ಕುರುಗೋಡು: ಪಟ್ಟಣದ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ಜರುಗಿದೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ, ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆದು ಅವಿರೋಧ ಆಯ್ಕೆ ಘೋಷಿಸಲಾಯಿತು.
ಪುರಸಭೆಯ ಅಧ್ಯಕ್ಷರಾಗಿ ಜಿ. ಮಂಜುನಾಥ್ (ಎಸ್ಇ) ಹಾಗೂ ಉಪಾಧ್ಯಕ್ಷೆಯಾಗಿ ನಾಗವೇಣಿ ಅಂಜಿನಪ್ಪ (ಸಾಮಾನ್ಯ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿರುವ ಕುರುಗೋಡು ತಹಶೀಲ್ದಾರ್ ನರಸಪ್ಪ ಪ್ರಕಟಿಸಿದರು.
ಈ ಸಂದರ್ಭದಲ್ಲಿ ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ದತ್ತಾತ್ರೇಯ ಹೆಗಡೆ, ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್, ಪುರಸಭೆಯ ಸರ್ವ ಸದಸ್ಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ನಂತರ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯ ಆಯ್ಕೆಯ ಸಂಭ್ರಮವಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಟಾಕಿ ಸಿಡಿಸಿ ವಿಜೃಂಭಣೆಯ ಮೆರವಣಿಗೆ ನಡೆಸಲಾಯಿತು.
