ಸಂವಿಧಾನ ಜಾಗೃತಿ ಜಾಥಾ; 50 ಮೀ. ಉದ್ದದ ರಾಷ್ಟ್ರಧ್ವಜ ಮೆರವಣಿಗೆ ಪ್ರಮುಖ ಆಕರ್ಷಣೆ

0
117

ಬಳ್ಳಾರಿ,ಫೆ.09 : ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾವು ಯಶಸ್ವಿಯಾಗಿ ನಡೆಯುತ್ತಿದ್ದು, ಗುರುವಾರದಂದು ಸಿರುಗುಪ್ಪ ತಾಲ್ಲೂಕಿನ ಕೊಂಚಿಗೇರಿ, ಶಾನವಾಸಪುರ, ಎಚ್.ಹೊಸಳ್ಳಿ ಹಾಗೂ ಕರೂರು ಗ್ರಾಮಗಳ ಗ್ರಾಮ ಪಂಚಾಯಿತಿಗಳ ಮಾರ್ಗದಲ್ಲಿ ಸಂಚರಿಸಿತು.

ಕೊಂಚಿಗೇರಿ ಗ್ರಾಮದಲ್ಲಿ ಎತ್ತಿನ ಬಂಡಿಗಳು, ಮಹಾನ್ ನೇತಾರರ ವೇಷಭೂಷಣ ಧರಿಸಿದ ವಿದ್ಯಾರ್ಥಿಗಳೊಂದಿಗೆ ಜಾಥಾವನ್ನು ಸ್ವಾಗತಿಸಿದ್ದು ವಿಶೇಷವಾಗಿ ಕಂಡುಬಂದಿತು. ಕೊಂಚಿಗೇರಿ ಗ್ರಾಮದ ವೃತ್ತದಲ್ಲಿ 50 ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಗೌರವಪೂರ್ವಕವಾಗಿ ಹಿಡಿದು ಸಂವಿಧಾನದ ಪ್ರಸ್ತಾವನೆಯನ್ನು ವಾಚನ ಮಾಡಿದ್ದು ನೋಡುಗರ ಕಣ್ಮನ ಸೆಳೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದನ ಗೌಡ, ಉಪಾಧ್ಯಕ್ಷರಾದ ಕವಿತಾ ಉಪಸ್ಥಿತರಿದ್ದರು.
ಕರೂರು ಗ್ರಾಮದಲಿಯ್ಲೂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಕರೂರು ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು 50 ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಗೌರವಪೂರ್ವಕವಾಗಿ ಹಿಡಿದು ಸಂವಿಧಾನದ ಪ್ರಸ್ತಾವನೆಯನ್ನು ವಾಚನ ಮಾಡಿದ್ದು ನೋಡುಗರ ಮನಸೂರೆಗೊಂಡಿತು.
ಎಚ್.ಹೊಸಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಶ್ರೀಶೈಲಪ್ಪ ಅವರು ಮಾತನಾಡಿ, ಸಂವಿಧಾನದಿಂದಾಗಿ ನಮ್ಮ ಜೀವನವು ಸುಗಮವಾಗಿ, ಸುಸೂತ್ರವಾಗಿ ನಡೆಯುತ್ತಿದೆ. ಹಿಂದುಳಿದವರ, ದಲಿತರ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಹೇಳಿದರು.

ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ರಾಜ್ಯ ಸರ್ಕಾರಕ್ಕೆ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಳ್ಳಾರಿ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ರವರಿಗೆ ಹಾಗೂ ಸಿರುಗುಪ್ಪ ಶಾಸಕ ಬಿ.ಎಂ.ನಾಗರಾಜ ಅವರಿಗೆ ಅಭಿನಂದನೆ ತಿಳಿಸಿದರು.
ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಿ, ಸಂವಿಧಾನ ರಚನಾ ಸಭೆ ಹಾಗೂ ಸಂವಿಧಾನದ ಕುರಿತ ವೀಡಿಯೋ ತುಣುಕುಗಳನ್ನು ಸಾರ್ವಜನಿಕರಿಗೆ ಪ್ರದರ್ಶಿಸಲಾಯಿತು.

ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಗಿದೆ. ಜಾಥಾವನ್ನು ಪ್ರತೀ ಗ್ರಾಮ ಪಂಚಾಯಿತಿಗಳಲ್ಲಿಯೂ ಕಳಶ ಮತ್ತು ಪೂರ್ಣ ಕುಂಭ ಹೊತ್ತ ಮಹಿಳೆಯರು, ಡೊಳ್ಳು ಕಲಾವಿದರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಗ್ರಾಮದ ಜನಪ್ರತಿನಿಧಿಗಳು, ಊರಿನ ಮುಖಂಡರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು.

ಜಾಥಾ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿಗಳ ಜನಪ್ರತಿನಿಧಿಗಳು, ಕಳಶ ಹಾಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here