ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಕೆಕೆಆರ್‍ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಸೂಚನೆ

0
15

ಬಳ್ಳಾರಿ,ಫೆ.02: ಜಿಲ್ಲೆಯ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಜಿಲ್ಲೆಗೆ ನೀಡಲಾದ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಸಿ ಸೂಕ್ತ ಪ್ರಗತಿ ಸಾಧಿಸಬೇಕು ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು, ಇಂದು ಜಿಪಂ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಅನುಮೋದನೆಯಾದ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕೆಕೆಆರ್‍ಡಿಬಿ ಯೋಜನೆ ಅಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳ ವೇಗ ಹೆಚ್ಚಿಸಬೇಕು. ಲಭ್ಯವಿರುವ ಅನುದಾನ ಬಳಸಿದಲ್ಲಿ ಮಾತ್ರ ಇನ್ನು ಹೆಚ್ಚಿನ ಅನುದಾನ ಬಿಡುಗಡೆ ಮಾಡಲು ಅನುಕೂಲವಾಗುವುದು. ಕಳಪೆ ಮಟ್ಟದ ಕಾಮಗಾರಿ ಒಳಗೊಂಡಿದ್ದರೆ ಅನುದಾನ ಬಿಡುಗಡೆಯಾಗುವುದಿಲ್ಲ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕ.ಕ.ಭಾಗದ ಅಭಿವೃದ್ಧಿ ಕಾರ್ಯಗಳಿಗಾಗಿ ಸರ್ಕಾರವು ಆಯವ್ಯಯದಲ್ಲಿ 5000 ಕೋಟಿ ರೂ. ಗಳನ್ನು ಘೋಷಿಸಿ 3000 ಕೋಟಿ ರೂ. ಗಳನ್ನು ಹಂಚಿಕೆ ಮಾಡಿದೆ. ಜಿಲ್ಲೆಗೆ ನೀಡಿರುವ ಅನುದಾನ ಕೂಡ ಗುರಿಗೆ ತಕ್ಕಂತೆ ಸೂಕ್ತ ಪ್ರಗತಿ ಸಾಧಿಸಿ ಅನುದಾನ ಸಮರ್ಪಕ ಬಳಕೆ ಆಗುವಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ ಅಕ್ಷರ ಅವಿಷ್ಕಾರ ಯೋಜನೆಯಡಿ ವಿಶೇಷ ಅನುದಾನ ನೀಡಿದೆ. ಜಿಲ್ಲೆಯಲ್ಲಿ ಮುಂಬರುವ ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಗಣನೀಯ ಪ್ರಗತಿ ಸಾಧಿಸಬೇಕು. ಪ್ರಸ್ತಕ ಸಾಲಿನ ವರ್ಷವನ್ನು ಶೈಕ್ಷಣಿಕ ವರ್ಷ ಎಂದು ಘೋಷಿಸಲಾಗಿದೆ. ಇದಕ್ಕಾಗಿ ಮಂಡಳಿಯಿಂದ ಎಲ್ಲ ರೀತಿಯ ಸಹಕಾರ ಒದಗಿಸಲಾಗುವುದು ಎಂದು ಹೇಳಿದರು.

ಯುವ ಸಬಲೀಕರಣ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೆಕೆಆರ್‍ಡಿಬಿ ಅನುದಾನ ಇದ್ದು, ಅಗತ್ಯ ಸಂಪನ್ಮೂಲಗಳನ್ನು ಬಳಸಿಕೊಂಡು ಕಾಮಗಾರಿ ಪೂರ್ಣಗೊಳಿಸಲು ಯಾಕೆ ವಿಳಂಬವಾಗುತ್ತಿದೆ ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದರು.

ಜಿಲ್ಲೆಗೆ ಈ ಮಂಡಳಿಯಿಂದ ಬಿಡುಗಡೆಯಾದ ಅನುದಾನ ಶೇಕಡಾ ನೂರರಷ್ಟು ಬಳಸಬೇಕು. ಸೂಕ್ತ ಪ್ರಗತಿ ಸಾಧಿಸಬೇಕು. ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ 2020-21, 2021-22, 2022-23 ಮತ್ತು 2023-24 ನೇ ಸಾಲಿನವರೆಗೆ ಮಂಜೂರಾದ ಕಾಮಗಾರಿಗಳು 541, ಪೂರ್ಣಗೊಂಡ ಕಾಮಗಾರಿಗಳು 363, ಪ್ರಗತಿಯಲ್ಲಿರುವ ಕಾಮಗಾರಿಗಳು 173, ಪ್ರಾರಂಭವಾಗದೇ ಇರುವ ಕಾಮಗಾರಿಗಳು 5 ಇವೆ. ಇಲ್ಲಿಯವರೆಗೆ ರೂ.44961.31 (ಲಕ್ಷಗಳಲ್ಲಿ) ಮೊತ್ತ ಮಂಜೂರಾಗಿದ್ದು, ಒಟ್ಟು ರೂ.20621 (ಲಕ್ಷಗಳಲ್ಲಿ) ಮೊತ್ತ ವೆಚ್ಚ ಮಾಡಲಾಗಿದೆ ಎಂದು ಸಭೆಗೆ ತಿಳಿಸಿದರು.
ಕೆ.ಕೆ.ಆರ್.ಡಿ.ಬಿ ಕಾರ್ಯದರ್ಶಿ ಸುಂದರೇಶ ಬಾಬು ಅವರು ಮಾತನಾಡಿ, ನಿಂತುಹೋಗಿರುವ ಕಾಮಗಾರಿಗಳನ್ನು ಹೊಸ ಟೆಂಡರ್ ಪ್ರಕ್ರಿಯೆ ನಡೆಸಿ, ಕಾಮಗಾರಿ ಆರಂಭಿಸಬೇಕು. ಮುಂಬರುವ ದಿನಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವುದರಿಂದ, ಶಾರ್ಟ್ ಟೈಮ್ ಟೆಂಡರ್ ಕರೆದು ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಳಿಕ ಇದೇ ಫೆಬ್ರವರಿ 19 ಮತ್ತು 20 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ – 2024 ಮತ್ತು ಯುವ ಸಮೃದ್ಧಿ ಸಮ್ಮೇಳನ ಕುರಿತ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಕಂಪ್ಲಿ ಶಾಸಕರಾದ ಜೆ.ಎನ್.ಗಣೇಶ್, ಸಂಡೂರು ಶಾಸಕ ಈ.ತುಕರಾಂ, ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here