ವರದಿ : ವಿಜಯವಾಣಿ…
ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ಹಾಗೂ ಹರಪನಹಳ್ಳಿ ಉಪವಿಭಾಗದ ವ್ಯಾಪ್ತಿಯಲ್ಲಿ ವಿಜಯನಗರ ಜಿಲ್ಲಾ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ ಸರಣಿ ಕಳವು ಪ್ರಕರಣಗಳನ್ನು ಭೇದಿಸಿ, ಒಟ್ಟು ಸುಮಾರು 27.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಾಹ್ನವಿ (ಐಪಿಎಸ್) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಾಚರಣೆಯ ವೇಳೆ ಹೊಸಪೇಟೆ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 33 ಗ್ರಾಂ ತೂಕದ ಸುಮಾರು 11 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 6 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹರಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಧ್ಯಪ್ರದೇಶ ಮೂಲದ ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಅವರಿಂದ 3.50 ಲಕ್ಷ ರೂ. ಮೌಲ್ಯದ 28 ಗ್ರಾಂ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.
ಚಿತ್ತವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಮನೆಯಲ್ಲಿ ನಡೆದ ಕಳವು ಪ್ರಕರಣವನ್ನು ಭೇದಿಸಿ, 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 4.75 ಲಕ್ಷ ರೂ. ಮೌಲ್ಯದ 9 ಮೋಟಾರ್ ಸೈಕಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2.80 ಲಕ್ಷ ರೂ. ಮೌಲ್ಯದ 35 ಗ್ರಾಂ ತೂಕದ ಚಿನ್ನದ ಸರ ಪತ್ತೆಹಚ್ಚಲಾಗಿದೆ.
ಹೂವಿನಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಗಳ್ಳತನ ಪ್ರಕರಣವನ್ನು ಭೇದಿಸಿ, 3 ಲಕ್ಷ ರೂ. ಮೌಲ್ಯದ 52 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಜಾಹ್ನವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಮಂಜುನಾಥ್ ಕೆ. ಹಾಗೂ ಹೊಸಪೇಟೆ ಡಿವೈಎಸ್ಪಿ ಜಿ. ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಈ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣಗಳನ್ನು ಭೇದಿಸುವಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಎಸ್‌ಪಿ ಜಾಹ್ನವಿ ಶ್ಲಾಘಿಸಿದ್ದಾರೆ.
