ಕ್ರೀಡೆ ಮನುಷ್ಯನ ದೇಹವನ್ನು ಸದೃಢವಾಗಿಸುತ್ತದೆ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್

0
70

ಉಡುಪಿ, ಡಿಸೆಂಬರ್ 14 : ಕ್ರೀಡೆ ಮನಷ್ಯನ ದೇಹವನ್ನು ಸದೃಢವಾಗಿಸುವುದರ ಜೊತೆಗೆ ಮನಸ್ಸನ್ನು ಸದೃಢವಾಗಿಸಿ, ಉತ್ಸಾಹದಿಂದ ದೈನಂದಿನ ಕೆಲಸ ಕಾರ್ಯಗಳನ್ನು ಮಾಡಲು ಸ್ಫೂರ್ತಿ ನೀಡುತ್ತದೆ ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ನೌಕರರು ಸಾರ್ವಜನಿಕ ಸೇವೆ ನೀಡುವಲ್ಲಿ ಹೆಚ್ಚು ಉತ್ಸಾಹದಿಂದ ಕಾರ್ಯ ನಿರ್ವಹಿಸುವ ಅಗತ್ಯವಿದ್ದು, ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮಗೊಳ್ಳಲಿದ್ದು, ಇದು ಪ್ರತಿಯೊಬ್ಬರ ದೈನಂದಿನ ಭಾಗವಾಗಬೇಕು. ನೌಕರರು ತಮ್ಮ ಕುಟುಂಬದೊ0ದಿಗೆ ಕಾಲ ಕಳೆಯಲು ಸಹ ಅಗತ್ಯ ಸಮಯವನ್ನು ಮೀಸಲಿಡಬೇಕು ಎಂದರು.

ಸರಕಾರಿ ನೌಕರರು ಪ್ರತಿ ನಿತ್ಯ ಒತ್ತಡದಲ್ಲಿ ಕಾರ್ಯನಿರ್ವಸುತ್ತಿದ್ದು, ನೌಕರರು ಪ್ರತೀ ದಿನ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಹೆಚ್ಚಿನ ದೈಹಿಕ ಕ್ಷಮತೆ ದೊರೆಯಲಿದ್ದು, ಇದರಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಹೆಬ್ರಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಪೂಜಾರಿ, ಕಾರ್ಕಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಡಾ.ಜಿ.ಶಂಕರ್ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ, ಜಿಲ್ಲಾ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಉದಯ್ ಕುಮಾರ್ ಶೆಟ್ಟಿ, ಖಜಾಂಚಿ ಷರೀಫ್ ರೋಣ , ನಿಕಟ ಪೂರ್ವ ಜಿಲ್ಲಾ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ನಿರೂಪಿಸಿದರು.

LEAVE A REPLY

Please enter your comment!
Please enter your name here