ವರದಿ : ಜಿ ಎಂ ಬಸಯ್ಯ
ಕುರುಗೋಡು ತಾಲೂಕಿನ ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಬೇಸಿಗೆ ಕಾಲದಲ್ಲಿ ಕುಡಿವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್ ತಿಳಿಸಿದ್ದಾರೆ.
ತಾಲೂಕಿನ ಓರ್ವಯಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರುತಿ ಕ್ಯಾಂಪಿನಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೇಸಿಗೆ ಸಮಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿವ ನೀರಿನ ಕೊರತೆ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಗ್ರಾಮದಲ್ಲಿಯೂ ಕುಡಿವ ನೀರಿನ ಅಭಾವ ಉಂಟಾಗದಂತೆ ಮುಂಚಿತವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಿಸಿ, ಬಾವಿ, ಕುಡಿಯುವ ನೀರಿನ ಟ್ಯಾಂಕ್ಗಳು ಹಾಗೂ ಪೈಪ್ಲೈನ್ಗಳ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ 2025-26ನೇ ಸಾಲಿನ 5054 ಯೋಜನೆಯಡಿ ಸುಮಾರು ₹5 ಕೋಟಿ ವೆಚ್ಚದಲ್ಲಿ ಯಲ್ಲಾಪುರ ಗ್ರಾಮದಿಂದ ಮಾರುತಿ ಕ್ಯಾಂಪ್ ಹಾಗೂ ಶ್ರೀರಂಗಪುರ ಕ್ಯಾಂಪ್ನಿಂದ ಜಿಲ್ಲಾ ಮುಖ್ಯ ರಸ್ತೆಯವರೆಗೆ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಯೋಜನೆ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದೆ ಎಂದು ಅವರು ಹೇಳಿದರು.
ರಸ್ತೆ ಕಾಮಗಾರಿಗಳ ಕುರಿತು ಮಾತನಾಡಿದ ಅವರು, ಕೇವಲ ರಸ್ತೆ ನಿರ್ಮಾಣಕ್ಕಿಂತಲೂ ಚರಂಡಿ ವ್ಯವಸ್ಥೆ ಸಮರ್ಪಕವಾಗಿರುವುದು ಅತ್ಯಗತ್ಯ. ಮಳೆಗಾಲದಲ್ಲಿ ನೀರು ನಿಲ್ಲದೇ ಸರಾಗವಾಗಿ ಹರಿದು ಹೋಗಲು ಚರಂಡಿ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಬೇಕು. ಇದರಿಂದ ರಸ್ತೆ ದೀರ್ಘಕಾಲ ಬಾಳಿಕೆ ಬರುತ್ತದೆ ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.
ಇದೇ ವೇಳೆ, ಗುತ್ತಿಗನೂರು ಗ್ರಾಮದಿಂದ ಬಾಳಾಪುರ ಹಾಗೂ ಪಟ್ಟಣ ಸೆರುಗು ಗ್ರಾಮದ ಮುಖ್ಯ ರಸ್ತೆ ನಿರ್ಮಾಣಕ್ಕೆ 2025-26ನೇ ಸಾಲಿನ ಕೆಕೆಆರ್ಡಿಬಿ ಯೋಜನೆಯಡಿ ₹3 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಜೊತೆಗೆ ಭೂಮಿ ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಗುತ್ತಿಗೆದಾರರು ನಿರ್ಲಕ್ಷ್ಯ ಮಾಡದೇ, ಉತ್ತಮ ಗುಣಮಟ್ಟದಲ್ಲಿ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಓರ್ವಯಿ, ಗುತ್ತಿಗನೂರು ಹಾಗೂ ಮಾರುತಿ ಕ್ಯಾಂಪ್ ಗ್ರಾಮ ಪಂಚಾಯಿತಿಗಳ ಮುಖಂಡರು, ಸದಸ್ಯರು, ಸ್ಥಳೀಯ ಗಣ್ಯರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದು, ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.
