Tuesday, October 13, 2026
HomeVijayanagaraಡಣನಾಯಕನಕೆರೆ ಗ್ರಾಮ ಪಂಚಾಯಿತಿಯಿಂದ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರ

ಡಣನಾಯಕನಕೆರೆ ಗ್ರಾಮ ಪಂಚಾಯಿತಿಯಿಂದ ಕೂಲಿಕಾರರಿಗೆ ಆರೋಗ್ಯ ತಪಾಸಣೆ ಶಿಬಿರ

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಡಣನಾಯಕನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯಡಿ ಕೆರೆ ಪುನಶ್ಚೇತನ ಕಾಮಗಾರಿಯಲ್ಲಿ ತೊಡಗಿರುವ ಕೂಲಿಕಾರರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.

ತಾಲ್ಲೂಕಿನ 114 ಡಣಾಪುರ ಗ್ರಾಮದ ಹೊರವಲಯದಲ್ಲಿರುವ ವ್ಯಾಸನಕೆರೆ ಪುನಶ್ಚೇತನ ಕಾಮಗಾರಿ ಸ್ಥಳದಲ್ಲಿ ಸೋಮವಾರ ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿಲಾನ್ ಸಾಹೇಬ್ ಅವರು, ‘ಕೂಲಿಕಾರರು ಕೆಲಸದ ಜೊತೆಗೆ ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು. ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನಿರ್ದೇಶನ ಹಾಗೂ ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಮಾರ್ಗದರ್ಶನದಂತೆ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ವರ್ಷ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಬಿಸಿಲಿನಲ್ಲಿ ನಿರಂತರವಾಗಿ ಕೆಲಸ ಮಾಡುವ ಕೂಲಿಕಾರರಿಗೆ ತಲೆಸುತ್ತು, ರಕ್ತದೊತ್ತಡ ಹೆಚ್ಚಳ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಅಲ್ಲದೆ, ದಿನವಿಡೀ ಕೆಲಸದಲ್ಲಿ ತೊಡಗಿರುವ ಕಾರ್ಮಿಕರಿಗೆ ಆಸ್ಪತ್ರೆಗಳಿಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಸಮಯದ ಕೊರತೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆ ನಡೆಸುವ ಮೂಲಕ ಕಾರ್ಮಿಕರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಹೇಳಿದರು.

ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ನಡೆಸಲಾಯಿತು. ವಾಂತಿ ಮತ್ತು ಭೇದಿ ಪ್ರಕರಣಗಳ ಕುರಿತೂ ಪರಿಶೀಲನೆಗೆ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ವೈದ್ಯಾಧಿಕಾರಿಗಳು, ಶ್ರಮಿಕರು ದೈನಂದಿನ ದುಡಿಮೆಯ ಜೊತೆಗೆ ತಮ್ಮ ದೈಹಿಕ ಆರೋಗ್ಯದ ಬಗ್ಗೆಯೂ ಗಮನಹರಿಸಬೇಕು. ಸಣ್ಣಪುಟ್ಟ ಕಾಯಿಲೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಆದ್ದರಿಂದ ರಕ್ತದೊತ್ತಡ, ಮಧುಮೇಹ ಸೇರಿದಂತೆ ಅಗತ್ಯ ಆರೋಗ್ಯ ಪರೀಕ್ಷೆಗಳನ್ನು ಕಾಲಕಾಲಕ್ಕೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ. ರಾಧಾಕೃಷ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನವೀನ್, ಫಾರ್ಮಸಿ ಅಧಿಕಾರಿ ಜೇಷ್ಠ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಭಾಸ್ಕರ್, ಅನಿಲ್ ಮತ್ತು ಸದ್ದಾಂ ಹುಸೇನ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಶಾರದಮ್ಮ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಿ. ನಾಗರಾಜ್, ತಾಲ್ಲೂಕು ಪಂಚಾಯಿತಿಯ ಐಇಸಿ ಸಂಯೋಜಕ ಹೆಚ್. ನಾಗರಾಜ್, ಡಿಇಒ ಸೋಮಣ್ಣ, ಬಿಎಫ್‌ಟಿ ಶಿವಾನಂದ, ಜಿಕೆಎಂ ಮಂಜುಳಾ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -

Most Popular

Recent Comments