ಹೊಸಪೇಟೆ, ಜುಲೈ 7:
ಪ್ರವಾಸೋದ್ಯಮ ಇಲಾಖೆಯ ರಾಜ್ಯ ಮಟ್ಟದ ಸಮಾಲೋಚನಾ ಕಾರ್ಯಗಾರಕ್ಕೆ ಆಗಮಿಸುತ್ತಿರುವ ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಸ್ವಾಗತ ಕೋರಿ ಹಾಕಲಾಗಿರುವ ಬ್ಯಾನರ್‌ನಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಅವರ ಭಾವಚಿತ್ರವನ್ನು ಪ್ರಕಟಿಸದಿರುವುದಕ್ಕೆ ವಿಜಯನಗರ ಜಿಲ್ಲಾ ಮಾದಿಗ ಮಹಾಸಭಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಈ ಕುರಿತು ಪ್ರಕಟಣೆ ನೀಡಿರುವ ವಿಜಯನಗರ ಜಿಲ್ಲಾ ಮಾದಿಗ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ಕಾಂಗ್ರೆಸ್ ಮುಖಂಡ ಭರತ್ ಕುಮಾರ್ ಸಿಆರ್, ವಿಜಯನಗರ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವ ಕೆ.ಹೆಚ್. ಮುನಿಯಪ್ಪ ಅವರ ಫೋಟೋವನ್ನು ಬ್ಯಾನರ್‌ನಲ್ಲಿ ಕೈಬಿಟ್ಟಿರುವುದು ಅವರ ಅಭಿಮಾನಿಗಳ ಭಾವನೆಗಳಿಗೆ ಧಕ್ಕೆಯನ್ನು ಉಂಟುಮಾಡಿದ್ದು, ಇದು ಬೇಸರದ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಇಂತಹ ತಾರತಮ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟವರು ಎಚ್ಚರಿಕೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದೇ ರೀತಿಯ ಘಟನೆ ಮತ್ತೊಮ್ಮೆ ನಡೆದರೆ ಸಮಾಜದಲ್ಲಿ ಅನಗತ್ಯ ಗೊಂದಲ ಮತ್ತು ಅಸಮಾಧಾನಕ್ಕೆ ಕಾರಣವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿರುವ ಅವರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಆರ್. ಗವಿಯಪ್ಪ ಅವರಿಗೆ ಮನವಿ ಮಾಡಿದ್ದಾರೆ.
