ಪೋಲಿಯೋ ಲಸಿಕಾ ಅಭಿಯಾನದಲ್ಲಿ ಮಕ್ಕಳು ಹೊರಗುಳಿಯದಿರಲಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

0
21

ಬಳ್ಳಾರಿ,ಫೆ.23:ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಮಾ.03 ರಂದು ಆಯೋಜಿಸಲಾಗಿದ್ದು, ಯಾವುದೇ ಅರ್ಹ ಮಕ್ಕಳು ಲಸಿಕೆಯಿಂದ ವಂಚಿತರಾಗಬಾರದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಲ್ಲಿ ವಿವಿಧ ಇಲಾಖೆಗಳ ಪಾತ್ರ ಮುಖ್ಯವಾಗಿದ್ದು, ಎಲ್ಲ ಇಲಾಖೆಗಳ ಸಹಕಾರ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ತಮ್ಮ ಕರ್ತವ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಹಾಗೂ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ಸಿಗೆ ಕ್ರಮವಹಿಸಬೇಕು ಎಂದು ತಿಳಿಸಿದರು.

ಕಳೆದ 2022ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿದ್ದು, ಈ ಬಾರಿಯೂ ಶೇ.100 ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಅಗತ್ಯವಿದ್ದಷ್ಟು ವಾಹನಗಳನ್ನು ಒದಗಿಸಬೇಕು ಎಂದು ಸಾರಿಗೆ ಅಧಿಕಾರಿಗಳಿಗೆ ಹೇಳಿದರು.
ಪಲ್ಸ್ ಪೋಲಿಯೋ ಲಸಿಕೆಯನ್ನು ಸುರಕ್ಷಿತವಾಗಿಡಲು ಹಾಗೂ ಶೀತಲ ಪ್ಯಾಕ್‍ಗಳನ್ನು ತಯಾರಿಸಲು ನಿರಂತರ ವಿದ್ಯುಚ್ಛಕ್ತಿಯು ಅವಶ್ಯಕತೆಯಿದ್ದು, ಮಾ.01 ರಿಂದ 06 ರ ವರೆಗೆ ನಗರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ ವಿದ್ಯುಚ್ಛಕ್ತಿಯನ್ನು ನಿರಂತರವಾಗಿ ಸರಬರಾಜು ಮಾಡಲು ಕ್ರಮವಹಿಸಬೇಕು ಎಂದು ಕೆಪಿಟಿಸಿಎಲ್ ಅಧಿಕಾರಿಗಳಿಗೆ ತಿಳಿಸಿದರು.

ಪಲ್ಸ್ ಪೋಲಿಯೋ ಕಾರ್ಯಕ್ರಮದ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸಲು ಜಾಥಾ ಏರ್ಪಡಿಸಿ ಜಾಗೃತಿ ಮೂಡಿಸಬೇಕು. ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ ಲಸಿಕೆ ಹಾಕಲು ಪೋಷಕರಿಗೆ ಪ್ರೇರೇಪಿಸಬೇಕು. ಈ ಕುರಿತು ಡಿಡಿಪಿಐ ಮತ್ತು ಬಿಇಒಗಳು ಮುತುವರ್ಜಿ ವಹಿಸಬೇಕು ಎಂದರು.
ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆ ವ್ಯಾಪ್ತಿಯಲ್ಲಿ ಲಸಿಕೆ ನೀಡುವ ಸ್ಥಳ ಹಾಗೂ ದಿನಾಂಕವನ್ನು ಕರಪತ್ರದಲ್ಲಿ ಮುದ್ರಿಸಿ ಪ್ರಚಾರ ಕೈಗೊಳ್ಳಬೇಕು. ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಭಾಗವಹಿಸಬೇಕು. ಸ್ತ್ರೀ-ಶಕ್ತಿ ಗುಂಪುಗಳ ಪದಾಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಸೂಚಿಸಬೇಕು ಎಂದು ನಿರ್ದೇಶನ ನೀಡಿದರು.
ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳು, ಕಬ್ಬು ಖಟಾಯಿಸುವ ಕಾರ್ಮಿಕರ ಮಕ್ಕಳು, ಗಣಿಗಾರಿಕೆ ಕಾರ್ಮಿಕರ ಮಕ್ಕಳು, ಜಲ್ಲಿ ಒಡೆಯುವ ಕಾರ್ಮಿಕರ ಮಕ್ಕಳು ಹಾಗೂ ಇತರೆ ವಲಸೆ ಪ್ರದೇಶಗಳಲ್ಲಿ ಹುಟ್ಟಿನಿಂದ 05 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸುವಂತೆ ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಮಾತನಾಡಿ, ಜಿಲ್ಲೆಯಲ್ಲಿ ಹುಟ್ಟಿನಿಂದ 05 ವರ್ಷದೊಳಗಿನ 1,97,103 ಮಕ್ಕಳಿದ್ದು, ಅದರಲ್ಲಿ 72,631 ನಗರ, 1,24,472 ಗ್ರಾಮೀಣ ವ್ಯಾಪ್ತಿಯ ಮಕ್ಕಳನ್ನು ಲಸಿಕೆಗೆ ಗುರುತಿಸಲಾಗಿದೆ. ಒಟ್ಟು 968 ಲಸಿಕೆ ಬೂತ್‍ಗಳನ್ನು ಹಾಕಲಾಗುವುದು ಹಾಗೂ 985 ಟೀಮ್‍ಗಳನ್ನು ನೇಮಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅನೀಲ್ ಕುಮಾರ್ ಅವರು ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂಗವಾಗಿ ಮೊದಲನೇ ಹಂತ ಫೆ.24 ರಂದು (ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ), ಎರಡನೇ ಹಂತ ಫೆ.27 ರಂದು (6-19 ಮಕ್ಕಳಿಗೆ ಶಾಲೆ ಮತ್ತು ಕಾಲೇಜು ಮಕ್ಕಳಿಗೆ) ಮತ್ತು ಮೂರನೇಯ ಹಂತ ಮಾ.08 ರಂದು(1 ರಿಂದ 5 ವರ್ಷದ ಮಕ್ಕಳು ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಅಂಗನವಾಡಿ ಕೇಂದ್ರಗಳಲ್ಲಿ) ಜಂತು ಹುಳು ನಿವಾರಣಾ ಮಾತ್ರೆ (ಆಲ್ಬಂಡೋಜೋಲ್) ಮಾತ್ರೆಗಳನ್ನು ವಿತರಿಸಲಾಗುವುದು ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಮಾರ್ಚ್ 03 ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನದ ಕುರಿತ ಭಿತ್ತಿಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸವರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುಜಾತ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತೀತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here