Wednesday, August 26, 2026
HomeKotturuಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ಬೇಡಿಕೆಗಳ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ

ವರದಿ: ಶಿವರಾಜ್ ಕನ್ನಡಿಗ
ಕೊಟ್ಟೂರು: ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರ ಫೆಡರೇಷನ್‌ನ ಕೊಟ್ಟೂರು ತಾಲ್ಲೂಕು ಘಟಕದ ವತಿಯಿಂದ ಮಂಗಳವಾರ ತಾಲ್ಲೂಕು ಕಚೇರಿಯಲ್ಲಿ ಗ್ರೇಡ್‌–2 ತಹಶೀಲ್ದಾರ್‌ ಎಂ. ಪ್ರತಿಭಾ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಫೆಡರೇಷನ್‌ ತಾಲ್ಲೂಕು ಘಟಕದ ಅಧ್ಯಕ್ಷೆ ಎನ್. ರತ್ನಮ್ಮ, ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಮೂಲ ಕೆಲಸದ ಜತೆಗೆ ಹೆಚ್ಚುವರಿ ಕಾರ್ಯಭಾರವನ್ನು ಹೇರಬಾರದು. ಕಾರ್ಯಕರ್ತೆಯರಿಗೆ ಸಮರ್ಪಕ ಗೌರವಧನ ನೀಡಬೇಕು ಹಾಗೂ ನಿವೃತ್ತರಾಗುವ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ಗ್ರಾಚ್ಯುಟಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಫೆಡರೇಷನ್‌ ಪ್ರಧಾನ ಕಾರ್ಯದರ್ಶಿ ಎ. ದ್ರಾಕ್ಷಾಯಿಣಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ಸಮರ್ಪಕ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು. ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಬೇಕು. ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಅನುಕೂಲವಾಗುವಂತೆ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭಿಸಿ, ಕೇಂದ್ರಗಳನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅಂಗನವಾಡಿ ಕೇಂದ್ರಗಳು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಕ್ಕಳ ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವಪ್ರಾಥಮಿಕ ಶಿಕ್ಷಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಹೀಗಾಗಿ ಕಾರ್ಯಕರ್ತೆಯರು ಮತ್ತು ಸಹಾಯಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿ, ನ್ಯಾಯಯುತ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಫೆಡರೇಷನ್‌ ಪದಾಧಿಕಾರಿಗಳಾದ ಸಂತೋಷ, ಎಚ್. ತಿಪ್ಪಮ್ಮ, ಕೆ.ಎಂ. ಮಂಜುಳಾ, ಬಿ.ಎಸ್. ಬಸಮ್ಮ, ಬಿ. ವಸಂತ, ಎಂ. ಶಾಂತ, ನಿರ್ಮಲಾ, ಪಿ. ಗೀತಾ, ಶೋಭಾ, ನಾಗಮ್ಮ, ಲಕ್ಷ್ಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments