ಕೆಲಸಗಳಲ್ಲಿ ತೊಡಗಿರುವ ಕಿಶೋರಾವಸ್ಥೆಯ ಮಕ್ಕಳನ್ನು ರಾಷ್ಟ್ರದ ಮುಖ್ಯ ವಾಹಿನಿಗೆ ತರಲು ಪ್ರತಿಯೊಬ್ಬರೂ ಕೈಜೋಡಿಸಬೇಕು: ನ್ಯಾ.ಸತೀಶ್ ಜೆ.ಬಾಳಿ

0
36

ಬಳ್ಳಾರಿ,ಮಾ.4 : ಮಕ್ಕಳು ರಾಷ್ಟ್ರದ ಸಂಪತ್ತು, ಕಲಿಯುವ ವಯಸ್ಸಿನ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸದಲ್ಲಿ ನೇಮಿಸಿಕೊಳ್ಳುವುದು ಅಪರಾಧವಾಗಿದೆ. ಶಿಕ್ಷಣ ವಂಚಿತ ಹಾಗೂ ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ರಾಷ್ಟ್ರದ ಮುಖ್ಯವಾಹಿನಿಗೆ ಕರೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಂಘಟಿತರಾಗಿ ಪ್ರಯತ್ನಿಸಬೇಕಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸತೀಶ್.ಜೆ.ಬಾಳಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಇವರ ಸಂಯುಕ್ತಾಶ್ರಯದಲ್ಲಿ ಶಿಕ್ಷಣವೇ ಶಕ್ತಿ ಬಾಲ ದುಡಿಮೆಗೆ ಮುಕ್ತಿ ಎಂಬ ಘೋಷವಾಕ್ಯದೊಂದಿಗೆ “ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಮತ್ತು ತಿದ್ದುಪಡಿ ಕಾಯ್ದೆ 2016ರ ಕುರಿತು” ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಜನ ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಸಂಪೂರ್ಣ ನಿಷೇಧಿಸಿದ್ದು ಮತ್ತು 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ಸಂಜ್ಞೆಯ (ವಾರೆಂಟ್ ರಹಿತ ಬಂಧಿಸಬಹುದಾದ) ಅಪರಾಧವಾಗಿದೆ ಎಂದು ತಿಳಿಸಿದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರನ್ನು ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ಮಾಲೀಕರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ ರೂ.20 ಸಾವಿರದಿಂದ 50 ಸಾವಿರದವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.
ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್ ಅವರು ಮಾತನಾಡಿ, 6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗ ಅಥವಾ ಪ್ರಕ್ರಿಯೆಗಳಲ್ಲಿ ಹಾಗೂ 18 ವರ್ಷ ವಯಸ್ಸಿನವರೆಗಿನ ಕಿಶೋರರು ಅಪಾಯಕಾರಿ ಉದ್ದಿಮೆಗಳಲ್ಲಿ ದುಡಿಯುವುದು ಕಂಡಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಸಂಪರ್ಕಿಸಿ ದೂರು ನೀಡಬೇಕು ಅಥವಾ ಅಂತರ್ಜಾಲ ಪೆನ್ಸಿಲ್ ಪೋರ್ಟಲ್‍ನ www.pencil.gov.in ನಲ್ಲಿ ದೂರು ಸಲ್ಲಿಸಬಹುದಾಗಿದೆ ಎಂದರು.
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜನ ಜಾಗೃತಿ ಮೂಡಿಸುವ ಸಂಚಾರಿ ವಾಹನವು ಜಿಲ್ಲೆಯಾದ್ಯಂತ ಒಟ್ಟು 10 ದಿನಗಳ ಕಾಲ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿಯ ನಿರ್ಮೂಲನೆಯನ್ನು ಬೀದಿ ನಾಟಕದ ಮೂಲಕ ಜನ ಜಾಗೃತಿ ಮೂಡಿಸುವ ಚಿಗುರು ಕಲಾ ತಂಡಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸತೀಶ್.ಜೆ.ಬಾಳಿ ಅವರು ಹಲಗೆ ಬಾರಿಸುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಕಾರ್ಮಿಕ ಅಧಿಕಾರಿ ಕಮಲ್‍ಷಾ ಅಲ್ತಾಫ್ ಅಹಮದ್, ಪಿಂಚಣಿ ಇಲಾಖೆಯ ಸಹಾಯಕ ನಿರ್ದೇಶಕರಾದ ಹೊನ್ನುರಪ್ಪ, ಬಾಲ ಮಂದಿರದ ಸಂಯೋಜಕ ಮಂಜುನಾಥ, ಕಾರ್ಮಿಕ ಇಲಾಖೆಯ ಸಿಬ್ಬಂದಿ ಶಿವರಾಜ.ಆರ್.ಎನ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ವಿಜಯಲಕ್ಷ್ಮೀ, ಡಿಸಿಪಿಯು ಗಂಗಾಧರ, ಹೊನ್ನುರಪ್ಪ, ಕಲಾವತಿ, ಉಮೇಶ್, ಎಸ್‍ಜಿಪಿಯು ಲಲಿತಮ್ಮ, ಮಕ್ಕಳ ಸಹಾಯವಾಣಿ ಆನಂದ್, ಕಾರ್ತಿಕ, ಸುಶೀಲಾ, ಸಜನಿ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿಗಳು ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here