ಸಾರ್ವಜನಿಕರಿಗೆ ಗುಣಮಟ್ಟ ಆರೋಗ್ಯ ಸೇವೆ ಒದಗಿಸುವಲ್ಲಿ ರಾಜಿಯಾಗದಿರಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

0
61

ಬಳ್ಳಾರಿ,ಅ.20: ಸಮುದಾಯಕ್ಕೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡುವಲ್ಲಿ ರಾಜಿಯಾಗದಂತೆ ರೋಗ ಮುಕ್ತ ಸಮಾಜ ನಿರ್ಮಾಣ ಮಾಡಲು ವೈದ್ಯಾಧಿಕಾರಿಗಳು ಬದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಗುರುವಾರ ನಡೆದ ಜಿಲ್ಲೆಯ ವೈದ್ಯಾಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜೀವನ ಶೈಲಿಯ ಕಾಯಿಲೆಗಳಾದ ರಕ್ತದೊತ್ತಡ ಮತ್ತು ಸಕ್ಕರೆ ಕಾಯಿಲೆ ಪರೀಕ್ಷೆಯನ್ನು ಹೆಚ್ಚಾಗಿ ಕೈಗೊಳ್ಳುವ ಮೂಲಕ ಜನತೆಗೆ ಜಾಗೃತಿ ನೀಡುವ ಕಾರ್ಯ ಮಾಡಬೇಕು ಎಂದು ಹೇಳಿದರು.

ಸರ್ಕಾರದ ಪ್ರಮುಖ ಯೋಜನೆಯಾಗಿರುವ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆರೋಗ್ಯ ಕರ್ನಾಟಕ ಯೋಜನೆ ಅಡಿ 5 ಲಕ್ಷದವರೆಗೆ ಬಿಪಿಎಲ್ ಕುಟುಂಬಗಳಿಗೆ ಮತ್ತು ಒಂದೂವರೆ ಲಕ್ಷದವರೆಗೆ ಎಪಿಎಲ್ ಕುಟುಂಬಗಳಿಗೆ ಉಚಿತ ಚಿಕಿತ್ಸೆ ವೆಚ್ಚ ಭರಿಸುತ್ತಿದ್ದು, ಇದರ ಸೌಲಭ್ಯ ಪಡೆಯಲು ಜನರಿಗೆ ಹೆಚ್ಚು ಅರಿವು ಮೂಡಿಸಬೇಕು ಎಂದರು.
ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬರುವ ಬಾಣಂತಿಯರಿಗೆ ಸಕಾಲದಲ್ಲಿ ಪರೀಕ್ಷೆ ಕೈಗೊಂಡು ಸರ್ಕಾರಿ ಆಸ್ಪತ್ರೆಗಳಲ್ಲಿಯೇ ಸಹಜ ಹೆರಿಗೆಗೆ ಮನಃಪೂರ್ವಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಪ್ರಸ್ತುತ ರಾಜ್ಯಾದಾದ್ಯಂತ ನಡೆಯುತ್ತಿರುವ ಅಂಗಾಂಗ ದಾನ ನೋಂದಣಿ ಅಭಿಯಾನ ಕುರಿತು ಜಿಲ್ಲೆಯಲ್ಲಿ ಹೆಚ್ಚಿನ ಪ್ರಚಾರ ಕೈಗೊಂಡು, ಜಿಲ್ಲೆಯು ರಾಜ್ಯಮಟ್ಟದಲ್ಲಿ ಮೊದಲ ಸ್ಥಾನದಲ್ಲಿರಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಗ್ರಾಮೀಣ ಮಟ್ಟದ ಎಲ್ಲಾ ಆಸ್ಪತ್ರೆಗಳಿಗೆ ಮೂಲಭೂತ ಸೌಕರ್ಯಗಳ ಅಗತ್ಯವಿದ್ದಲ್ಲಿ ಸೂಕ್ತ ಕ್ರಿಯಾ ಯೋಜನೆಯೊಂದಿಗೆ ಚರ್ಚಿಸಲು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ಅವರು ಇಲಾಖೆಯಲ್ಲಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಮುಖ್ಯ ಆಡಳಿತ ವೈದ್ಯಾಧಿಕಾರಿಗಳು, ಆಡಳಿತ ವೈದ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here