[ವರದಿ. ಜಿ ಎಂ ಬಸಯ್ಯ]
ಕುರುಗೋಡು, ಸೆ. 4: ಕುರುಗೋಡು ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯ ವಿ. ನಟರಾಜ ಅವರು ಅವಿರೋಧವಾಗಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು.
ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಕ್ಷೇತ್ರದ ಶಾಸಕ ಜೆ.ಎನ್. ಗಣೇಶ್, ಪುರಸಭೆಯ ಅಭಿವೃದ್ಧಿ ಕಾರ್ಯಗಳಲ್ಲಿ ಸ್ಥಾಯಿ ಸಮಿತಿಯ ಪಾತ್ರ ಮಹತ್ವದ್ದಾಗಿದೆ. ನೂತನ ಅಧ್ಯಕ್ಷರು ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಪಟ್ಟಣದ ಸ್ವಚ್ಛತೆ, ಕುಡಿಯುವ ನೀರು, ರಸ್ತೆ ಸೇರಿದಂತೆ ಸಾರ್ವಜನಿಕರ ವಿವಿಧ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಪುರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶಾಸಕ ಗಣೇಶ್ ತಿಳಿಸಿದರು.
ಸರ್ಕಾರದ ವಿವಿಧ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಪುರಸಭೆ ಆಡಳಿತ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಶೀಘ್ರವಾಗಿ ಸ್ಪಂದಿಸುವ ಮೂಲಕ ಜನಪರ ಆಡಳಿತಕ್ಕೆ ಒತ್ತು ನೀಡಬೇಕು ಎಂದು ಅವರು ಹೇಳಿದರು.
ನೂತನ ಅಧ್ಯಕ್ಷ ವಿ. ನಟರಾಜ ಮಾತನಾಡಿ, ತಮ್ಮನ್ನು ಅವಿರೋಧವಾಗಿ ಆಯ್ಕೆ ಮಾಡಿದ ಪುರಸಭೆಯ ಎಲ್ಲ ಸದಸ್ಯರು ಹಾಗೂ ಶಾಸಕ ಜೆ.ಎನ್. ಗಣೇಶ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ತಮಗೆ ವಹಿಸಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ಭರವಸೆ ನೀಡಿದರು.
23 ವಾರ್ಡ್‌ಗಳಿಗೆ ಅಧಿಕಾರಿಗಳ ತಂಡ ಭೇಟಿ
ಮುಂದಿನ ವಾರದಿಂದ ಪುರಸಭೆಯ ವ್ಯಾಪ್ತಿಯ ಎಲ್ಲ 23 ವಾರ್ಡ್‌ಗಳಿಗೆ ಪುರಸಭೆ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಭೇಟಿ ನೀಡುವ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಾರ್ಡ್‌ವಾರು ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ಸಾಧ್ಯವಾದಷ್ಟು ತ್ವರಿತವಾಗಿ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಟರಾಜ ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಜಿ. ಮಂಜುನಾಥ್, ಉಪಾಧ್ಯಕ್ಷೆ ನಾಗವೇಣಿ, ಪುರಸಭೆ ಸದಸ್ಯರು, ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಪುರಸಭೆ ಅಧಿಕಾರಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
