗೂ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವವರನ್ನು ಎಲ್ಲಿಯಾದರೂ ಕಂಡು ಬಂದರೆ ದೂ.ಸಂ.08272-295828 ನ್ನು ಸಂಪರ್ಕಿಸಿ ಮಾಹಿತಿ ನೀಡಬಹುದು. ಮಾನಸಿಕ ಆರೋಗ್ಯವನ್ನು ಕಾಪಾಡಿಕೊಂಡು ನಮ್ಮ ಜೀವನ ಶೈಲಿಯಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುವುದರಿಂದ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಡಾ.ಲಕ್ಷ್ಮೀದೇವಿ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವು ಪೂರಕವಾಗಿದೆ ಎಂದರು.
ಬುದ್ದಿ ಮತ್ತು ಮನಸ್ಸಿನ ಆರೋಗ್ಯವು ನೋಟಕ್ಕೆ ನಿಲುಕದಾಗಿದೆ. ವ್ಯವಹಾರಿಕ ಜಗತ್ತಿನ ಒಳಿತು ಮತ್ತು ಕೆಡುಕುಗಳನ್ನು ತಿಳಿಸುವುದು ನಮ್ಮ ಬುದ್ಧಿಯಾಗಿದೆ. ಬುದ್ಧಿ ಮತ್ತು ಮನಸ್ಸಿನ ಹೊಂದಾಣಿಕೆಯ ಆಧಾರದ ಮೇಲೆ ನಮ್ಮ ಸ್ವಭಾವ ನಡತೆ ಅವಲಂಬಿತವಾಗಿರುತ್ತದೆ ಎಂದು ಅವರು ಹೇಳಿದರು.
ಕಳವಳದಿಂದ ಕೂಡಿದ ಮನಸ್ಸಿನಿಂದ ವ್ಯಕ್ತಿಗಳ ಸ್ವಭಾವದಲ್ಲಿ ವ್ಯತ್ಯಾಸಗಳನ್ನು ಕಾಣಬಹುದು. ಮಾನಸಿಕ ಖಿನ್ನತೆಗೆ ಒಳಗಾದಾಗ ಅದನ್ನು ಎದುರಿಸುವ ಶಕ್ತಿ ಮತ್ತು ಸಾಮಥ್ರ್ಯ ಪ್ರತಿಯೊಬ್ಬರೂ ಬೆಳೆಸಿಕೊಳ್ಳುವಂತಾಗಬೇಕು. ಕೆಲವೊಂದು ಸೂಕ್ಷ್ಮ ವಿಚಾರಗಳಿಂದ ವ್ಯಕ್ತಿಯೂ ಖಿನ್ನತೆಗೆ ಒಳಗಾಗುತ್ತಾರೆ ಎಂದು ಅವರು ತಿಳಿಸಿದರು.
ಮನಸ್ಸು ಸಮಯಕ್ಕೆ ಅನುಗುಣವಾಗಿ ಬದಲಾಗುತ್ತದೆ. ದುಶ್ಚಟಗಳಿಗೆ ಬಲಿಯಾಗಿ, ಖಿನ್ನತೆ, ಬುದ್ದಿಮಾಂದ್ಯತೆ ಇನ್ನಿತರ ಮಾನಸಿಕ ಕಾಯಿಲೆಗಳಿಗೆ ಒಳಗಾಗುತ್ತಾರೆ ಎಂದು ಅವರು ತಿಳಿಸಿದರು.
ಮನೋವೈದ್ಯರಾದ ಡಾ.ಡೇವಿನ್ ಲಿನೇಕರ್ ಕರ್ಕಡ ಅವರು ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಸಿಬ್ಬಂದಿಗಳು, ಇತರರು ಇದ್ದರು.

LEAVE A REPLY

Please enter your comment!
Please enter your name here