ಬಳ್ಳಾರಿ,ಸೆ.12: ವ್ಯಕ್ತಿಯು ಜೀವನದಲ್ಲಿ ಬರುವ ಮಾನಸಿಕ, ಆರ್ಥಿಕ, ಪ್ರೀತಿಯ ಆಲೋಚನೆಗಳಿಂದ ಒತ್ತಡ ಹಾಗೂ ಉದ್ವೇಗಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಬಾರದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆತ್ಮಹತ್ಯೆಯನ್ನು ತಡೆಗಟ್ಟಲು 2003 ರಿಂದ ವಿಶ್ವ ಆತ್ಮಹತ್ಯೆ ದಿನವನ್ನು ಆಚರಿಸಲು ಪ್ರಾರಂಭಿಸಲಾಯಿತು. ಭಾರತದಲ್ಲಿ ವರ್ಷಕ್ಕೆ 1ಲಕ್ಷ 73 ಸಾವಿರ ಜನರು ಸಾವಿಗೀಡಾಗುತ್ತಿದ್ದು, ಪ್ರತಿ 11 ಸೆಕೆಂಡ್‌ಗಳಿಗೆ ಒಂದು ಸಾವು ಸಂಭವಿಸುತ್ತಿದೆ. ಇದಕ್ಕೆ ವ್ಯಕ್ತಿಯಲ್ಲಿ ಬರುವ ತೀವ್ರ ತರವಾದ ಆಲೋಚನೆಗಳು ಪ್ರಮುಖ ಕಾರಣವಾಗಿದೆ. ಅಂತವರನ್ನು ಗುರ್ತಿಸಿ ಆಪ್ತ ಸಮಾಲೋಚನೆ ಮೂಲಕ ಚಿಕಿತ್ಸೆ ನೀಡಿದರೆ ಗುಣಮುಖರಾಗುತ್ತಾರೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮನೆಯಲ್ಲಿ ಕುಟುಂಬ ಸದಸ್ಯರ ಜೊತೆಗೂಡಿ ಸಮಸ್ಯೆಗಳ ಕುರಿತು ಮಾತನಾಡಿ ಪರಿಹರಿಸಿಕೊಳ್ಳಬೇಕು. ಶಾಲಾ-ಕಾಲೇಜುಗಳಲ್ಲಿ ಆತ್ಮಹತ್ಯೆ ಬಗ್ಗೆ ಶಿಕ್ಷಕರು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಮಾತನಾಡಿ, ವಯಸ್ಕರರಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಕಂಡುಬರುತ್ತಿವೆ. ಕಷ್ಟಗಳು ಬಂದರೆ ಅವುಗಳನ್ನು ಕುಟುಂಬ ಸದಸ್ಯರಿಗೆ ತಿಳಿಸಬೇಕು. ಪ್ರಸ್ತುತ ಮೊಬೈಲ್ ಯುಗದಲ್ಲಿ ಯಾರು ತಮ್ಮ ಸಮಸ್ಯೆಗಳನ್ನು ಹಂಚಿಕೊಳ್ಳುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು, ತಪ್ಪು ಮಾಡುವುದು ಸಹಜ, ತಿದ್ದಿಕೊಂಡು ಒಂದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್ ಅವರು ಮಾತನಾಡಿ, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮನೋ ಚೈತನ್ಯ ಕಾರ್ಯಕ್ರಮ ಹಮ್ಮಿಕೊಂಡು ಮಾನಸಿಕ ರೋಗಿಗಳಿಗೆ, ಸಣ್ಣ ಪುಟ್ಟ ಮಾನಸಿಕ ತೊಂದರೆ ಇರುವ ಮನೋ ರೋಗಿಗಳಿಗೆ ಅಪ್ತ ಸಮಾಲೋಚನೆ ಹಾಗೂ ಉಚಿತ ಚಿಕಿತ್ಸೆಯನ್ನು ನೀಡಲಾಗುತ್ತದೆ. ಪ್ರತಿಯೊಬ್ಬರು ಇದರ ಸದುಪಯೊಗ ಪಡೆದುಕೊಳ್ಳಬೇಕು ಎಂದರು.
ಮಾನಸಿಕ ಸಮಸ್ಯೆಗಳಿಗೆ ಒಳಗಾದವರು ಅದರಲ್ಲಿ ಮುಖ್ಯವಾಗಿ ವ್ಯಥೆಗೆ ಒಳಪಟ್ಟವರು, ಮಾನಸಿಕ ಒತ್ತಡ, ಕೌಟುಂಬಿಕ ಸಮಸ್ಯೆ, ಆತ್ಮಹತ್ಯೆ ಅಲೋಚನೆ, ಉದ್ವೇಗ, ನಿರುದ್ಯೋಗ, ಪ್ರೀತಿ, ಮಾಧಕ ವ್ಯಸನಕ್ಕೆ ಒಳಗಾದವರು, ಜ್ಞಾಪಕ ಶಕ್ತಿ ತೊಂದರೆಯುಳ್ಳವರು, ಆರ್ಥಿಕ ಸಮಸ್ಯೆಗಳಿಂದ ಒತ್ತಡಕ್ಕೊಳಗಾದವರು ಮಾನಸಿಕ ಖಿನ್ನತೆಗೆ ಒಳಗೊಳ್ಳಬಾರದು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಮನೋರೋಗತಜ್ಞ ಡಾ.ನಂದ ಕಿಶೋರ್‌ರೆಡ್ಡಿ ಅವರು ಮಾತನಾಡಿ, ವ್ಯಕ್ತಿಯಲ್ಲಿ ಬರುವ ತೀವ್ರ ತರವಾದ ಕೋಪ, ಉದ್ವೇಗಗಳಿಂದ, ಒತ್ತಡ, ಆಲೋಚನೆಗಳಿಂದ ಅದರಲ್ಲೂ ಸಾಮಾನ್ಯವಾಗಿ 15-30 ವಯಸ್ಸಿನ ವ್ಯಕ್ತಿಗಳಲ್ಲಿ ಆತ್ಮಹತ್ಯೆ ಹೆಚ್ಚು ಕಂಡುಬರುತ್ತಿದ್ದು, ಜೀವನ ಶೈಲಿಯಲ್ಲಿ ಬದಲಾವಣೆ ಆಗಬೇಕು. ಮಾನಸಿಕ ಆರೋಗ್ಯ ಸಮಸ್ಯೆಗಳಿಗೆ (ಟೆಲಿ ಮಾನಸ್) ಎಂಬ ಉಚಿತ ಸಹಾಯವಾಣಿ 14416 ಸಂಖ್ಯೆಗೆ ಗೆ ಕರೆ ಮಾಡಿ ಸೂಕ್ತ ಮಾರ್ಗದರ್ಶನ ಹಾಗೂ ಆಪ್ತ ಸಮಾಲೋಚನೆಯನ್ನು ಪಡೆದು ಮಾನಸಿಕ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಷಿದ್ ಬೇಗಂ, ಜಿಲ್ಲಾ ಆಸ್ಪತ್ರೆ ಸಿಬ್ಬಂದಿ, ಜಿಲ್ಲಾ ಪೊಲೀಸ್ ಸಿಬ್ಬಂದಿ ಸೇರಿದಂತೆ ಆಶಾ ಕಾರ್ಯಕರ್ತರು, ಇತರರು ಭಾಗವಹಿಸಿದ್ದರು.
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾವು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಿಂದ ಆರಂಭವಾಗಿ ನೂತನ ಜಿಲ್ಲಾಡಳಿತ ಆವರಣಕ್ಕೆ ತಲುಪಿ ಪುನಃ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣಕ್ಕೆ ತಲುಪಿ ಮುಕ್ತಾಯಗೊಂಡಿತು.
