ಚುನಾವಣಾ ಕರ್ತವ್ಯ ಅಚ್ಚುಕಟ್ಟಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

0
20

ಬಳ್ಳಾರಿ,ಫೆ.22:ಬರುವ ಲೋಕಸಭಾ ಚುನಾವಣೆಯನ್ನು ಮುಕ್ತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಲೋಕಸಭಾ ಚುನಾವಣೆ ಸಂಬಂಧ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ವಿವಿಧ ನೋಡಲ್ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಲೋಕಸಭೆ ಮತ ಕ್ಷೇತ್ರವಾದ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿದ್ದು, ಅದರಲ್ಲಿ ಬಳ್ಳಾರಿ ಜಿಲ್ಲೆಯ 4 ಕ್ಷೇತ್ರ, ವಿಜಯನಗರ ಜಿಲ್ಲೆಯ 4 ಕ್ಷೇತ್ರ ಒಳಗೊಂಡಿದೆ. ಸಿರುಗುಪ್ಪ ಕ್ಷೇತ್ರ ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸೇರಿದೆ. ಚುನಾವಣೆಯನ್ನು ಯಶಸ್ವಿಯಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಅಗತ್ಯ ಸಿದ್ಧತೆ ಈಗಿನಿಂದಲೇ ಮಾಡಿಕೊಳ್ಳಬೇಕು. ಚುನಾವಣಾ ಕಾರ್ಯವನ್ನು ತಂಡವಾಗಿ ಕಾರ್ಯ ನಿರ್ವಹಿಸಿ ಯಶಸ್ವಿಗೊಳಿಸಲು ಎಲ್ಲರ ಸಹಕಾರ ಬೇಕು ಎಂದರು.
ಈಗಾಗಲೇ ಚುನಾವಣಾ ಕಾರ್ಯಕ್ಕೆ ನೇಮಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಕಾಲಕಾಲಕ್ಕೆ ತರಬೇತಿ ನೀಡಿ ಸಜ್ಜುಗೊಳಿಸಬೇಕು ಎಂದು ಹೇಳಿದರು.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳಂತೆ ಚುನಾವಣೆ ನಡೆಸಲು ಜಿಲ್ಲಾಡಳಿತವು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಪ್ರತಿ ನೋಡಲ್ ಅಧಿಕಾರಿ ತನ್ನ ವಿಭಾಗದ ಕಾರ್ಯ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ ನೀಡಿ, ತನ್ನ ತಂಡವನ್ನು ಸುಸಜ್ಜಿತಗೊಳಿಸುವುದು ಅವರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಎಫ್‍ಎಸ್‍ಟಿ, ಎಸ್‍ಎಸ್‍ಟಿ ಹಾಗೂ ಇತರ ತಂಡಗಳ ಮಧ್ಯ ಪರಸ್ಪರ ಸಮನ್ವಯ, ಸಂವಹನ ಇರಬೇಕು. ಚುನಾವಣಾ ಕಾರ್ಯಗಳಲ್ಲಿ ಎಚ್ಚರಿಕೆ ವಹಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ನೋಡಿಕೊಳ್ಳಬೇಕು. ಪ್ರತಿಯೊಬ್ಬ ಅಧಿಕಾರಿಗಳು ತನಗೆ ನಿಯೋಜಿಸಿದ ಚುನಾವಣಾ ಕಾರ್ಯಗಳ ಬಗ್ಗೆ ಜವಾಬ್ದಾರಿ ಮತ್ತು ಕರ್ತವ್ಯಗಳನ್ನು ಅರ್ಥೈಸಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಎಂದರು.

ಸ್ಟ್ರಾಂಗ್ ರೂಂಗಳ ಪರಿಶೀಲನೆ ಕೈಗೊಳ್ಳಬೇಕು. ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕುರಿತು ತರಬೇತಿ ನೀಡಬೇಕು. ಮತ ಯಂತ್ರಗಳ ರ್ಯಾಂಡಮೈಜೇಷನ್ ಕೈಗೊಳ್ಳಲಾಗುವುದು. ಚುನಾವಣಾ ಮಾದರಿ ನೀತಿ ಜಾರಿಯಾದ ಕೂಡಲೇ ಎಲ್ಲ ತಂಡಗಳು ಕಾರ್ಯ ನಿರತವಾಗಲಿವೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು ಅವರು ಮಾತನಾಡಿ, ಚುನಾವಣೆ ಸುಗಮವಾಗಿ ನಡೆಸಲು ನಿಯೋಜಿಸಿದ ಪೊಲೀಸ್ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ. ಅಲ್ಲದೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯ ಗಡಿಭಾಗಗಳಲ್ಲಿ ಚೆಕ್‍ಪೋಸ್ಟ್ ಹಾಕಲು ಕ್ರಮ ವಹಿಸಲಾಗುವುದು. ಯಾವುದೇ ಅಹಿತಕರ ಘಟನೆಗಳು ಕಂಡುಬಂದಲ್ಲಿ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿಯವರಿಗೆ ತಿಳಿಸಿದರು.

ಆದಾಯ ತೆರಿಗೆ ಇಲಾಖೆ ಅಧಿಕಾರಿ ನಿಶಾಂತ್ ಅವರು ಮಾತನಾಡಿ, ಚುನಾವಣೆ ಸಂದರ್ಭದಲ್ಲಿ ಎಂಸಿಸಿ ಅಥವಾ ಇತರೆ ತಂಡವು ಕೈಗೊಳ್ಳುವ ಕಾರ್ಯಾಚರಣೆಯಲ್ಲಿ ಹೆಚ್ಚಿನ ಮೊತ್ತದ ಹಣ ಸೀಜ್ ಮಾಡಿದ ಕೂಡಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಯಾವುದೇ ಸಮಯದಲ್ಲಿ ಯಾವುದೇ ಸ್ಥಳದಲ್ಲಿ ದಾಳಿ ನಡೆಸಿ, ತನಿಖೆ ತಡೆಸುವ ಅಧಿಕಾರಿ ಹೊಂದಿದೆ. ಹೀಗಾಗಿ ಚುನಾವಣೆ ಸಂದರ್ಭದಲ್ಲಿ ಅಧಿಕಾರಿಗಳು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್.ಎನ್ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ನೋಡೆಲ್ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here