[ವರದಿ : ಜಿ ಎಂ ಬಸಯ್ಯ]
ಕುರುಗೋಡು: ಪಟ್ಟಣದ ತಾಲೂಕು ಆಡಳಿತ ಹಾಗೂ ಪುರಸಭೆ ಕಾರ್ಯಾಲಯದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶನಿವಾರ ನಾಡಗೌಡ ಮರಿಬಸವನಗೌಡ ಸ್ಮಾರಕ ಹಾಗೂ ಸರ್ಕಾರಿ ಬಾಲಕರ ಪ್ರೌಢಶಾಲೆ ಮೈದಾನದಲ್ಲಿ ಸಡಗರ-ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ನರಸಪ್ಪ ಮಾತನಾಡಿ, ದೇಶದ ಪ್ರತಿಯೊಬ್ಬ ನಾಗರಿಕರೂ ಸಮಾಜದ ಅಭಿವೃದ್ಧಿ ಹಾಗೂ ದೇಶದ ಪ್ರಗತಿಗಾಗಿ ಶ್ರಮಿಸಬೇಕು. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರ ಪಾತ್ರವೂ ಮಹತ್ವದ್ದಾಗಿದೆ ಎಂದು ಹೇಳಿದರು.
ಶಾಸಕ ಜೆ.ಎನ್. ಗಣೇಶ್ ಮಾತನಾಡಿ, ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ರೈತರ ಪರ ಕಾಳಜಿ ವಹಿಸುವಲ್ಲಿ ಜನಪ್ರತಿನಿಧಿಗಳು ಪ್ರಮುಖ ಪಾತ್ರ ವಹಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು. ಇದೇ ವೇಳೆ ಪಾಲಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ, ಅವರ ಭವಿಷ್ಯ ರೂಪಿಸುವಲ್ಲಿ ಸಹಕರಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷ ಜಿ. ಮಂಜುನಾಥ, ಉಪಾಧ್ಯಕ್ಷೆ ನಾಗವೇಣಿ, ಉಪ ತಹಶೀಲ್ದಾರ್ ಮಲ್ಲೇಶಪ್ಪ, ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಸಿಪಿಐ ಬಾಳನಗೌಡ ಮಾನಶೆಟ್ಟಿ, ಪಿಎಸ್ಐ ಸುಪ್ರೀತ್, ವೀರುಪಾಕ್ಷಪ್ಪ, ತಾಪಂ ಅಧಿಕಾರಿ ಪಂಪಾಪತಿ ಹಿರೇಮಠ, ಪಿಯು ಕಾಲೇಜಿನ ಪ್ರಾಂಶುಪಾಲ ವೇಣುಗೋಪಾಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜುಗಳ ಮುಖ್ಯಸ್ಥರು, ದೈಹಿಕ ಶಿಕ್ಷಕರು ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಸಮಾಜಮುಖಿ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು.
ನಂತರ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ನೃತ್ಯ ಪ್ರದರ್ಶನಗಳು ನೆರೆದಿದ್ದವರ ಗಮನ ಸೆಳೆದವು. ವಿದ್ಯಾರ್ಥಿಗಳ ಅದ್ಭುತ ಪ್ರದರ್ಶನಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
