Thursday, October 1, 2026
HomeVijayanagaraಸಪಾಯಿ ಮಿತ್ರರಿಗೆ ಗೌರವ, ಆರೋಗ್ಯ ತಪಾಸಣಾ ಶಿಬಿರ

ಸಪಾಯಿ ಮಿತ್ರರಿಗೆ ಗೌರವ, ಆರೋಗ್ಯ ತಪಾಸಣಾ ಶಿಬಿರ

ಹಗರಿಬೊಮ್ಮನಹಳ್ಳಿ, ಸೆ. 30: ಸ್ವಚ್ಛತಾ ಕಾರ್ಯಕರ್ತರ ಸೇವೆಯನ್ನು ಗುರುತಿಸಿ, ಅವರ ಆರೋಗ್ಯ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಿಂದ ‘ಸ್ವಚ್ಛತಾ ಹಿ ಸೇವಾ–2026’ ಅಭಿಯಾನದ ಅಂಗವಾಗಿ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಹಾಲಾಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾಗಿಮಾವಿನಹಳ್ಳಿಯಲ್ಲಿ ಸಪಾಯಿ ಮಿತ್ರ ಸುರಕ್ಷತೆ ಮತ್ತು ಗೌರವ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಪಂಚಾಯಿತಿ ವಿಜಯನಗರದ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಆಯೋಜಿಸಿದ್ದ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್ ಪಿ.ಕೆ. ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ‘ಸ್ವಚ್ಛತಾ ಹಿ ಸೇವಾ’ ಕೇವಲ ಸ್ವಚ್ಛತಾ ಅಭಿಯಾನವಲ್ಲ. ಗ್ರಾಮಗಳ ಸ್ವಚ್ಛತೆಗಾಗಿ ಪ್ರತಿದಿನ ಶ್ರಮಿಸುವ ಸಪಾಯಿ ಮಿತ್ರರ ಸೇವೆಯನ್ನು ಗುರುತಿಸಿ, ಅವರ ಆರೋಗ್ಯ, ಸುರಕ್ಷತೆ ಮತ್ತು ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆಯಾಗಿದೆ ಎಂದರು.

ಸ್ವಚ್ಛ ಗ್ರಾಮ ಹಾಗೂ ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ಸ್ವಚ್ಛತಾ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿದೆ. ಸಾರ್ವಜನಿಕರಿಗೆ ಸೇವೆ ಸಲ್ಲಿಸುವ ಸಿಬ್ಬಂದಿ ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಆರೋಗ್ಯ ತಪಾಸಣೆ ಹಾಗೂ ಸುರಕ್ಷತಾ ಕ್ರಮಗಳನ್ನು ನಿರಂತರವಾಗಿ ಪಾಲಿಸುವ ಮೂಲಕ ಸುರಕ್ಷಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

‘ಸ್ವಚ್ಛ ಗ್ರಾಮ ನಿರ್ಮಾಣದ ಹಿಂದೆ ಸ್ವಚ್ಛತಾ ಕಾರ್ಯಕರ್ತರ ಪರಿಶ್ರಮವಿದೆ. ಅವರ ಶ್ರಮಕ್ಕೆ ಗೌರವ ನೀಡುವುದರ ಜತೆಗೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಸುರಕ್ಷಿತವಾಗಿ ಕೆಲಸ ಮಾಡಲು ಅಗತ್ಯ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ’ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಸಿಬ್ಬಂದಿ ಹಾಗೂ ಸಪಾಯಿ ಮಿತ್ರರನ್ನು ಗೌರವಿಸಿ ಸನ್ಮಾನಿಸಲಾಯಿತು. ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಸಿಬ್ಬಂದಿಗೆ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಗತ್ಯ ಸಲಹೆಗಳನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಹಾಲಾಗಪುರ, ದಶಮಾಪುರ, ಹಂಪಾಪಟ್ಟಣ ಹಾಗೂ ಮರಬ್ಬಿಹಾಳ್ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯಿತಿ ಕಾರ್ಯದರ್ಶಿಗಳು, ಸಿಬ್ಬಂದಿ, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಸ್ವಚ್ಛತಾ ಸಿಬ್ಬಂದಿಯ ಸೇವೆಯನ್ನು ಗುರುತಿಸಿ ಗೌರವಿಸುವುದು, ಅವರ ಆರೋಗ್ಯ ಮತ್ತು ಸುರಕ್ಷತೆಗೆ ಆದ್ಯತೆ ನೀಡುವುದು ಹಾಗೂ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಸ್ವಚ್ಛ ಮತ್ತು ಆರೋಗ್ಯಕರ ಗ್ರಾಮಗಳನ್ನು ನಿರ್ಮಿಸುವ ಸಂಕಲ್ಪದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments