ಜಿಲ್ಲೆಯ ಅಭಿವೃದ್ಧಿಗಾಗಿ ಅಧಿಕಾರಿಗಳು ಶ್ರಮಿಸಬೇಕು: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ ಚಂದ್ರ

0
31

ಬಳ್ಳಾರಿ,ಡಿ.26:ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವುದು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ನಿಗಧಿತ ಸಮಯದಲ್ಲಿ ಪೂರ್ಣಗೊಳಿಸುವ ಮೂಲಕ ಜಿಲ್ಲೆಯ ಅಭಿವೃದ್ಧಿಗಾಗಿ ಅಧಿಕಾರಿಗಳು ಶ್ರಮಿಸಬೇಕು. ಗಡಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಹಲವಾರು ರೀತಿಯ ಅನುದಾನಗಳು ಲಭ್ಯವಿದ್ದು, ಅವುಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಕೆ.ವಿ.ತ್ರಿಲೋಕ ಚಂದ್ರ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆÀ ನೀಡಿದರು.
ಇಂದು ನಗರದ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಭವಿಷ್ಯದಲ್ಲಿ ಬರಬಹುದಾದ ಸಮಸ್ಯೆಗಳ ಕುರಿತು ಈಗಲೇ ಸಿದ್ಧತೆ ನಡೆಸಬೇಕು ಎಂದು ಹೇಳಿದರು.

ಬಳ್ಳಾರಿಯಂತಹ ಬಿಸಿಲ ನಾಡಿನಲ್ಲಿ ಮುಖ್ಯವಾಗಿ ಮುಂದಿನ ಒಂದೆರೆಡು ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಜಾನುವಾರುಗಳಿಗೆ ಮೇವಿನಂತಹ ಸಮಸ್ಯೆಗಳು ಖಂಡಿತವಾಗಿ ಬರುತ್ತವೆ, ಇಂತಹ ಸಮಸ್ಯೆಗಳಾದಾಗ ಸರ್ಕಾರ ಸಾರ್ವಜನಿಕರಿಗೆ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ಕುಡಿಯುವ ನೀರಿನ ಸಮಸ್ಯೆ ಮತ್ತು ಜಾನುವಾರುಗಳ ಮೇವಿನ ಸಮಸ್ಯೆ ಪರಿಹರಿಸಲು ಸನ್ನದ್ಧರಾಗಿರಬೇಕು ಎಂದರು.

ನಂತರ ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸಾಧನೆಗಳ ಕುರಿತು ಪರಾಮರ್ಶಿಸಿದ ಅವರು ಕಳೆದ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮಾಡಿರುವ ಸಾಧನೆಗಿಂತ ಈ ವರ್ಷದ ಸಾಧನೆ ಅದಕ್ಕಿಂತ ಉತ್ತಮವಾಗಿರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮೀಣಾ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿ ಗುಪ್ತಾ ಅವರು, ಮುಂಬರುವ ಬೇಸಿಗೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 114 ಹಳ್ಳಿಗಳನ್ನು ಕುಡಿಯುವ ನೀರಿಗೆ ತಲೆದೋರಬಹುದಾದಂತಹ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದ್ದು, ಖಾಸಗಿ ಬೋರ್‍ವೆಲ್ ಮತ್ತು ಕುಡಿಯುವ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಮಾರ್ಚ್ ತಿಂಗಳಿನಿಂದ ಆರಂಭವಾಗುವ ಬೇಸಿಗೆಯನ್ನು ನಿಭಾಯಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಭೆಗೆ ವಿವರಿಸಿದರು.

ಸಿರುಗುಪ್ಪ-ಬಳ್ಳಾರಿ, ಬಳ್ಳಾರಿ-ಸಂಡೂರು ಭಾಗಗಳಿಗೆ ತೆರಳುವ ರಸ್ತೆಗಳಲ್ಲಿ ತಗ್ಗು ಗುಂಡಿಗಳನ್ನು ಮುಚ್ಚಲು ಕ್ರಮವಹಿಸಬೇಕು. ಶೇ.60ರಷ್ಟು ಬಾಧಿತವಾದ ರಸ್ತೆಗಳಿಗೆ ಆದ್ಯತೆ ನೀಡಿ, ಕಾಮಗಾರಿ ಕೈಗೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಮತ್ತು ರಾಜ್ಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಹಂತದಲ್ಲಿ ಮಕ್ಕಳ ಕಲಿಕೆಯು ಕುಂಠಿತಗೊಂಡಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಶಿಕ್ಷಕರು ಮಕ್ಕಳಲ್ಲಿನ ಕಲಿಕೆಯ ಗುಣಮಟ್ಟವನ್ನು ಕಾಯ್ದುಕೊಂಡು, ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರಲು ಶ್ರಮಿಸಬೇಕು ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಉಮಾದೇವಿ ಅವರು ಮಾತನಾಡಿ, ಮಕ್ಕಳಿಗೆ ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದ್ದು, ಓದು-ಬರಹ, ಕಲಿಕೆ, ನಲಿ ಕಲಿ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಣೆ ದಂಧೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಬಳ್ಳಾರಿ ತಾಲ್ಲೂಕಿನ ಮೋಕಾ, ವಣೆನೂರು, ಯಾಳ್ಪಿ ಗ್ರಾಮ ವ್ಯಾಪ್ತಿಯಲ್ಲಿ ನಡೆಯುತ್ತಿದ್ದು, ರಾತ್ರಿ ವೇಳೆ ಗಸ್ತು ಕಾರ್ಯಾಚರಣೆ ನಡೆಸಲಾಗುತ್ತಿದೆ ಮತ್ತು ಅಂತಹ ಪ್ರಕರಣ ಕಂಡುಬಂದಲ್ಲಿ ದಂಡ ವಿಧಿಸುತ್ತಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಸಭೆಗೆ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು, ಕೇವಲ ದಂಡ ವಿಧಿಸುವುದಲ್ಲ ಬದಲಾಗಿ ಪ್ರಕರಣ ದಾಖಲಿಸಿಕೊಂಡು ಶಿಕ್ಷೆ ವಿಧಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಈವರೆಗೆ 5 ಕೋರೋನಾ (ಜೆ.ಎನ್ 1) ಪ್ರಕರಣ ಕಂಡುಬಂದಿದ್ದು, ಅವರಿಗೆ ಹೋಮ್ ಕ್ವಾರೆಂಟೈನ್‍ನಲ್ಲಿರಿಸಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿದಿನ 120 ರಿಂದ 200 ರವರೆಗೆ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಭಯಪಡುವಂತವಹ ಸ್ಥಿತಿ ಎದುರಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಮೇಶ್ ಬಾಬು ಅವರು ಸಭೆಗೆ ವಿವರಿಸಿದರು.
ಇದಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ ಚಂದ್ರ ಅವರು, ಜಿಲ್ಲೆಯಲ್ಲಿ ಜಿಂದಾಲ್ ಇರುವುದರಿಂದ ತೋರಣಗಲ್ಲು ಪಟ್ಟಣಕ್ಕೆ ರಾಷ್ಟ್ರಮಟ್ಟದಲ್ಲಿ ಬಂದು ಹೋಗುವವರು ಹೆಚ್ಚಿರುವ ಕಾರಣಕ್ಕೆ ಅಲ್ಲಿ ಹೆಚ್ಚಿನ ನಿಗಾವಹಿಸಬೇಕು, ಜಿಲ್ಲೆ ಜಿಲ್ಲೆ ರಾಜ್ಯ ಮಟ್ಟದ ಗಡಿಗಳನ್ನು ಹೊಂದಿರುವ ಕಾರಣಕ್ಕೆ ಹೊರಹೋಗುವವರ ಮತ್ತು ಒಳಬರುವವರ ಬಗ್ಗೆ ನಿಗಾವಹಿಸಬೇಕು ಹಾಗೂ ಇನ್ನೂ ಹೆಚ್ಚಿನ ತಪಾಸಣೆ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿ ದಾಸ್ತಾನು ಸಂಗ್ರಹಣೆ ಇಟ್ಟುಕೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪ ಸಂಖ್ಯಾತರ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಕುರಿತು ಚರ್ಚೆ ನಡೆಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ನೋಂದಣಿ ಕುರಿತ ಪೆÇೀಸ್ಟರ್ ಬಿಡುಗಡೆ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here