ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೂರ್ವಭಾವಿ ಸಭೆ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು

0
40

ಬಳ್ಳಾರಿ,ಜೂ.03:ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಎಲ್ಲಾ ಇಲಾಖೆಯ ಅಧಿಕಾರಿಗಳು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಮಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಅಧಿಕಾರಿಗಳಿಗೆ ಸೂಚಿಸಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದಿನಾಚರಣೆಗಳು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು, ಬದಲಾಗಿ ಸ್ವಚ್ಛತೆಯು ನಮ್ಮ ಮನೆಯಿಂದಲೇ ಆರಂಭಗೊಳ್ಳಬೇಕು. ಈ ನಿಟ್ಟಿನಲ್ಲಿ ಸ್ವಚ್ಛತೆಯ ಕುರಿತು ಗ್ರಾಪಂ, ತಾಪಂ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಸರ್ಕಾರಿ ಕಟ್ಟಡ, ಕಚೇರಿ, ಅಂಗನವಾಡಿ ಕೇಂದ್ರಗಳು ಮತ್ತು ಶಾಲೆಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡು, ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ಗಿಡ-ಗಂಟಿ, ನೀರು ನಿಲ್ಲದಂತೆ ಕ್ರಮವಹಿಸಬೇಕು ಎಂದು ತಿಳಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ವಿಂಗಡಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವಂತೆ ಜಾಗೃತಿ ಮೂಡಿಸಬೇಕು. ಗ್ರಾಮ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಮಟ್ಟದಲ್ಲಿ ಅಂಗನವಾಡಿ ಕೇಂದ್ರಗಳ ಮೂಲಕ ಕಡಿಮೆ ಪ್ಲಾಸ್ಟಿಕ್ ಆಂದೋಲನ ಕಾರ್ಯಕ್ರಮ ನಡೆಸಬೇಕು ಎಂದರು.
ಮಳೆಗಾಲ ಸಂದರ್ಭದಲ್ಲಿ ಹಳ್ಳಿಗಳಲ್ಲಿ ಚರಂಡಿ, ರಸ್ತೆ ಗುಂಡಿಗಳಲ್ಲಿ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಅವುಗಳಿಂದ ರಕ್ಷಿಸಿಕೊಳ್ಳಲು ವಿವಿಧ ಜಾಗೃತಿ ಕಾರ್ಯಕ್ರಮಗಳ ಮೂಲಕ ಆರೋಗ್ಯ ಇಲಾಖೆ ಸಿಬ್ಬಂದಿಗಳು ಜನರಲ್ಲಿ ಅರಿವು ಮೂಡಿಸಬೇಕು ಎಂದರು.
ಜಿಲ್ಲೆಯ ಐದು ತಾಲೂಕುಗಳಲ್ಲಿ ಪ್ರತಿ ತಾಲೂಕುವಾರು 25 ಶಾಲೆಗಳನ್ನು ಗುರುತಿಸಿ, ವಿವಿಧ ಬಗೆ ಗಿಡಗಳನ್ನು ನೆಡಬೇಕು ಎಂದು ಸೂಚಿಸಿದರು.
ಹಳ್ಳಿ-ಭಾಗಗಳಲ್ಲಿ ಕುಡಿಯುವ ನೀರಿನ ಮೂಲಗಳು ಹಾಗೂ ಅವುಗಳ ಸಂಪರ್ಕಗಳು ದುರಸ್ಥಿಗೊಂಡಾಗ ತಕ್ಷಣವೇ ಕ್ರಮ ವಹಿಸಬೇಕು. ದುರಸ್ತಿ ಹೊಂದಿದ ಚರಂಡಿಗಳನ್ನು ಸರಿಪಡಿಸಲು ಸೂಕ್ತ ನಿರ್ವಹಣೆ ಕ್ರಮ ಕೈಕೊಳ್ಳಬೇಕು. ಕುಡಿಯುವ ನೀರು ಯಾವುದೇ ಕಾರಣಕ್ಕೂ ಕಲುಷಿತಗೊಳ್ಳದಂತೆ ನೋಡಿಕೊಳ್ಳಬೇಕು. ನೀರು ಸದ್ಬಳಕೆ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.
2023ರ ಪರಿಸರ ದಿನಾಚರಣೆಯನ್ನು ಅರ್ಥಗರ್ಭೀತವಾಗಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಒಳ್ಳೆಯ ಪರಿಸರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here