ವರದಿ: ಜಿ ಎಂ ಬಸಯ್ಯ
ಕುರುಗೋಡು:ತಾಲೂಕಿನ ಮದಿರೆ ಗ್ರಾಮದಲ್ಲಿ ಎಐಡಿಎಸ್ಓ (ಆಲ್ ಇಂಡಿಯಾ ಡೆಮೊಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ನೇತೃತ್ವದಲ್ಲಿ ಕೋಳೂರಿನಲ್ಲಿ ಆರಂಭವಾಗುತ್ತಿರುವ ಕೆಪಿಎಸ್ ಶಾಲೆಗೆ ಮಕ್ಕಳನ್ನು ಸೇರಿಸಲು ವಿರೋಧ ವ್ಯಕ್ತಪಡಿಸಿ ಶಾಲೆ ಎದುರು ಬ್ಯಾನರ್ ಕಟ್ಟಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯ ಬಳಿಕ ಮಕ್ಕಳಲ್ಲಿ ಉನ್ನತ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಉಚಿತ ಮಕ್ಕಳ ಬೇಸಿಗೆ ಶಿಬಿರವನ್ನು ಕೂಡ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷೆ ಎಂ. ಶಾಂತಿ ಅವರು, “ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆಗೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದರೂ ಸರ್ಕಾರ ತನ್ನ ಹಠಮಾರಿ ಧೋರಣೆಯನ್ನು ಮುಂದುವರೆಸಿ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಮುಂದಾಗಿದೆ. ಇದರ ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಇದು ಅತ್ಯಂತ ಖಂಡನೀಯ,” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅವರು ಮುಂದುವರೆದು, “ಮಹಾತ್ಮಾ ಜ್ಯೋತಿಬಾ ಫುಲೆ ಅವರ ಜನ್ಮ ದ್ವಿಶತಮಾನೋತ್ಸವದ ಸಂದರ್ಭದಲ್ಲಿ ಅವರ ಜೀವನ ಹೋರಾಟದಿಂದ ಸ್ಫೂರ್ತಿ ಪಡೆದು ನಮ್ಮೂರಿನ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಎಲ್ಲರೂ ಪಣ ತೊಡಬೇಕು,” ಎಂದು ಕರೆ ನೀಡಿದರು.
ನಂತರ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಗುರಳ್ಳಿ ರಾಜ್ ಮಾತನಾಡಿ, “ಫುಲೆ ದಂಪತಿಗಳು ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಶೋಷಿತ ಸಮುದಾಯಗಳ ಹಕ್ಕಿಗಾಗಿ ನಡೆಸಿದ ಹೋರಾಟ ಇಂದಿನ ಮಕ್ಕಳಿಗೆ ಪ್ರೇರಣೆಯಾಗಬೇಕು. ಸಮಾಜದ ಒಳಿತಿಗಾಗಿ ತಮ್ಮ ಬದುಕನ್ನೇ ಸಮರ್ಪಿಸಿದ ಅವರ ಆದರ್ಶಗಳು ಇಂದಿನ ಪೀಳಿಗೆಗೆ ದಾರಿದೀಪವಾಗಿವೆ,” ಎಂದು ಹೇಳಿದರು.
ಮಕ್ಕಳು ನಿಸ್ವಾರ್ಥ ಸೇವಾ ಮನೋಭಾವ, ಸಾಮಾಜಿಕ ಬದ್ಧತೆ ಹಾಗೂ ಉನ್ನತ ಸಂಸ್ಕೃತಿಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಈ ವೇಳೆ ಎಐಡಿಎಸ್ಓ ಜಿಲ್ಲಾ ಉಪಾಧ್ಯಕ್ಷೆ ಶಾಂತಿ, ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಸದಸ್ಯರಾದ ಸುರೇಶ್, ರಾಜಶೇಖರ್, ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
