ಬಳ್ಳಾರಿ,ಅ.02:ಮಹತ್ಮಾ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ನಮ್ಮ ದೇಶವು ಸದಾ ಗೌರವಿಸುವ ಎರಡು ಮೇರು ವ್ಯಕ್ತಿತ್ವಗಳು, ಇವರ ಸ್ಮರಣೆ ಇಂದಿನ ಕಾಲಘಟ್ಟದಲ್ಲಿ ಅಗತ್ಯವಿದೆ. ಅವರ ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳೋಣ ಎಂದು ವಿಶ್ರೀಕೃ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ ಮುನಿರಾಜು ಅವರು ಹೇಳಿದರು.
ರಾಷ್ಟಿçಯ ಸೇವಾ ಯೋಜನೆಯ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಗುರುವಾರ ಆಚರಿಸಿದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯದ ಕುಲಸಚಿವ ನಾಗರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಜೀವನವೇ ಒಂದು ಸಂದೇಶ ಆ ಸಂದೇಶವು ನಮಗೆಲ್ಲರಿಗೂ ಮಾದರಿಯಾಗಿದೆ. ಶಾಸ್ತ್ರಿಜಿಯವರ ಸರಳತೆಯನ್ನು ಅವರ ಜೀವನದ ಕೆಲವು ಘಟನೆಗಳನ್ನು ವಿವರಿಸುವ ಮೂಲಕ ಸ್ಮರಿಸಿದರು. ಆ ಮೂಲಕ ಸರಳತೆಯ ಮಹತ್ವವನ್ನು ಪ್ರತಿಯೊಬ್ಬರೂ ಪಾಲಿಸಬೇಕು ಮತ್ತು ಅದರ ಮೌಲ್ಯವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶ್ವವಿದ್ಯಾಲಯದ ಆಂಗ್ಲ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಬರ್ಟ್ ಜೋಸ್ ಅವರು ಮಾತನಾಡಿ, ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಜೀವನ ಮತ್ತು ಅವರು ಅನುಸರಿಸಿದ ಮಾರ್ಗಗಳನ್ನು ತಿಳಿದು ಅದನ್ನು ಪಾಲಿಸುವುದು ಇಂದಿನ ಯುವ ಪೀಳಿಗೆಯ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದ ನಂತರ ಸಸಿ ನೆಡುವ ಕಾರ್ಯಕ್ರಮವನ್ನು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಬೋಧಕರು ಮತ್ತು ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.
