ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು: ಪಟ್ಟಣದ ದ.ರಾ. ಬೇಂದ್ರೆ ಶಾಲೆ ಸಮೀಪದ ಮುಖ್ಯ ಚರಂಡಿ ಸಂಪೂರ್ಣವಾಗಿ ಕಸ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಕಡ್ಡಿಗಳಿಂದ ತುಂಬಿಹೋಗಿದ್ದು, ತೀವ್ರ ದುರ್ನಾತ ಬೀರುತ್ತಿದೆ. ಇದರಿಂದ ಶಾಲಾ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ನಿವಾಸಿಗಳು ಸಂಕಷ್ಟ ಅನುಭವಿಸುವಂತಾಗಿದೆ.
ಚರಂಡಿಯಲ್ಲಿ ಪ್ಲಾಸ್ಟಿಕ್ ಕವರ್‌ಗಳು, ಬಾಟಲಿಗಳು ಸೇರಿದಂತೆ ವಿವಿಧ ತ್ಯಾಜ್ಯ ವಸ್ತುಗಳು ಸಂಗ್ರಹಗೊಂಡಿರುವುದರಿಂದ ನೀರು ಸರಾಗವಾಗಿ ಹರಿಯದೇ ತಡೆ ಉಂಟಾಗಿದೆ. ಪರಿಣಾಮವಾಗಿ ಚರಂಡಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗುತ್ತಿದ್ದು, ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.
ಪ್ರತಿದಿನ ಶಾಲೆಗೆ ತೆರಳುವ ಸಣ್ಣ ಮಕ್ಕಳು ಇದೇ ದುರ್ನಾತದ ವಾತಾವರಣದಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಇದರಿಂದ ಪೋಷಕರು ಹಾಗೂ ಸಾರ್ವಜನಿಕರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಚರಂಡಿಯನ್ನು ಸ್ವಚ್ಛಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
