ಸೆ.25 ರ “ಜನತಾ ದರ್ಶನ” ಕಾರ್ಯಕ್ರಮದ ಸ್ಥಳ ಬದಲಾವಣೆ ಸಾರ್ವಜನಿಕರು ನೇರವಾಗಿ ದೂರು,ಅಹವಾಲು ಸಲ್ಲಿಸಲು ವಿಶೇಷ ಅವಕಾಶ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್

0
44

ಬಳ್ಳಾರಿ,ಸೆ.21: ಇದೇ ಸೆ.25ರಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಅಹವಾಲುಗಳನ್ನು ನೇರವಾಗಿ ಸಂಬಂಧಿಸಿದ ಇಲಾಖೆ/ಅಧಿಕಾರಿಗಳಿಗೆ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಜನ ಭಾಗವಹಿಸುವ ನಿರೀಕ್ಷೆ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ ಜನತಾ ದರ್ಶನ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರು ಹೇಳಿದರು.
ಅವರು ಇಂದು ಜನತಾ ದರ್ಶನ ಕುರಿತು ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ ಸಾರ್ವಜನಿಕರ ಹಿತದೃಷ್ಟಿಯಿಂದ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸರ್ಕಾರ ಸೂಕ್ತ ಹಾಗೂ ತ್ವರಿತಗತಿಯಲ್ಲಿ ಸ್ಪಂದಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಇದಕ್ಕೆ ಪೂರ್ವಭಾವಿಯಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.
ಅಂದು ಬೆಳಿಗ್ಗೆ 11ಕ್ಕೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿ ಮೊದಲ ಜಿಲ್ಲಾ ಮಟ್ಟದ “ಜನತಾ ದರ್ಶನ” ಕಾರ್ಯಕ್ರಮವು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ನೇತೃತ್ವದಲ್ಲಿ ನಡೆಯಲಿದೆ. ಜನತಾ ದರ್ಶನ ಕಾರ್ಯಕ್ರಮವನ್ನು ಶಿಷ್ಟಾಚಾರದನ್ವಯ ಯಶಸ್ವಿಯಾಗಿ ಸಂಘಟಿಸಲು ಎಲ್ಲ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಜನತಾ ದರ್ಶನ ದಿನದಂದು ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಹಾಜರಿರಬೇಕು, ಸಾರ್ವಜನಿಕರಿಂದ ಸ್ವೀಕೃತವಾದ ಎಲ್ಲಾ ಅರ್ಜಿಗಳು, ಮನವಿಗಳನ್ನು ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ ಐಪಿಜಿಆರ್‍ಎಸ್ (IPGRS-Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸಬೇಕು. ಜನತಾ ದರ್ಶನ ಸ್ಥಳದಲ್ಲಿ ಸಾರ್ವಜನಿಕರಿಂದ ಮನವಿ, ಅರ್ಜಿ ಸ್ವೀಕರಿಸಲು ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.
ಸಾರ್ವಜನಿಕರಿಂದ ಸಲ್ಲಿಕೆಯಾಗುವ ಎಲ್ಲಾ ರೀತಿಯ ದೂರು ಹಾಗೂ ಅಹವಾಲುಗಳ ಅರ್ಜಿಗಳನ್ನು ಬಹಳಷ್ಟು ಜಾಗೃತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಲಾವಧಿಯೊಳಗೆ ನಿಯಮಾನುಸಾರ ಪರಿಹಾರೋಪಾಯಗಳನ್ನು ಒದಗಿಸುವ ಕುರಿತು ಆಯಾ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕು.
ಸಾರ್ವಜನಿಕರ ಸಮಸ್ಯೆಗಳನ್ನು ತಾಲೂಕು ಮಟ್ಟದಲ್ಲಿ ಮತ್ತು ಜಿಲ್ಲಾಮಟ್ಟದಲ್ಲಿ ಆಲಿಸಿ ಇಲ್ಲಿಯೇ ಪರಿಹರಿಸಲು ಆದ್ಯತೆ ನೀಡಬೇಕು. ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಬಾಕಿ ಇರುವ ಸಾರ್ವಜನಿಕ ಮನವಿ, ಅಹವಾಲುಗಳ ಕುರಿತು ಪರಿಶೀಲಿಸಿ ಇತ್ಯರ್ಥಗೊಳಿಸಲು ಅಗತ್ಯ ಕ್ರಮವಹಿಸಬೇಕು. ಬಾಕಿ ಉಳಿಸಿಕೊಂಡಲ್ಲಿ ಆಯಾ ಇಲಾಖೆಯ ಅಧಿಕಾರಿಗಳೇ ಜವಾಬ್ದಾರಿಯಾಗುತ್ತಾರೆ ಎಂದರು.
ಗ್ರಾಮ ಮಟ್ಟದಲ್ಲಿ ಈ 25 ರಂದು ನಡೆಯುವ ಜನತಾ ದರ್ಶನ ಕಾರ್ಯಕ್ರಮದ ಕುರಿತು ಡಂಗುರ ಸಾರುವ ಮೂಲಕ ಮಾಹಿತಿ ನೀಡಬೇಕು. ಇದಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು ಕ್ರಮ ವಹಿಸಬೇಕು ಮತ್ತು ನಗರ ವ್ಯಾಪ್ತಿಯಲ್ಲಿ ವ್ಯಾಪಕ ಪ್ರಚಾರ ನೀಡಬೇಕು ಎಂದು ಅವರು ಹೇಳಿದರು.
ಪ್ರತಿ ತಿಂಗಳು ತಾಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ:
ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು 25 ರಂದು ಜಿಲ್ಲಾ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳಲ್ಲಿ ಎರಡು ತಾಲೂಕುಗಳಲ್ಲಿ ಇದೇ ರೀತಿಯ ಜನತಾ ದರ್ಶನ ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು, ಇದಕ್ಕೆ ಆಯಾ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಾಥ್ ನೀಡಲಿದ್ದಾರೆ ಎಂದು ಅವರು ವಿವರಿಸಿದರು.

ಜನತಾ ದರ್ಶನ ಕಾರ್ಯಕ್ರಮ ಸ್ಥಳ ಬದಲಾವಣೆ::
ಈ ಹಿಂದೆ ನಿಗದಿಗೊಂಡಿದ್ದ ಜನತಾ ದರ್ಶನ ಕಾರ್ಯಕ್ರಮವು ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣ ಬದಲಾಗಿ, ಸಾರ್ವಜನಿಕರ ಹಿತದೃಷ್ಟಿಯಿಂದ ಡಾ.ರಾಜ್‍ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದ ಮುಂಭಾಗ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್ ಅವರು ತಿಳಿಸಿದರು.

ಸಾರ್ವಜನಿಕರ ಗಮನಕ್ಕೆ:
ಯಾವುದೇ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳಿದ್ದರೂ ಸಹ ಸಾರ್ವಜನಿಕರು ತಮ್ಮ ಅಹವಾಲು ಸಲ್ಲಿಸಬಹುದು. ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಜನತಾ ದರ್ಶನದಲ್ಲಿ ಉಪಸ್ಥಿತರಿರುತ್ತಾರೆ. ಸ್ಥಳದಲ್ಲಿಯೇ ನಿಯಮಾನುಸಾರ ಪರಿಹರಿಸಬಹುದಾದ ಸಮಸ್ಯೆಗಳನ್ನು ತಕ್ಷಣ ಪರಿಹರಿಸಲು ಕ್ರಮವಹಿಸುತ್ತಾರೆ. ವಿಳಂಬವಾದರೆ ಹಿಂಬರಹ ನೀಡಿ ಕಾಲಮಿತಿಯಲ್ಲಿ ಸಮಸ್ಯೆಯನ್ನು ಪರಿಹರಿಸಲು ಕ್ರಮ ವಹಿಸುತ್ತಾರೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ದೂರು, ಅಹವಾಲುಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸಿ:
ಸಾರ್ವಜನಿಕರು, ಜನತಾ ದರ್ಶನದಲ್ಲಿ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ತಮ್ಮ ದೂರು ಹಾಗೂ ಅಹವಾಲು ಸಲ್ಲಿಸುವಾಗ ಅರ್ಜಿಗಳು ದ್ವಿ ಪ್ರತಿಯಲ್ಲಿಯಲ್ಲಿರಬೇಕು, ಒಂದು ಅಹವಾಲು/ಸಮಸ್ಯೆಗೆ ಒಂದು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಬೇಕು ಮತ್ತು ಅರ್ಜಿಯಲ್ಲಿ ತಮ್ಮ ದೂರವಾಣಿ ಸಂಖ್ಯೆ ಮತ್ತು ವಿಳಾಸವನ್ನು ತಪ್ಪದೇ ನಮೂದು ಮಾಡಿರಬೇಕು ಎಂದೂ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸಭೆಯಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗುವ ಅರ್ಜಿಗಳು, ಮನವಿಗಳನ್ನು ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ ಐಪಿಜಿಆರ್‍ಎಸ್ (IPGRS-Integrated Public Grievance Redressal System) ತಂತ್ರಾಂಶದಲ್ಲಿ ದಾಖಲಿಸುವ ಕುರಿತು ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ನೀಡಲಾಯಿತು.
ಸಭೆಯಲ್ಲಿ ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಗಿರಿಜಾ ಶಂಕರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸತೀಶ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here