ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಚಿಲಕನಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟಿ. ಬಸಾಪುರ ಗ್ರಾಮದ ಟಿ.ಬಿ. ತಾಂಡದಲ್ಲಿ ಬಸಾಪುರ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ಕೂಲಿ ಕಾರ್ಮಿಕರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಸೋಮವಾರ ಆಯೋಜಿಸಲಾಗಿತ್ತು.
ಗ್ರಾಮ ಆರೋಗ್ಯ ಅಭಿಯಾನದಡಿ ನಡೆದ ಶಿಬಿರದಲ್ಲಿ VBG RAM G ಯೋಜನೆಯ 106 ಮಂದಿ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು. ರಕ್ತದೊತ್ತಡ, ಸಕ್ಕರೆ ಕಾಯಿಲೆ, ಕ್ಷಯರೋಗ ಸೇರಿದಂತೆ ವಿವಿಧ ಅಸಾಂಕ್ರಾಮಿಕ ರೋಗಗಳ ತಪಾಸಣೆ ಮಾಡಲಾಯಿತು. ಜೊತೆಗೆ ಮಾನಸಿಕ ಆರೋಗ್ಯ ಹಾಗೂ ಸಂಭವನೀಯ ಆರೋಗ್ಯ ಸಮಸ್ಯೆಗಳ ಕುರಿತು ಕಾರ್ಮಿಕರಿಗೆ ಅರಿವು ಮೂಡಿಸಲಾಯಿತು.
ಶಿಬಿರದಲ್ಲಿ ಮಾತನಾಡಿದ ಹೊಸಪೇಟೆ ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕಿ ಕವಿತಾ ಕರ್ಣಂ, ಕೂಲಿ ಕಾರ್ಮಿಕರ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಇಂತಹ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮರಿಯಮ್ಮನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಕೃಷ್ಣ ಮಾತನಾಡಿ, ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಿಡಿಒ ಬಸಮ್ಮ ಮಾತನಾಡಿ, ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ತೆರಳಿ ಆರೋಗ್ಯ ತಪಾಸಣೆ ನಡೆಸಲಾಗುತ್ತಿದ್ದು, ಶಿಬಿರದ ಮೂಲಕ ಅಗತ್ಯ ತಪಾಸಣೆ ಹಾಗೂ ಆರೋಗ್ಯ ಸಲಹೆಗಳನ್ನು ನೀಡಲಾಗುತ್ತಿದೆ ಎಂದರು.
ಶಿಬಿರದಲ್ಲಿ ತಪಾಸಣೆ ನಡೆಸಿದ ಕಾರ್ಮಿಕರಿಗೆ ಉಚಿತ ಔಷಧಿಗಳನ್ನು ವಿತರಿಸಲಾಯಿತು. ಇದರ ಸದುಪಯೋಗವನ್ನು ಕೂಲಿ ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ತಾಲೂಕು ಐಇಸಿ ಸಂಯೋಜಕ ಹೆಚ್. ನಾಗರಾಜ್ ತಿಳಿಸಿದರು.
ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ಆನಂದ್ ಕುಮಾರ್, ತಾಂತ್ರಿಕ ಸಹಾಯಕಿ ಮಂಜುಳಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ನವೀನ್, ಸೀನಿಯರ್ ಇನ್ಸ್‌ಪೆಕ್ಟರ್‌ಗಳಾದ ಅನಿಲ್ ಮತ್ತು ಸರ್ದಾರ್, PHCO ಹಸೀನಾ, ಆಶಾ ಕಾರ್ಯಕರ್ತೆಯರು, ಗ್ರಾಪಂ ಕಾರ್ಯದರ್ಶಿ ನಾಗರತ್ನ, ಡಿಇಒ ಕೊಟ್ರೇಶ್, ಬಿಎಫ್‌ಟಿ ಸೋಮಣ್ಣ, ಕಾಯಕ ಬಂಧುಗಳು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.
