ಕುಡಿಯುವ ನೀರಿನ ಅಭಾವ ಆಗದಂತೆ ನೋಡಿಕೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ

0
13

ಬಳ್ಳಾರಿ,ಫೆ.02: ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು. ಮುಂಜಾಗ್ರತೆಯಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು

ನಗರದ ಜಿಲ್ಲಾ ಪಂಚಾಯಿತಿ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) ಮೂರನೇಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರಿನ ಸಮಸ್ಯೆ ಉಂಟಾದರೆ, ಕೂಡಲೇ ಆಯಾ ಕ್ಷೇತ್ರದ ಶಾಸಕರ ಗಮನಕ್ಕೆ ತರಬೇಕು. ತಾಲ್ಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಭೆ ನಡೆಸಬೇಕು. ಪರಿಹಾರ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಗಮನಕ್ಕೆ ತರಬೇಕು. ಯಾವುದೇ ಕಾರಣಕ್ಕೂ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಜೆಜೆಎಂ ಕಾಮಗಾರಿ ಯೋಜನೆ ಯಶಸ್ವಿಗೊಳಿಸಲು ನೀರಿನ ಮೂಲಗಳನ್ನು ಗುರುತಿಸಬೇಕು, ನಂತರ ಜೆಜೆಎಂ ಕಾಮಗಾರಿ ಕೈಗೊಳ್ಳಬೇಕು ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮೇವಿನ ಕೊರತೆ ಆಗದಂತೆ ನಿಗಾವಹಿಸಿ, ಮೇವು ಸುಟ್ಟಂತಹ ಸಂದರ್ಭದಲ್ಲಿ ರೈತನಿಗೆ ನಿಗದಿತ ಪರಿಹಾರ ನೀಡಬೇಕು ಎಂದರು.

ಜಿಲ್ಲೆಯಲ್ಲಿ ೩೪,೨೩೪ ರೈತರಿಗೆ ೬.೭೪ ಕೋಟಿ ರೂ. ಹಣವನ್ನು ನೇರವಾಗಿ ತಲಾ ೨೦೦೦ ಸಾವಿರ ರೂಪಾಯಿಯಂತೆ ಬರ ಪರಿಹಾರ ಬಿಡುಗಡೆ ಮಾಡಲು ಕ್ರಮ ವಹಿಸಲಾಗಿದೆ. ೭ ಸಾವಿರ ರೈತರಿಗೆ ಪರಿಹಾರಕ್ಕಾಗಿ ಜಿಲ್ಲಾಡಳಿತದಿಂದ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ ಸಭೆಗೆ ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಕಂಪ್ಲಿ ಶಾಸಕ ಜೆ.ಗಣೇಶ್ ಅವರು ಮಾತನಾಡಿ, ಕಂಪ್ಲಿ ಮತ್ತು ಕುರುಗೋಡು ಭಾಗದಲ್ಲಿ ಸಹಾಯಕ ತೋಟಗಾರಿಕೆ ನಿರ್ದೇಶಕ ಅಧಿಕಾರಿಗಳು ಲಭಿಸುತ್ತಿಲ್ಲ. ಕೂಡಲೇ ಈ ಭಾಗದಲ್ಲಿಯೇ ನೂತನ ಕಛೇರಿ ಮಾಡಿ, ಇಲ್ಲಿಯೇ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರಿಗೆ ಸೂಚಿಸಿದರು.

ಕುರುಗೋಡು – ಕಂಪ್ಲಿ ಭಾಗದಲ್ಲಿ ಬಸ್ ಕೊರತೆ ಇದೆ. ವಿದ್ಯಾರ್ಥಿಗಳು, ಸಾರ್ವಜನಿಕರು ನನ್ನ ಗಮನಕ್ಕೆ ತರುತ್ತಿದ್ದಾರೆ. ಆದಷ್ಟು ಶ್ರೀಘ್ರ ಸಮಸ್ಯೆ ಬಗೆಹರಿಸಬೇಕು ಎಂದು ಕೆಕೆಆರ್ ಟಿಸಿ ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚಿಸಿದರು.

ಕಳೆದ ಐದು-ಆರು ವರ್ಷಗಳಿಂದ ನೆನೆಗುದ್ದಿಗೆ ಬಿದ್ದಿರುವ ಕುಡುತಿನಿ-ಕುರುಗೋಡು ಮಾರ್ಗದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ಇದಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಕ್ರಮ ವಹಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

ಎಸ್ ಎಸ್ ಎಲ್ ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷಾ ದೃಷ್ಟಿಯಿಂದ ಹೆಚ್ಚುವರಿ ಬಸ್ ಗಳನ್ನು ಕಾರ್ಯಚರಣೆ ನಡೆಸಬೇಕು. ಯಾವುದೇ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ನರೇಗಾ ದಿನಾಚರಣೆ ಅಂಗವಾಗಿ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಸಭೆಯಲ್ಲಿ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ್, ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಸಹಾಯಕ ಆಯುಕ್ತ ಹೇಮಂತ ಕುಮಾರ್, ಎಎಸ್ಪಿ ಬಿ.ನವೀನ್ ಕುಮಾರ್, ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಸಂದೀಪ್ ಸೂರ್ಯವಂಶಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಇತರರಿದ್ದರು.

LEAVE A REPLY

Please enter your comment!
Please enter your name here