ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಕ್ಷಯಮುಕ್ತ ಗ್ರಾಮ ಪಂಚಾಯತ್ ಎಲ್ಲರ ಸಂಕಲ್ಪವಾಗಲಿ, ರೋಗ ನಿರ್ಮೂಲನೆ ಮಾಡಲು ಎಲ್ಲರ ಸಹಕಾರ ಅಗತ್ಯ: ಶರಣಬಸವರಾಜ

0
45

ಬಳ್ಳಾರಿ,ಜೂ.08: ಜಿಲ್ಲೆಯಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಪ್ರತಿ ಗ್ರಾಮ ಮಟ್ಟದಲ್ಲಿ ರೋಗದ ಲಕ್ಷಣಗಳುಳ್ಳವರನ್ನು ಗುರುತಿಸಿ, ಕಫ ಪರೀಕ್ಷೆ ಅಥವಾ ಇತರ ಪರೀಕ್ಷೆಗಳನ್ನು ಸಕಾಲದಲ್ಲಿ ಕೈಗೊಂಡು ಕ್ಷಯಮುಕ್ತ ಜಿಲ್ಲೆಯನ್ನಾಗಿಸುವುದರ ಜೊತೆಗೆ ಕ್ಷಯಮುಕ್ತ ಗ್ರಾಮ ಪಂಚಾಯತ್ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಉಪ ಕಾರ್ಯದರ್ಶಿ ಶರಣಬಸವರಾಜ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ, ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಪ್ರಧಾನಮಂತ್ರಿಗಳ ಆಶಯದಂತೆ 2025 ರ ವೇಳೆಗೆ ಭಾರತ ದೇಶವನ್ನು ಕ್ಷಯ ಮುಕ್ತ ಮಾಡಲು ಉದ್ದೇಶಿಸಿರುವುದರಿಂದ ‘ಟಿ.ಬಿ ಯನ್ನು ಸೋಲಿಸಿ ದೇಶವನ್ನು ಗೆಲ್ಲಿಸಿ’ ಎಂಬ ಘೋಷಣೆಯೊಂದಿಗೆ ನಾವೆಲ್ಲರೂ ಪಣತೊಡಬೇಕಿದೆ ಎಂದರು.

ಈಗಾಗಲೇ ಪಂಚಾಯತಿ ಮಟ್ಟದಲ್ಲಿ ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನದಡಿ ಗ್ರಾಮ ಪಂಚಾಯತ್ ಸದಸ್ಯರಿಗೆ ಸಾಂಕ್ರಾಮಿಕ ರೋಗಗಳ ನಿರ್ವಹಣಾ ತರಬೇತಿ ನೀಡಲಾಗುತ್ತಿದೆ. ನರೇಗಾ ಕೂಲಿ ಕಾರ್ಮಿಕರಿಗೆ ಕೆಲಸದ ಸ್ಥಳದಲ್ಲಿಯೇ ರಕ್ತದೊತ್ತಡ, ಸಕ್ಕರೆಖಾಯಿಲೆ ಕ್ಷಯರೋಗ ಪರೀಕ್ಷೆ ಮಾಡಲಾಗುತ್ತಿದ್ದು, ಜನತೆಗೆ ಜಾಗೃತಿ ನೀಡುವ ಮೂಲಕ ಹೆಚ್ಚು ಹೆಚ್ಚು ಪರೀಕ್ಷೆಗಳನ್ನು ಕೈಗೊಂಡು ಕ್ಷಯಮುಕ್ತ ಗ್ರಾಮ ಪಂಚಾಯತ್ ಘೋಷಣೆಗಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಎಲ್.ಜನಾರ್ಧನ ಅವರು ಮಾತನಾಡಿ, ಎರಡು ವಾರಗಳಿಗೂ ಮೇಲ್ಪಟ್ಟ ಕೆಮ್ಮು ಕ್ಷಯರೋಗದ ಸಾಮಾನ್ಯ ಲಕ್ಷಣವಾಗಿದೆ. ಸಂಜೆ ವೇಳೆ ಜ್ವರ ಬರುವುದು, ರಾತ್ರಿ ವೇಳೆ ಬೆವರುವುದು, ಎದೆ ನೋವು, ಕೆಲವೊಮ್ಮೆ ಕಫದ ಜೊತೆ ರಕ್ತ ಬೀಳುವುದು, ಹಸಿವಾಗದಿರುವುದು ತೂಕ ಕಡಿಮೆಯಾಗುವುದು, ಮಕ್ಕಳಲ್ಲಿ ಸತತವಾಗಿ ತೂಕ ಕಡಿಮೆಯಾಗುವುದು ಅಥವಾ ಹೆಚ್ಚದೇ ಇರುವುದು, ಚಿಕಿತ್ಸೆಗೆ ಬಗ್ಗದ ಅತಿಸಾರ ಬೇದಿ, ಕುತ್ತಿಗೆ ಬಗುಲುಗಳಲ್ಲಿ ಗಡ್ಡೆ ಸೇರಿದಂತೆ ಇತರೆ ಲಕ್ಷಣಗಳಿದ್ದರೆ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ 2 ಬಾರಿ ಕಫ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಕ್ಷಯರೋಗಿಗಳ ಪತ್ತೆ ಮತ್ತು ರೋಗದ ಕುರಿತಾಗಿ ಜಾಗೃತಿ ನೀಡಲಾಗುತ್ತಿದ್ದು, ಸಿಬ್ಬಂದಿಗಳು ನಿರಂತರವಾಗಿ ಕ್ಷೇತ್ರ ಮಟ್ಟದಲ್ಲಿ ಕ್ಷಯರೋಗಿಗಳ ಅನುಸರಣೆ ಮಾಡುತ್ತಿದ್ದಾರೆ ಹಾಗೂ ಚಿಕಿತ್ಸೆಯು ಪರಿಣಾಮಕಾರಿಯಾಗಿ ನೀಡುತ್ತಿದ್ದಾರೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಗಣಿಗಾರಿಕೆ ಮತ್ತು ಕಾರ್ಖಾನೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಜನಸಂಖ್ಯೆ ಹೆಚ್ಚಾಗಿದ್ದು, ಕ್ಷಯರೋಗಕ್ಕೆ ತುತ್ತಾಗುವ ದುರ್ಬಲ ವರ್ಗದ ಜನರೆಂದು ಕೇಂದ್ರ ಕ್ಷಯ ವಿಭಾಗದಿಂದ ರಾಷ್ಟ್ರೀಯ ಕಾರ್ಯತಂತ್ರದ ಯೋಜನೆ ಅಡಿಯಲ್ಲಿ ಗುರುತಿಸಲಾಗಿದೆ. ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರ ನೀಡಲು ದಾನಿಗಳಿಂದ 584 ಜನರಿಗೆ ಪೌಷ್ಟಿಕ ಅಹಾರ ಕಿಟ್ ಒದಗಿಸಲಾಗಿದ್ದು, ಯಾವುದಾದರೂ ಸಂಘ-ಸಂಸ್ಥೆಗಳು ಸಹಕಾರ ನೀಡಲು ಮುಂದೆ ಬರಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ.ಇಂದ್ರಾಣಿ.ವಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಎಸ್-2 ಶ್ರೀಕುಮಾರ, ಜಿಲ್ಲಾ ಕಾರ್ಯಕ್ರಮ ಅನುಷ್ಟಾನ ಅಧಿಕಾರಿಗಳಾದ ಡಾ.ಪೂರ್ಣಿಮಾ ಕಟ್ಟಿಮನಿ, ಡಾ.ಆರ್ ಅನೀಲಕುಮಾರ, ಡಾ.ವಿರೇಂದ್ರ ಕುಮಾರ, ಡಬ್ಲ್ಯೂಹೆಚ್‍ಓ ಕ್ಷಯರೋಗ ರಾಜ್ಯ ಸಲಹೆಗಾರರಾದ ಡಾ.ಹಂಸವೇಣಿ, ಡಾ.ಸಂಗೀತಾ, ಸಂಡೂರು ತಾಪಂ ಇಒ ಷಡಕ್ಷರಯ್ಯ, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಮೋಹನಕುಮಾರಿ, ಡಾ.ಈರಣ್ಣ, ಡಾ.ರಾಧಿಕಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ, ಕ್ಷಯರೋಗ ವಿಭಾಗದ ಉದಯಕುಮಾರ, ಕೆಚ್‍ಪಿಟಿಯ ಪಂಪಾಪತಿ ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here